ಶುಕ್ರವಾರ, ಸೆಪ್ಟೆಂಬರ್ 24, 2021
23 °C

ಮಹಾನಗರಪಾಲಿಕೆ ಚುನಾವಣೆ: ಸಿದ್ಧತೆ ಅರಂಭಿಸಿದ ಅಧಿಕಾರಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಇಲ್ಲಿನ ಮಹಾನಗರಪಾಲಿಕೆಯ ಸಾರ್ವತ್ರಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗುತ್ತಿದ್ದಂತೆಯೇ ಅಧಿಕಾರಿಗಳು ಪೂರ್ವ ಸಿದ್ಧತೆ ಆರಂಭಿಸಿದ್ದಾರೆ.

ಮಹಾನಗರಪಾಲಿಕೆಯ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಗುರುವಾರ ವಿವಿಧ ಶಾಖೆಗಳ ಮುಖ್ಯಸ್ಥರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣೆಗೆ ಬೇಕಾದ ಎಲ್ಲ ತಯಾರಿಯನ್ನೂ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ಎಲ್ಲ 58 ವಾರ್ಡ್‌ಗಳ ವ್ಯಾಪ್ತಿಯಲ್ಲೂ ಮಾದರಿ ನೀತಿಸಂಹಿತೆ ಪಾಲನೆಗೆ ಕ್ರಮ ವಹಿಸಬೇಕು ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಉಪ ಆಯುಕ್ತೆ ಲಕ್ಷ್ಮಿ ನಿಪ್ಪಾಣಿಕರ ಇದ್ದರು.

ಚುನಾವಣೆ ಮುಂದೂಡಲು ಆಗ್ರಹ

ಬೆಳಗಾವಿ: ಮಹಾನಗರ ಪಾಲಿಕೆ ಚುನಾವಣೆಯನ್ನು ಕನಿಷ್ಠ 6 ತಿಂಗಳವರೆಗೆ ಮುಂದೂಡುವಂತೆ ರಾಜ್ಯ ಚುನಾವಣಾ ಆಯೋಗವನ್ನು ಆಗ್ರಹಿಸಿ ಜಿಲ್ಲಾ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರ ಸಂಘ ಮತ್ತು ನಾಗರಿಕರ ವೇದಿಕೆ ಪದಾಧಿಕಾರಿಗಳು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.

‘ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ ಅಂಗಡಿ ಅವರ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯನ್ನು ಕೋವಿಡ್ ಭೀತಿಯ ನಡುವೆಯೇ ನಡೆಸಲಾಯಿತು. ಆಗ ಕರ್ತವ್ಯ ನಿರ್ವಹಿಸಿದ್ದ ಹಲವು ನೌಕರರು ಸೋಂಕಿನಿಂದ ಸಾವಿಗೀಡಾದರು. ಈಗ ಕೋವಿಡ್ 3ನೇ ಅಲೆ ಭೀತಿ ಇರುವಾಗ ಚುನಾವಣೆ ನಡೆಸಲು ಮುಂದಾಗಿರುವುದು ಸರಿಯಲ್ಲ. ನೌಕರರು ಮತ್ತು ಜನರ ಆರೋಗ್ಯದ ದೃಷ್ಟಿಯಿಂದ ಚುನಾವಣೆ ಮುಂದೂಡಬೇಕು’ ಎಂದು ಒತ್ತಾಯಿಸಿದರು.

‘ನಗರದ ಕೆಲವು ಮತದಾರರು ಮಹಾರಾಷ್ಟ್ರದ ಕೊಲ್ಹಾಪುರ, ಸಾಂಗ್ಲಿ, ಮೀರಜ್, ಪುಣೆ, ಮುಂಬೈ ಮೊದಲಾದ ಕಡೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಮತ ಹಕ್ಕು ಚಲಾಯಿಸಲು ನಗರಕ್ಕೆ ಬರಬೇಕಾಗುತ್ತದೆ. ಆ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿವೆ. ಅಲ್ಲಿಂದ ಜನರು ಇಲ್ಲಿಗೆ ಬಂದರೆ ಸೋಂಕು ವ್ಯಾಪಿಸುವ ಸಾಧ್ಯತೆ ಇದೆ. ಇದೆಲ್ಲವನ್ನೂ ಗಂಭೀರವಾಗಿ ಪರಿಗಣಿಸಬೇಕು’ ಎಂದು ಕೋರಿದರು.

ವಕೀಲ ಎನ್.ಆರ್. ಲಾತೂರ, ನಾಗರಿಕರ ವೇದಿಕೆಯ ಸತೀಶ ತೆಂಡೂಲ್ಕರ್, ಸೇವಂತಿಲಾಲ ಶಾಹ, ವಿಕಾಸ ಕಲಘಟಗಿ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು