ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ತುರ್ತು ಸ್ಥಿತಿ ನಿರ್ವಹಣೆಗೆ ಸಿದ್ಧತೆ

ವೇದಗಂಗಾ ನದಿ ಪಾತ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ
Last Updated 18 ಜೂನ್ 2021, 16:39 IST
ಅಕ್ಷರ ಗಾತ್ರ

ಬೆಳಗಾವಿ: ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ವೇದಗಂಗಾ ನದಿ ಪಾತ್ರದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ನಿಪ್ಪಾಣಿ ಸಮೀಪದ ಜತ್ರಾಟ ಹಾಗೂ ಅಕ್ಕೋಳ ಸುತ್ತಮುತ್ತಲಿನ ಪ್ರದೇಶಗಳಿಗೆ ಶುಕ್ರವಾರ ಭೇಟಿ ನೀಡಿದ ವೇದಗಂಗಾ ನದಿ ಹರಿವು ಪ್ರಮಾಣವನ್ನು ವೀಕ್ಷಿಸಿದರು. ಈ ವೇಳೆ ಅಧಿಕಾರಿಗಳ ಜೊತೆ ಚರ್ಚಿಸಿದ ಅವರು, ‘ನದಿ ನೀರಿನ‌ ಪ್ರಮಾಣ ಹೆಚ್ಚಾದರೆ ಮುಂಜಾಗ್ರತಾ ಕ್ರಮವಾಗಿ ನದಿ ತೀರದ ಗ್ರಾಮಗಳ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು’ ಎಂದು ಸೂಚಿಸಿದರು.

‘ಸಂಭವನೀಯ ಪ್ರವಾಹ ‌ಹಾಗೂ ಅತಿವೃಷ್ಟಿಯಂತಹ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿದೆ. ಸದ್ಯಕ್ಕೆ ಪ್ರವಾಹ ಭೀತಿ ಇಲ್ಲ. ಆದಾಗ್ಯೂ ನದಿಗಳ ನೀರಿನ ಮಟ್ಟ ಹಾಗೂ ಮಳೆಯ ಪ್ರಮಾಣದ ಮೇಲೆ‌ ಸಂಬಂಧಿಸಿದ ಅಧಿಕಾರಿಗಳು ನಿರಂತರ ನಿಗಾ ವಹಿಸಬೇಕು’ ಎಂದು ತಿಳಿಸಿದರು.

‘ನದಿ ತೀರದ ಗ್ರಾಮಗಳ‌ ಜನರಿಗೆ ಆಗಾಗ ಸೂಕ್ತ ಮುನ್ನೆಚ್ಚರಿಕೆ ನೀಡುತ್ತಿರಬೇಕು. ಒಂದು ವೇಳೆ ಪ್ರವಾಹ ಸ್ಥಿತಿ ಉದ್ಭವಿಸಿದರೆ ತಡ ಮಾಡದೆ ಜನರು ಹಾಗೂ ಜಾನುವಾರು ಸ್ಥಳಾಂತರಿಸಬೇಕು. ಪ್ರವಾಹ ಭೀತಿ ಎದುರಿಸುತ್ತಿರುವ ಜಿಲ್ಲೆಯ 377 ಗ್ರಾಮಗಳ ಜನರನ್ನು ತುರ್ತು ಸಂದರ್ಭದಲ್ಲಿ ಸ್ಥಳಾಂತರಿಸಲು ಅಗತ್ಯವಿರುವ ಪರಿಹಾರ ಕೇಂದ್ರಗಳನ್ನು ಈಗಾಗಲೇ ಗುರುತಿಸಲಾಗಿದೆ. ಸಮೀಪದಲ್ಲಿರುವ ನಿಗದಿತ ಕಾಳಜಿ ಕೇಂದ್ರಗಳಿಗೆ ಜನರನ್ನು ಸ್ಥಳಾಂತರಿಸಬೇಕು’ ಎಂದು ಸೂಚಿಸಿದರು.

ಚಿಕ್ಕೋಡಿ ಉಪ ವಿಭಾಗಾಧಿಕಾರಿ ಯುಕೇಶ್‌ಕುಮಾರ್ ಇದ್ದರು.

ಮುಖ್ಯಮಂತ್ರಿ ಕರೆ:

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗೆ ಕರೆ ಮಾಡಿ ಮಳೆಯ ಮಾಹಿತಿ ಪಡೆದರು. ಪ್ರವಾಹ ಪರಿಸ್ಥಿತಿ ನಿರ್ವಹಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

‘ಸದ್ಯಕ್ಕೆ ಪ್ರವಾಹ ಪರಿಸ್ಥಿತಿ ಇಲ್ಲ. ಕೆಲವೆಡೆ ಕೆಳಹಂತದ ಸೇತುವೆಗಳು ಮುಳುಗಿವೆ. ಪರ್ಯಾಯ ಮಾರ್ಗ ಇರುವುದರಿಂದ ಜನರಿಗೆ ತೊಂದರೆ ಆಗಿಲ್ಲ. ಪರಿಸ್ಥಿತಿಯ ಮೇಲೆ ನಿಗಾ ವಹಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT