ಶುಕ್ರವಾರ, ಆಗಸ್ಟ್ 6, 2021
21 °C
ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಸೂಚನೆ

ಕೋವಿಡ್ 3ನೇ ಅಲೆ ನಿರ್ವಹಣೆಗೆ ಸಜ್ಜಾಗಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗೋಕಾಕ (ಬೆಳಗಾವಿ ಜಿಲ್ಲೆ): ‘ಸಂಭವನೀಯ ಕೋವಿಡ್ 3ನೇ ಹಾಗೂ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು’ ಎಂದು ಕೆಎಂಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚಿಸಿದರು.

ಇಲ್ಲಿನ ತಾ.ಪಂ. ಸಭಾಂಗಣದಲ್ಲಿ ಶುಕ್ರವಾರ ನಡೆದ ಗೋಕಾಕ ಹಾಗೂ ಮೂಡಲಗಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ  ಅವರು ಮಾತನಾಡಿದರು.

‘ಜುಲೈ ಕೊನೆಯಿಂದ ಆಗಸ್ಟ್ ಅಂತ್ಯದವರೆಗೆ ಪ್ರವಾಹ ಭೀತಿ ಎದುರಾಗುವ ಸಾಧ್ಯತೆ ಇದೆ. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು. ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು. ಅವಘಡಗಳಿಗೆ ಅವಕಾಶ ಕೊಡಬಾರದು’ ಎಂದು ನಿರ್ದೇಶನ ನೀಡಿದರು.

‘ನೆರೆಯ ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಸಂಭವನೀಯ ಕೊರೊನಾ ಮೂರನೇ ಅಲೆ ಹರಡುತ್ತಿರುವ ಕುರಿತು ವರದಿಯಾಗುತ್ತಿದೆ. ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳಾದ್ಯಂತ ಅಂತಹ ಅಲೆ ಪಸರಿಸದಂತೆ ತಡೆಯಲು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ತಿಳಿಸಿದರು.

‘ನಗರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆಗೆ ಕ್ರಮ ಜರುಗಿಸಲಾಗಿದೆ. ಇಷ್ಟರಲ್ಲೇ ಇನ್ನೊಂದು ಘಟಕ ಮಂಜೂರಾಗಲಿದೆ. ಏಕ ಕಾಲಕ್ಕೆ 200 ರೋಗಿಗಳಿಗೆ ಆಮ್ಲಜನಕ ಪೂರೈಕೆಯೊಂದಿಗೆ ಚಿಕಿತ್ಸೆ ನೀಡಬಹುದಾಗಿದೆ ಎಂದು ವಿವರಿಸಿದರು.

‘ಶಾಸಕರ ನಿಧಿಯಿಂದ ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳಿಗೆ ಅಗತ್ಯ ಆಂಬ್ಯುಲೆನ್ಸ್‌ಗಳ ವ್ಯವಸ್ಥೆ ಮಾಡಲಾಗಿದೆ. ತುರ್ತು ಚಿಕಿತ್ಸೆ ನೀಡಲು ಅವುಗಳಲ್ಲಿ ಆಮ್ಲಜನಕ ಯಂತ್ರ ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತಿದೆ. ಅಲೆ ಎದುರಿಸಲು ಆರೋಗ್ಯ ಇಲಾಖೆ ಸಮಗ್ರವಾಗಿ ಸನ್ನದ್ಧವಾಗಬೇಕು’ ಎಂದು ತಿಳಿಸಿದರು.

ಟಿಎಚ್‌ಒ ಡಾ.ಮುತ್ತಣ್ಣ ಕೊಪ್ಪದ, ಡಾ.ಆರ್.ಎಸ್. ಬೆಣಚಿನಮರಡಿ, ಗೋಕಾಕ ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ, ಮೂಡಲಗಿ ತಹಶೀಲ್ದಾರ್ ಡಿ.ಜಿ. ಮಹಾತ್, ಎಸ್.ಐ. ನಾಗರಾಜ ಖಿಲಾರೆ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು