ಬೆಳಗಾವಿ: ‘ಜಿಲ್ಲೆಯ ಬಹುಪಾಲು ಗ್ರಾಮಗಳಿಗೆ ಸ್ಮಶಾನ ಭೂಮಿ ಒದಗಿಸಲಾಗಿದೆ. ಎಲ್ಲಿ ಸಾರ್ವಜನಿಕ ಸ್ಮಶಾನ ಭೂಮಿ ಇಲ್ಲವೋ ಅಲ್ಲಿ ಖಾಸಗಿ ಜಮೀನು ಖರೀದಿಸಲಾಗುವುದು. ಆದರೆ, ಕೆಲವೆಡೆ ನಿರ್ದಿಷ್ಟ ಸಮುದಾಯದವರು ತಮಗೆ ಪ್ರತ್ಯೇಕ ಸ್ಮಶಾನ ಭೂಮಿ ನೀಡುವಂತೆ ಬೇಡಿಕೆ ಸಲ್ಲಿಸಿದ್ದಾರೆ. ಈ ಬಗ್ಗೆ ನಿಯಮಾವಳಿ ಪ್ರಕಾರ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.
ನಗರದಲ್ಲಿ ಶುಕ್ರವಾರ ನಡೆದ ಅನುಸೂಚಿತ ಜಾತಿ/ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಸ್ಮಶಾನ ಭೂಮಿ ಅಭಿವೃದ್ಧಿಗಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ₹1ಕೋಟಿ ಅನುದಾನ ಕೋರಿ ಪ್ರಸ್ತಾವ ಸಲ್ಲಿಸಬೇಕು. ಸ್ಮಶಾನ ಭೂಮಿ ಅಭಿವೃದ್ಧಿಯನ್ನು ನರೇಗಾ ಕೈಗೆತ್ತಿಕೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.
‘ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಸಾಲ- ಸೌಲಭ್ಯ ಯೋಜನೆಯಡಿ ಆಯ್ಕೆಗೊಂಡ ಫಲಾನುಭವಿಗಳಿಗೆ ಸೌಲಭ್ಯ ಒದಗಿಸಲು ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು’ ಎಂದು ಸೂಚಿಸಿದರು.
ಶಾಸಕ ಆಸೀಫ್ ಸೇಠ್ ಮಾತನಾಡಿ, ‘ಅಲರವಾಡ, ಕಣಬರಗಿ ಸೇರಿದಂತೆ ಕೆಲವು ಕಡೆಗಳಲ್ಲಿ ಸ್ಮಶಾನ ಭೂಮಿ ಕೊರತೆ ಇದೆ. ಕೂಡಲೇ ಭೂಮಿ ಖರೀದಿಸಿ ಕೊಡಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಮಿತಿ ಸದಸ್ಯರಾದ ವಿಜಯ ತಳವಾರ, ‘ವಿವಿಧ ಸಾಲ ಯೋಜನೆಯಡಿ ಅರ್ಜಿ ಸಲ್ಲಿಸಿದವರಿಗೆ ಕೆಲ ತಾಂತ್ರಿಕ ಕಾರಣಗಳಿಂದ ಸಾಲ ದೊರಕುತ್ತಿಲ್ಲ. ಸಾಲ-ಸೌಲಭ್ಯ ವಿತರಣೆಗೆ ಇರುವ ಅಡ್ಡಿಗಳನ್ನು ಶೀಘ್ರ ನಿವಾರಿಸಬೇಕು’ ಎಂದು ಒತ್ತಾಯಿಸಿದರು.
‘ಬೆಳಗಾವಿ ನಗರದ ರಾಣಿ ಪಾರ್ವತಿದೇವಿ ವೃತ್ತಕ್ಕೆ ‘ವೀರ ಮದಕರಿ ನಾಯಕ ವೃತ್ತ’ ಎಂದು ಮರುನಾಮಕರಣ ಮಾಡಬೇಕು. ಈ ಬಗ್ಗೆ ಹಲವು ಬಾರಿ ಚರ್ಚಿಸಿದರೂ ಕ್ರಮ ಕೈಗೊಂಡಿಲ್ಲ’ ಎಂದು ವಿಜಯ ತಳವಾರ ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಈ ಬಗ್ಗೆ ಮಹಾನಗರ ಪಾಲಿಕೆಗೆ ಪತ್ರ ಬರೆಯಲಾಗುವುದು ಎಂದರು.
ನೂತನ ಸದಸ್ಯರಾದ ಜೀವನ ಮಾಂಜ್ರೇಕರ್, ಕರೆಪ್ಪ ಗುಡೇನ್ನವರ, ಸಿದ್ದರಾಯ ಮೇತ್ರಿ, ಬಸಪ್ಪ ತಳವಾರ, ಬಸವರಾಜ ಆಯಟ್ಟಿ, ನಾಗಪ್ಪ ನರಗಟ್ಟಿ ಅವರನ್ನು ಜಿಲ್ಲಾಧಿಕಾರಿ ಅಭಿನಂದಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ್, ಡಿಸಿಪಿ ರೋಹನ್ ಜಗದೀಶ್, ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಪ್ರೊಬೇಷನರಿ ಅಧಿಕಾರಿ ಶುಭಂ ಶುಕ್ಲಾ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಲಕ್ಷ್ಮಣ ಬಬಲಿ ಇದ್ದರು.
‘ನಟ ಉಪೇಂದ್ರ ಅವರ ಇತ್ತೀಚಿನ ಹೇಳಿಕೆಯೊಂದು ಸಮುದಾಯಕ್ಕೆ ನೋವನ್ನುಂಟು ಮಾಡಿದೆ. ಸಮುದಾಯಗಳಿಗೆ ನೋವುಂಟು ಮಾಡುವ ಕೆಲವು ಜನರೂಢಿ ಶಬ್ದಗಳ ಬಳಕೆ ನಿಷೇಧಿಸಲು ಕ್ರಮ ಕೈಗೊಳ್ಳಬೇಕು’ ಎಂದು ಸಮಿತಿ ಸದಸ್ಯ ಕರೆಪ್ಪ ಗುಡೇನ್ನವರ ಅವರು ಸಭೆಯಲ್ಲಿ ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ‘ಕೆಲವು ಜನರೂಢಿ ಮಾತುಗಳಿಂದ ಜಾತಿನಿಂದನೆ ಆಗುವ ಸಾಧ್ಯತೆ ಇದೆ. ಅಂಥ ಮಾತುಗಳನ್ನು ನಿರ್ಬಂಧಿಸುವಂತೆ ಕೋರಿ ಸರ್ಕಾರಕ್ಕೆ ವರದಿ ಕಳಿಸಲಾಗುವುದು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.