ಭಾನುವಾರ, 3 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಚ್ಚಿನ ಲಾಭ ಸಿಗಬೇಕಾದರೆ ಗುಣಮಟ್ಟದ ವಸ್ತುಗಳನ್ನು ತಯಾರಿಸಿ: ಸಿ.ಎಂ ಸಿದ್ದರಾಮಯ್ಯ

Published 7 ಡಿಸೆಂಬರ್ 2023, 14:30 IST
Last Updated 7 ಡಿಸೆಂಬರ್ 2023, 14:30 IST
ಅಕ್ಷರ ಗಾತ್ರ

ಬೆಳಗಾವಿ: ‘ಮಹಿಳೆಯರು ತಯಾರಿಸಿದ ವಸ್ತುಗಳಿಗೆ ಸೂಕ್ತ ಮಾರುಕಟ್ಟೆ ಹಾಗೂ ನ್ಯಾಯಯುತವಾದ ದರ ಸಿಗಬೇಕು. ಆಗ ಮಹಿಳೆಯರು ಆರ್ಥಿಕವಾಗಿ ಸದೃಢವಾಗಲು ಸಾಧ್ಯ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಲ್ಲಿನ ಸರ್ಕಾರಿ ಸರ್ದಾರ್ಸ್‌ ಪ್ರೌಢಶಾಲೆ ಮೈದಾನದಲ್ಲಿ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ರಾಜ್ಯ ಜೀವನೋಪಾಯ ಅಭಿಯಾನ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಒಂದು ವಾರ ನಡೆಯಲಿರುವ ‘ಮಹಿಳಾ ಸ್ವಸಹಾಯ ಸಂಘಗಳ ಉತ್ಪನ್ನಗಳ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.

‘ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭ ಸಿಗಬೇಕಾದರೆ, ಗುಣಮಟ್ಟದ ಉತ್ಪನ್ನಗಳನ್ನು ಸಿದ್ಧಪಡಿಸಬೇಕು. ಸ್ಪರ್ಧಾತ್ಮಕ ಜಗತ್ತಿನಲ್ಲಿ ನಮ್ಮ ಅಸ್ತಿತ್ವ ಕಾಪಾಡಿಕೊಳ್ಳಬೇಕು. ಉತ್ತಮ ವಸ್ತುಗಳ ತಯಾರಿಕೆಗೆ ಅಗತ್ಯವಿರುವ ತಾಂತ್ರಿಕ ಜ್ಞಾನವನ್ನು ಇಲಾಖೆ ನೀಡುತ್ತದೆ’ ಎಂದ ಅವರು, ‘ಶೇ.50ರಷ್ಟಿರುವ ಮಹಿಳೆಯರು ಈ ಹಿಂದೆ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ದೌರ್ಜನ್ಯ, ಶೋಷಣೆಗೆ ಒಳಗಾಗಿರುವ ಈ ವರ್ಗ ಶಿಕ್ಷಣ ಪಡೆದು ಆರ್ಥಿಕವಾಗಿ ಸಬಲರಾಗಬೇಕು. ದೇಶದ ಜಿಡಿಪಿಗೆ ಕೊಡುಗೆ ನೀಡಬೇಕು’ ಎಂದು ಕರೆ ನೀಡಿದರು.

‘ಸ್ವಸಹಾಯ ಸಂಘಗಳಿಗೆ ನೆರವಾಗುವ ದೃಷ್ಟಿಯಿಂದ ಈ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿದೆ. ಕಳೆದ ವರ್ಷ ಈ ಮೇಳದಲ್ಲಿ ₹3 ಕೋಟಿ ವಹಿವಾಟು ನಡೆದಿತ್ತು. ಈ ಬಾರಿಯೂ ಸಂಘಗಳು ಇದರ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಕರೆಕೊಟ್ಟರು.

‘ಪ್ರತಿ ಸ್ವಸಹಾಯ ಸಂಘಕ್ಕೆ ತಲಾ ₹1 ಲಕ್ಷದಂತೆ ₹131 ಕೋಟಿ ನೆರವು ಒದಗಿಸಿದ್ದೇವೆ. ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸಲು ಎಲ್ಲ ಕ್ರಮ ಕೈಗೊಂಡಿದ್ದೇವೆ’ ಎಂದು ಹೇಳಿದರು.

ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಮಹಿಳಾ ಸ್ವ ಸಹಾಯ ಸಂಘಗಳಿಗೆ ಸಂಜೀವಿನಿ ಯೋಜನೆಯಡಿ ಚೆಕ್ ವಿತರಿಸಿದರು.

ಶಾಸಕ ಆಸೀಫ್ ಸೇಠ್ ಅಧ್ಯಕ್ಷತೆ ವಹಿಸಿದ್ದರು. ಕೌಶಲಾಭಿವೃದ್ಧಿ ಸಚಿವ ಶರಣಪ್ರಕಾಶ ಪಾಟೀಲ, ‌ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೊಯರ್, ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ನಿರ್ದೇಶಕಿ ಪಿ.ಐ.ವಿದ್ಯಾ, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT