ಸೋಮವಾರ, ಸೆಪ್ಟೆಂಬರ್ 27, 2021
22 °C
ಅಧಿಕಾರಿಗಳಿಗೆ ಉಪ ಲೋಕಾಯುಕ್ತ ಬಿ.ಎಸ್. ಪಾಟೀಲ ಸೂಚನೆ

ಬೆಳಗಾವಿ: ಕೋವಿಡ್‌ನಿಂದ ಮಕ್ಕಳನ್ನು ಕಾಪಾಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಸಂಭಾವ್ಯ ಕೋವಿಡ್-19ರ 3ನೇ ಅಲೆಯು ಮಕ್ಕಳ ಮೇಲೆ ಪರಿಣಾಮ ಬೀರಲಿದೆ ಎಂಬ ಮಾಹಿತಿ ಇದೆ. ಅವರನ್ನು ಕಾಪಾಡಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ. ಜೊತೆಗೆ ಪ್ರವಾಹ ಪರಿಸ್ಥಿತಿಯನ್ನೂ ಎದುರಿಸಲು ಅಧಿಕಾರಿಗಳು ಹೆಚ್ಚಿನ ಶ್ರಮ ವಹಿಸಬೇಕು’ ಎಂದು ಉಪ ಲೋಕಾಯುಕ್ತ ಬಿ.ಎಸ್. ಪಾಟೀಲ ಸೂಚಿಸಿದರು.

ಇಲ್ಲಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಶನಿವಾರ ನಡೆದ ಕೋವಿಡ್-19ರ ನಿರ್ವಹಣೆ ಹಾಗೂ ಅತಿವೃಷ್ಟಿ, ಪ್ರವಾಹ ಪರಿಸ್ಥಿತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಜಿಲ್ಲೆಯು ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಅದು ವರ ಹಾಗೂ ಶಾಪವೂ ಆಗಿದೆ. ಜನರು ಕೋವಿಡ್ ಜೊತೆಗೆ ಪ್ರವಾಹವನ್ನೂ ಎದುರಿಸುವ ದುಸ್ಥಿತಿ ಬಂದಿದೆ. ಗಡಿ ಆಗಿರುವುದರಿಂದ ಮುನ್ನೆಚ್ಚರಿಕೆ ಅಗತ್ಯವಾಗಿದೆ. ಕೋವಿಡ್ ಹಾಗೂ ಪ್ರವಾಹ ಒಂದೆರಡು ದಿನಗಳಿಗೆ ಸೀಮಿತವಾದ ಸಮಸ್ಯೆಗಳಲ್ಲ. ಅವುಗಳ ವಿರುದ್ಧ ಹೋರಾಡುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು. ಸಮಸ್ಯೆ ಇಲ್ಲದಿದ್ದಾಗಲೂ ಮುಂಜಾಗ್ರತೆ ವಹಿಸಬೇಕು. ಕೋವಿಡ್‌ನಿಂದ ಹಲವು ಮಂದಿಯನ್ನು ಕಳೆದುಕೊಂಡಿದ್ದೇವೆ. ಇದು ಪಾಠವಾಗಬೇಕು’ ಎಂದು ತಿಳಿಸಿದರು.

ಜಾಗೃತಿ ಮುಖ್ಯ: ‘ಕೋವಿಡ್ ಬಗ್ಗೆ ಜಾಗೃತಿ ಮೂಡಿಸುವುದು ಅತಿ ಮುಖ್ಯವಾಗಿದೆ. ಪ್ರಮುಖವಾಗಿ ಹಳ್ಳಿಗಳಲ್ಲಿ ಮಾಹಿತಿಯ ಕೊರತೆ ಇದೆ. ಆದ್ದರಿಂದ ಪಿಡಿಒ, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಒಳಗೊಂಡಂತೆ ಕಾರ್ಯಪಡೆ ರಚಿಸಿ ಜನರಲ್ಲಿ ಜಾಗೃತಿ ಮೂಡಿಸಬೇಕು. ಗಡಿ ಜಿಲ್ಲೆಯಲ್ಲಿ ಕೊರೊನಾ ಹರಡುತ್ತಿದ್ದು ಬೇರೆ ರಾಜ್ಯದಿಂದ ಸೋಂಕು ಹರಡದಂತೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಸೂಚಿಸಿದರು.

‘ಗಡಿ ಜಿಲ್ಲೆ ಆಗಿರುವುದರಿಂದ ಹೆಚ್ಚಿನ ಕೋವಿಡ್ ಲಸಿಕೆ ಪೂರೈಕೆಗೆ ಸರ್ಕಾರಕ್ಕೆ ಮನವಿ ಮಾಡಲಾಗುವುದು’ ಎಂದು ತಿಳಿಸಿದರು.

ಕಠಿಣ ಕ್ರಮದ ಎಚ್ಚರಿಕೆ: ‘ಭ್ರಷ್ಟಾಚಾರದ ಕುರಿತು ಲೋಕಾಯುಕ್ತದ ಗಮನಕ್ಕೆ ಬಂದಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ಅವರು ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ‘ಜಿಲ್ಲೆಯಲ್ಲಿ 7 ನದಿಗಳಿದ್ದು, 14 ತಾಲ್ಲೂಕುಗಳ 201 ಗ್ರಾಮಗಳು ಪ್ರವಾಹಕ್ಕೆ ತುತ್ತಾಗಿವೆ. ಪ್ರವಾಹದಲ್ಲಿ ಸಿಲುಕಿದ್ದ 1,50,015 ಜನರನ್ನು ಹಾಗೂ 67,329 ಜಾನುವಾರುಗಳನ್ನು ರಕ್ಷಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು ಮೂವರು ಮತ್ತು 59 ಜಾನುವಾರು ಮರಣ ಹೊಂದಿವೆ. 1,19,422 ಹೆಕ್ಟೇರ್ ಕೃಷಿ ಹಾಗೂ ತೋಟಗಾರಿಕಾ ಪ್ರದೇಶದಲ್ಲಿ ಪ್ರವಾಹದಿಂದ ಬೆಳೆ ಹಾನಿ ‌ಆಗಿದೆ. 324 ಮನೆಗಳು ಪೂರ್ಣ ಪ್ರಮಾಣದಲ್ಲಿ ಹಾಗೂ 5,003 ಭಾಗಶ ಹಾನಿಗೊಳಗಾಗಿವೆ’ ಎಂದು ಮಾಹಿತಿ ನೀಡಿದರು.

‘ಕಾಳಜಿ ಕೇಂದ್ರಗಳಲ್ಲಿ ಆರೋಗ್ಯ ಸಿಬ್ಬಂದಿ ನಿಯೋಜಿಸಿ, ಉತ್ತಮ ಗುಣಮಟ್ಟದ ಆಹಾರದ ವ್ಯವಸ್ಥೆ ಮಾಡಲಾಗಿದೆ. ನೆರೆ ಸಂತ್ರಸ್ತರಿಗೆ ಆರ್.ಟಿ.ಜಿ.ಎಸ್. ಮೂಲಕ ಅವರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಹಣ ಜಮೆ‌ ಮಾಡಲಾಗುವುದು’ ಎಂದು ತಿಳಿಸಿದರು.

‘ಹಿಪ್ಪರಗಿ ಬ್ಯಾರೇಜ್‌ನಿಂದ ಬಿಡುಗಡೆಯಾಗುವ ನೀರಿನಿಂದ ಅಥಣಿ ತಾಲ್ಲೂಕಿನ 21 ಗ್ರಾಮಗಳು ಬಾಧಿತವಾಗುತ್ತಿದ್ದು, ಶಾಶ್ವತ ಪರಿಹಾರಕ್ಕಾಗಿ 9 ಹಳ್ಳಿಯ ಜನರಿಗೆ ಅನುಕೂಲವಾಗುವಷ್ಟು ಜಮೀನನ್ನು ಖರೀದಿಸಲಾಗಿದೆ. ಮುಂದಿನ ದಿನಗಳಲ್ಲಿ ಹಕ್ಕುಪತ್ರಗಳನ್ನು ವಿತರಿಸಲಾಗುವುದು’ ಎಂದು ಹೇಳಿದರು.

ಜಿ.ಪಂ. ಸಿಇಒ ಎಚ್‌.ವಿ. ದರ್ಶನ್, ಪೊಲೀಸ್‌ ಆಯುಕ್ತ ಕೆ. ತ್ಯಾಗರಾಜನ್, ಎಸ್ಪಿ ಲಕ್ಷ್ಮಣ ನಿಂಬರಗಿ, ಲೋಕಾಯುಕ್ತ ಎಸ್ಪಿ ಯಶೋಧಾ ವಂಟಗೂಡಿ ಇದ್ದರು.

‘ನೆರೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಿ’

‘ಪ್ರವಾಹದಲ್ಲಿ ನೊಂದು ಮನೆ, ಜಾನುವಾರು ಹಾಗೂ ಬೆಳೆ ಕಳೆದುಕೊಂಡ ಜನರಿಗೆ ಅನುದಾನದಲ್ಲಿ ವಿಳಂಬ ಮಾಡದೆ, ಸಕಾಲದಲ್ಲಿ ಲೋಪವಿಲ್ಲದೆ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ನೆರೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ತಜ್ಞರಿಂದ ಸಲಹೆ ಪಡೆಯಬೇಕು’ ಎಂದು ಪಾಟೀಲ ಹೇಳಿದರು.

‘ಬಯಲು ಶೌಚ ಮುಕ್ತ ದೇಶ ಎಂದು ಹೇಳುತ್ತೇವೆ. ಆದರೆ, ಹಳ್ಳಿಗಳಲ್ಲಿ ಸರ್ಕಾರದ ಅನುದಾನದಿಂದ ಶೌಚಾಲಯಗಳನ್ನು ನಿರ್ಮಿಸಿ, ಅವುಗಳನ್ನು ಬಳಸದೆ ಇರುವುದನ್ನು ಗಮನಿಸಿದ್ದೇವೆ. ಆದ್ದರಿಂದ ಎಲ್ಲಾ ಗ್ರಾಮ ಪಂಚಾಯ್ತಿ ಅಧಿಕಾರಿಗಳು ಮಾಹಿತಿ ಕಲೆ ಹಾಕಬೇಕು ಹಾಗೂ ಸೌಲಭ್ಯ ಪಡೆದುಕೊಂಡು ಅದನ್ನು ಬಳಸದೆ ಇರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಕೆರೆಗಳ ಮಾಹಿತಿ ಸಲ್ಲಿಸಬೇಕು’ ಎಂದು ನಿರ್ದೇಶನ ನೀಡಿದರು.

‘ಹಿಂದಿನ ತಪ್ಪುಗಳನ್ನು ಪಾಠವೆಂದು ಪರಿಗಣಿಸಿ ಮುಂಜಾಗ್ರತೆ ಹಾಗೂ ಪೂರ್ವ ಸಿದ್ಧತೆಯೊಂದಿಗೆ ಕೆಲಸ ಮಾಡಬೇಕು. ಇದರಿಂದ ಕೆಲಸದಲ್ಲಿ ಪ್ರಗತಿ ಸಾಧಿಸಲು ಸಾಧ್ಯ’ ಎಂದು ತಿಳಿಸಿದರು.

ಕೋವಿಡ್ 3ನೇ ಅಲೆ ನಿರ್ವಹಣೆಗೆ ಮುಂಜಾಗ್ರತಾ ಕ್ರಮ ವಹಿಸಲಾಗಿದೆ. ನೆರೆ ರಾಜ್ಯದಿಂದ ಜಿಲ್ಲೆಯನ್ನು ಪ್ರವೇಶಿಸುವವರಿಗೆ ಆರ್.ಟಿ.ಪಿ.ಸಿ.ಆರ್. ಪರೀಕ್ಷಾ ವರದಿ ಕಡ್ಡಾಯವಾಗಿದೆ. ಇಲ್ಲದಿದ್ದಲ್ಲಿ ಸ್ಥಳದಲ್ಲಿಯೇ ಪರೀಕ್ಷೆ ನಡೆಸಲಾಗುತ್ತಿದೆ.

– ಎಂ.ಜಿ. ಹಿರೇಮಠ, ಜಿಲ್ಲಾಧಿಕಾರಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.