ಮತ ಎಣಿಕೆ ಕೇಂದ್ರ: ಸಿದ್ಧತೆ ಪರಿಶೀಲನೆ

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಕೇಂದ್ರ ಸ್ಥಾಪನೆಗೆ ಸಂಬಂಧಿಸಿದಂತೆ ನಗರದ ಟಿಳಕವಾಡಿಯ ಆರ್.ಪಿ.ಡಿ. ಕಾಲೇಜಿನ ಆವರಣದಲ್ಲಿರುವ ವಿವಿಧ ಕಟ್ಟಡಗಳನ್ನು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಶುಕ್ರವಾರ ಪರಿಶೀಲಿಸಿದರು.
ಸ್ಟ್ರಾಂಗ್ ರೂಂ ಹಾಗೂ ಮತ ಎಣಿಕೆ ಕೇಂದ್ರ ರೂಪಿಸುವುದಕ್ಕೆ ಸಂಬಂಧಿಸಿದಂತೆ ವಿವಿಧ ಕೊಠಡಿಗಳನ್ನು ಪರಿಶೀಲಿಸಿ, ಮೂಲಸೌಕರ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ‘ವಿದ್ಯಾರ್ಥಿಗಳಿಗೆ ಹಾಗೂ ದೈನಂದಿನ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ವ್ಯವಸ್ಥೆ ಕಲ್ಪಿಸಲಾಗುವುದು’ ಎಂದು ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳಿಗೆ ತಿಳಿಸಿದರು.
‘ಸ್ಟ್ರಾಂಗ್ ರೂಂ ನಿರ್ಮಾಣ ಹಾಗೂ ಬ್ಯಾರಿಕೇಡಿಂಗ್‌ಗೆ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.
‘ಕಟ್ಟಡಗಳನ್ನು ಗುರುತಿಸಿ ಅಂತಿಮಗೊಳಿಸಿದರೆ ನಿಗದಿತ ಕಾಲಾವಧಿಯಲ್ಲಿ ಎಲ್ಲ ವ್ಯವಸ್ಥೆ ಕಲ್ಪಿಸಲಾಗುವುದು’ ಎಂದು ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಸಂಜೀವಕುಮಾರ್ ಹುಲಕಾಯಿ ತಿಳಿಸಿದರು.
ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್, ಎಸ್ಪಿ ಲಕ್ಷ್ಮಣ ನಿಂಬರಗಿ, ಡಿಸಿಪಿ ಡಾ.ವಿಕ್ರಂ ಅಮಟೆ, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಉಪ ವಿಭಾಗಾಧಿಕಾರಿ ಅಶೋಕ ತೇಲಿ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ, ಮಹಾನಗರ ಪಾಲಿಕೆ ಆಯುಕ್ತ ಕೆಎಚ್. ಜಗದೀಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕ ಗುರುನಾಥ ಕಡಬೂರ, ತಹಶಿಲ್ದಾರ ಆರ್.ಕೆ. ಕುಲಕರ್ಣಿ ಪಾಲ್ಗೊಂಡಿದ್ದರು.
ಚುನಾವಣಾ ಮಾಹಿತಿಗೆ ನಿಯಂತ್ರಣ ಕೊಠಡಿ
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ ಆಗಿರುವ ಹಿನ್ನೆಲೆಯಲ್ಲಿ ಬೆಳಗಾವಿ ಉತ್ತರ ಹಾಗೂ ದಕ್ಷಿಣ ವಿಧಾನಸಭಾ ಮತಕ್ಷೇತ್ರಗಳಿಗೆ ಸಂಬಂಧಿಸಿದಂತೆ ದಿನದ 24 ಗಂಟೆಯೂ ಮಾಹಿತಿ ಒದಗಿಸಲು ನಿಯಂತ್ರಣ ಕೊಠಡಿ ತೆರೆಯಲಾಗಿದೆ.
ಸಾರ್ವಜನಿಕರಿಗೆ ಚುನಾವಣಾ ವಿಷಯಗಳ ಕುರಿತು ಯಾವುದೇ ಮಾಹಿತಿ ಪಡೆಯಲು ಅಥವಾ ದೂರುಗಳನ್ನು ನೀಡಲು ಮಹಾನಗರ ಪಾಲಿಕೆಯ ಮುಖ್ಯ ಕಚೇರಿಯಲ್ಲಿ ಕೊಠಡಿ ಕಾರ್ಯನಿರ್ವಹಿಸಲಿದೆ. ದೂ: 0831-2405337, 0831-2405300 ಅಥವಾ ಮೊ:9481504229 ಸಂಪರ್ಕಿಸಬಹುದು ಎಂದು ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.