ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಣ್ಯವಾಸಿಗಳ ಸಮಸ್ಯೆ ಪರಿಹಾರಕ್ಕೆ ಸ್ಪಂದಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ

Last Updated 22 ಡಿಸೆಂಬರ್ 2021, 13:11 IST
ಅಕ್ಷರ ಗಾತ್ರ

ಬೆಳಗಾವಿ: ‘ಅರಣ್ಯವಾಸಿಗಳ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಸ್ಪಂದಿಸಬೇಕು’ ಎಂದು ಆಗ್ರಹಿಸಿ ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯವರು ಸುವರ್ಣ ವಿಧಾನಸೌಧದ ಬಳಿಯ ಕೊಂಡಸಕೊಪ್ಪ ಗುಡ್ಡದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

‘ಅರಣ್ಯವಾಸಿಗಳ ಮೇಲೆ ಅರಣ್ಯಾಧಿಕಾರಿಗಳಿಂದ ಆಗುತ್ತಿರುವ ದೌರ್ಜನ್ಯ ತಡೆಯಬೇಕು. ದೌರ್ಜನ್ಯ ಮಾಡಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

‘ನಮಗೆ ಸಾಗುವಳಿ ಹಕ್ಕು ಕೊಡಬೇಕು ಎನ್ನುವ ನಿಟ್ಟಿನಲ್ಲಿ ಬುಡಕಟ್ಟು ಮತ್ತು ಇತರ ಪಾರಂಪರಿಕ ಅರಣ್ಯವಾಸಿಗಳ ಅರಣ್ಯ ಹಕ್ಕು ಕಾಯ್ದೆ ಜಾರಿಯಾಗಿದ್ದರೂ ಅದು ಮರೀಚಿಕೆಯಾಗಿದೆ. ವಾಸ್ತವ್ಯಕ್ಕಾಗಿ ಮತ್ತು ಸಾಗುವಳಿಗಾಗಿ ನಾವು ಅರಣ್ಯ ಪ್ರದೇಶ ಅವಲಂಬಿಸುವುದು ಅನಿವಾರ್ಯವಾಗಿದೆ. ಹಕ್ಕು ನೀಡುವಂತೆ ಅರಣ್ಯ ಹಕ್ಕು ಕಾಯ್ದೆಯಲ್ಲಿ 81 ಸಾವಿರಕ್ಕೂ ಹೆಚ್ಚು ಅರ್ಜಿ ಸಲ್ಲಿಸಲಾಗಿದ್ದು, ಅದರಲ್ಲಿ 2,852 ಅರ್ಜಿಗಳು ಮಾತ್ರ ಸ್ವೀಕೃತಗೊಂಡಿವೆ. ಉಳಿದವನ್ನು ತಿರಸ್ಕರಿಸಲಾಗಿದೆ’ ಎಂದರು.

‘ರಾಜ್ಯ ಸರ್ಕಾರ ಶಿವಮೊಗ್ಗ ಶರಾವತಿ ವನ್ಯಜೀವಿ ಅಭಯಾರಣ್ಯಕ್ಕೆ 20ಸಾವಿರ ಹೆಕ್ಟೇರ್ ಹೆಚ್ಚುವರಿ ಅರಣ್ಯ ಪ್ರದೇಶ ಸೇರಿಸಿ 2019ರಂದು ಅಧಿಸೂಚನೆ ಹೊರಡಿಸಿದೆ. ಮಾನವ ಜೀವನಕ್ಕೆ ತೊಂದರೆ ನೀಡುವ ಈ ಆದೇಶ ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು.

‘ನಮಗೆ ವಿಮೆ ಮತ್ತು ಬೆಳೆ ಸಾಲ ನೀಡಬೇಕು. ಅತಿವೃಷ್ಟಿ ಹಾಗೂ ಬರಗಾಲದ ಸಂದರ್ಭದಲ್ಲಿ ಅರಣ್ಯವಾಸಿಗಳಿಗೆ ಸೂಕ್ತ ಪರಿಹಾರ ನೀಡಬೇಕು. ಅರಣ್ಯ ಇಲಾಖೆಯು ಐದು ವರ್ಷಗಳಲ್ಲಿ ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿದಿರುವುದು ಮತ್ತು ಅರಣ್ಯ ಪ್ರದೇಶದಲ್ಲಿ ನಡೆಸಿರುವ ಕಾಮಗಾರಿಗಳನ್ನು ವಿಶೇಷ ತನಿಖೆಗೆ ಒಳಪಡಿಸಬೇಕು’ ಎಂದು ಆಗ್ರಹಿಸಿದರು.

‘ನಮ್ಮನ್ನು ಅರಣ್ಯ ಪ್ರದೇಶದಿಂದ ಒಕ್ಕಲೆಬ್ಬಿಸುವ ಪ್ರಕ್ರಿಯೆಯನ್ನು ತಕ್ಷಣ ನಿಲ್ಲಿಸಬೇಕು. ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಹೋರಾಟಗಾರರ ವೇದಿಕೆಯ ಸಮಕ್ಷಮ ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ ನಡೆಸಬೇಕು’ ಎಂದು ಒತ್ತಾಯಿಸಿದರು.

‘ಕಾನೂನು ಬಾಹಿರವಾಗಿ ಒಕ್ಕಲೆಬ್ಬಿಸುವ ಸಂದರ್ಭದಲ್ಲಿ ಪ್ರತಿಭಟನೆ ನಡೆಸಿದ ಅರಣ್ಯವಾಸಿಗಳ ಮೇಲೆ ದಾಖಲಿಸಿರುವ ಕ್ರಿಮಿನಲ್ ಮೊಕದ್ದಮೆಯನ್ನು ವಾಪಸ್ ಪಡೆಯಬೇಕು’ ಎಂದು ಕೋರಿದರು.

ಕಾಂಗ್ರೆಸ್ ಶಾಸಕ ಆರ್.ವಿ. ದೇಶಪಾಂಡೆ ಮನವಿ ಸ್ವೀಕರಿಸಿದರು. ಅಧ್ಯಕ್ಷ ರವೀಂದ್ರ ನಾಯಕ್ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT