ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಥಳೀಯ ಸಂಸ್ಥೆಗಳಿಗೆ ರ‍್ಯಾಂಕಿಂಗ್‌ ವ್ಯವಸ್ಥೆ: ಜಿಲ್ಲಾಧಿಕಾರಿ ಹೇಳಿಕೆ

Last Updated 11 ಮೇ 2022, 12:27 IST
ಅಕ್ಷರ ಗಾತ್ರ

ಬೆಳಗಾವಿ: ‘ನಗರ ಸ್ಥಳೀಯ ಸಂಸ್ಥೆಗಳಿಗೆ ಕಾರ್ಯವೈಖರಿ ಆಧರಿಸಿ 15 ದಿನಗಳಿಗೊಮ್ಮೆ ರ‍್ಯಾಂಕಿಂಗ್‌ ವ್ಯವಸ್ಥೆ ಜಾರಿಗೊಳಿಸಲಾಗುವುದು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಇಲ್ಲಿ ಬುಧವಾರ ನಡೆದ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಕಾರ್ಯನಿರ್ವಹಣಾ ವಿಧಾನ ಚುರುಕುಗೊಳಿಸಲು ಹೊಸ ವ್ಯವಸ್ಥೆ ಪರಿಣಾಮಕಾರಿಯಾಗಲಿದೆ. ನಗರೋತ್ಥಾನ, ಘನತ್ಯಾಜ್ಯ ವಿಲೇವಾರಿ, ವಸತಿ ಸೇರಿದಂತೆ ವಿವಿಧ ಯೋಜನೆಗಳ ಅನುಷ್ಠಾನದ ವೇಗ ಪರಿಗಣಿಸಲಾಗುವುದು. ಇದರಿಂದ ಕಾರ್ಯಕ್ಷಮತೆ ಹೆಚ್ಚಿಸಲು ಸಾಧ್ಯವಾಗಲಿದೆ. ಮಾನದಂಡ ರೂಪಿಸಲು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

‘ಜನರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಬೇಕು. ‘ಸಕಾಲ’ದಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಸಕಾರಣವಿಲ್ಲದೆ ತಿರಸ್ಕರಿಸಲಾಗುತ್ತಿದೆ ಎಂಬ ದೂರುಗಳಿವೆ. ಅದಕ್ಕೆ ಅವಕಾಶ ಕೊಡಬಾರದು’ ಎಂದರು.

‘ರಾಜ್ಯದಲ್ಲಿ ಅತಿ ಹೆಚ್ಚು ಸ್ಥಳೀಯ ಸಂಸ್ಥೆಗಳಿರುವುದು ಜಿಲ್ಲೆಯಲ್ಲಿ. ಆದ್ದರಿಂದ ಪ್ರತಿ ಯೋಜನೆಯ ಅನುಷ್ಠಾನದ ಹೆಚ್ಚಿನ ಹೊಣೆಗಾರಿಕೆ ಇಲ್ಲಿನ ಸಂಸ್ಥೆಗಳ ಮೇಲಿದೆ. ಮುಖ್ಯಾಧಿಕಾರಿಗಳು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು. ವಸತಿ ಮತ್ತಿತರ ಯೋಜನೆಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು’ ಎಂದು ನಿರ್ದೇಶನ ನೀಡಿದರು.

‘ವಸತಿ ಯೋಜನೆಗಳ ಫಲಾನುಭವಿಗಳ ಆಯ್ಕೆ ಪಟ್ಟಿಯನ್ನು ಶಾಸಕರನ್ನು ಸಂಪರ್ಕಿಸಿ ಕೂಡಲೇ ಅಂತಿಮಗೊಳಿಸಬೇಕು. ಅನುಮೋದನೆ ಪಡೆದುಕೊಳ್ಳಬೇಕು. ವಿನಾಕಾರಣ ವಿಳಂಬ ಮಾಡಿದರೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಈಶ್ವರ ಉಳ್ಳಾಗಡ್ಡಿ ಇದ್ದರು.

ಕೆರೆಗಳ ಅತಿಕ್ರಮಣ ತೆರವಿಗೆ ಸೂಚನೆ

‘ಆಡಳಿತ ಚುರುಕುಗೊಳಿಸಿ ಅಭಿವೃದ್ಧಿ ಕಾರ್ಯಗಳ ವೇಗ ಹೆಚ್ಚಿಸಬೇಕು ಎನ್ನುವುದು ಮುಖ್ಯಮಂತ್ರಿ ಆಶಯವಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳು ಹಾಗೂ ಅಧಿಕಾರಿಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕು’ ಎಂದು ನಿತೇಶ್ ಸೂಚಿಸಿದರು.

ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಯಾವುದೇ ಯೋಜನೆ, ಕಾಮಗಾರಿ, ಕಡತಗಳನ್ನು ಬಾಕಿ ಇಟ್ಟುಕೊಳ್ಳಬಾರದು. ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ‌ ಮಾಡಿದರೆ ಜಿಲ್ಲೆಗೆ ಕೀರ್ತಿ ಬರುತ್ತದೆ. ಪ್ರಮುಖ ಜಿಲ್ಲೆ ಆಗಿರುವುದರಿಂದ ಇಲ್ಲಿನ ಪ್ರಗತಿಯು ಒಟ್ಟಾರೆ ರಾಜ್ಯದ ಪ್ರಗತಿಗೆ ಪೂರಕವಾಗಲಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಅನುಷ್ಠಾನ ಕುಂಠಿತಗೊಳ್ಳಬಾರದು. ಜಿಲ್ಲಾಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ತಾಲ್ಲೂಕು ಕಚೇರಿಗಳಿಗೆ‌ ನಿಯಮಿತವಾಗಿ ಭೇಟಿ ನೀಡಿ ಪ್ರಗತಿ ಪರಿಶೀಲಿಸಬೇಕು’ ಎಂದು ತಾಕೀತು ಮಾಡಿದರು.

‘ಯಾವುದೇ ಕಾರಣಕ್ಕೂ ವಿಮಾನನಿಲ್ದಾಣದ ಸಮೀಪ ಕಸಾಯಿಖಾನೆ ಸ್ಥಾಪನೆಗೆ ಅವಕಾಶ ಕೊಡಬಾರದು. ಮಾಂಸದಂಗಡಿಗಳ ತ್ಯಾಜ್ಯ ವ್ಯವಸ್ಥಿತ ವಿಲೇವಾರಿಗೆ ನಿಗಾ ವಹಿಸಬೇಕು’ ಎಂದು ತಿಳಿಸಿದರು.

ಜಿ.ಪಂ. ಸಿಇಒ ಎಚ್‌.ವಿ. ದರ್ಶನ್‌, ‘ಜಿಲ್ಲೆಯ 84 ಕೆರೆಗಳ ಅಭಿವೃದ್ಧಿ ಕಾಮಗಾರಿಯನ್ನು ನರೇಗಾದಲ್ಲಿ ಕೈಗೊಳ್ಳಲಾಗುತ್ತಿದೆ. ಸಮರ್ಪಕವಾಗಿ ಜಾರಿಗೊಳಿಸಬೇಕಾದರೆ ಮೊದಲು ಕೆರೆಗಳ ಅತಿಕ್ರಮಣ ತೆರವುಗೊಳಿಸಬೇಕು. ಈ ನಿಟ್ಟಿನಲ್ಲಿ ತಹಶೀಲ್ದಾರರು ಮುತುವರ್ಜಿ ವಹಿಸಬೇಕು’ ಎಂದು ಸೂಚಿಸಿದರು.

‘ಎಲ್ಲ 18 ವಿಧಾನಸಭಾ ಮತಕ್ಷೇತ್ರಗಳಿಂದ ತಲಾ 5 ಕೆರೆಗಳನ್ನು ಗುರುತಿಸಿ ಪಟ್ಟಿ ಸಿದ್ಧಪಡಿಸಬೇಕು’ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಎಡಿಸಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆ ಆಯುಕ್ತ ಡಾ.ರುದ್ರೇಶ್ ಘಾಳಿ, ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT