ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿ | ಸ್ಮಶಾನಕ್ಕಾಗಿ ₹2 ಕೋಟಿ ಅನುದಾನ ಕೋರಿಕೆ: ಜಿಲ್ಲಾಧಿಕಾರಿ

Published 6 ಜನವರಿ 2024, 6:35 IST
Last Updated 6 ಜನವರಿ 2024, 6:35 IST
ಅಕ್ಷರ ಗಾತ್ರ

ಬೆಳಗಾವಿ: ‘ಜಿಲ್ಲೆಯಲ್ಲಿ ಸ್ಮಶಾನಗಳ ಅಭಿವೃದ್ಧಿಗಾಗಿ, ಪ್ರತಿ ಸ್ಮಶಾನಕ್ಕೆ ₹5 ಲಕ್ಷದಂತೆ ₹2 ಕೋಟಿ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಬೇಕು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದಲ್ಲಿ ಶುಕ್ರವಾರ ನಡೆದ ಜಿಲ್ಲಾ ದೌರ್ಜ್ಯನ್ಯ ತಡೆ ಹಾಗೂ ಜಾಗೃತಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ‘ಸರ್ಕಾರದಿಂದ ಅನುದಾನ ಬಿಡುಗಡೆಗೊಂಡರೆ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಜನರಿಗೆ ಸೇರಿದ ಜಿಲ್ಲೆಯ 40 ಸ್ಮಶಾನ ಭೂಮಿಗಳಲ್ಲಿ ಕುಡಿಯುವ ನೀರು, ತಂತಿ ಬೇಲಿ, ತಾತ್ಕಾಲಿಕ ಶೆಡ್ ನಿರ್ಮಾಣ ಮತ್ತಿತರ ಕಾಮಗಾರಿ ಕೈಗೊಳ್ಳಬಹುದು’ ಎಂದು ತಿಳಿಸಿದರು.

ಪರಿಶಿಷ್ಟ ಸಂಘಟನೆಗಳ ಮುಖಂಡ ಮಲ್ಲೇಶ್ ಚೌಗಲೆ ಮಾತನಾಡಿ, ‘ಸರ್ಕಾರದ ವಿವಿಧ ಯೋಜನೆಗಳಡಿ ಆಯ್ಕೆಗೊಂಡ ಫಲಾನುಭವಿಗಳಿಗೆ ಸುಗಮವಾಗಿ ಸಾಲ-ಸೌಲಭ್ಯಗಳನ್ನು ಒದಗಿಸಲು ಬ್ಯಾಂಕ್‌ಗಳಿಗೆ ನಿರ್ದೇಶನ ನೀಡಬೇಕು’ ಎಂದು ಒತ್ತಾಯಿಸಿದರು.

‘ಇದಕ್ಕೆ ಸಂಬಂಧಿಸಿದಂತೆ ಬ್ಯಾಂಕ್ಗಳ ಪ್ರತಿನಿಧಿಗಳ ಸಭೆಯನ್ನು ಕರೆದು ಸೂಕ್ತ ಪರಿಶೀಲನೆ ನಡೆಸಲಾಗುವುದು’ ಜಿಲ್ಲಾಧಿಕಾರಿ ತಿಳಿಸಿದರು.

‘ಕೆಲವು ಪೊಲೀಸ್ ಅಧಿಕಾರಿಗಳು ದೌರ್ಜನ್ಯ ಪ್ರಕರಣಗಳನ್ನು ಕೂಲಂಕಶವಾಗಿ ಪರಿಶೀಲಿಸದೇ ‘ಬಿ ರಿಪೋರ್ಟ್’ ಹಾಕುವುದರಿಂದ ನೊಂದವರಿಗೆ ಅನ್ಯಾಯವಾಗುತ್ತಿದೆ. ಆದ್ದರಿಂದ ಇಂಥ ಪ್ರಕರ‌ಣಗಳನ್ನು ಸೂಕ್ಷ್ಮ ರೀತಿಯಲ್ಲಿ ಪರಿಶೀಲಿಸಬೇಕು’ ಎಂದು ಚೌಗುಲೆ ಒತ್ತಾಯಿಸಿದರು.

ಪರಿಹಾರ ಬಿಡುಗಡೆಗೆ ಸೂಚನೆ: ಪರಿಶಿಷ್ಟ ಜಾತಿ/ವರ್ಗದ ಜನರ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ 24 ಗಂಟೆಗಳಲ್ಲಿ ನೊಂದವರಿಗೆ ಪರಿಹಾರ ನೀಡಲು ಪ್ರಯತ್ನಿಸಬೇಕು’ ಎಂದು ಜಿಲ್ಲಾಧಿಕಾರಿ ಸೂಚಿಸಿದರು.

‘ತಾಂತ್ರಿಕ ಕಾರಣಗಳಿಂದ ಇದು ಸಾಧ್ಯವಾಗದಿದ್ದರೆ ಯಾವುದೇ ಕಾರಣಕ್ಕೂ ಪ್ರಕರಣ ದಾಖಲಾದ 48 ಗಂಟೆ ಮೀರಬಾರದು. ಎರಡನೇ ಕಂತಿನ ಪರಿಹಾರ ದೋಷಾರೋಪ ಪಟ್ಟಿ ಸಲ್ಲಿಸಿದ ಬಳಿಕವೂ ತುರ್ತಾಗಿ ಪರಿಹಾರ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು’ ಎಂದರು.

‘ನಗರದ ಆರ್.ಪಿ.ಡಿ. ವೃತ್ತಕ್ಕೆ ವೀರ ಮದಕರಿ ನಾಯಕರ ಹೆಸರು ನಾಮಕರಣ ಮಾಡುವ ಕುರಿತು ಪಾಲಿಕೆಯ ಚುನಾಯಿತ ಮಂಡಳಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ’ ಎಂದರು.

ಶಾಸಕ ಆಸೀಫ್ ಸೇಠ್, ಜಿಲ್ಲಾ ಜಾಗೃತ ಸಮಿತಿಯ ಸದಸ್ಯ ಕರೆಪ್ಪ ಗುಡೆನ್ನವರ ಮಾತನಾಡಿದರು. ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಹರ್ಷಲ್ ಭೋಯರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಅಧೀಕ್ಷಕ ರವೀಂದ್ರ ಗಡಾದಿ, ಡಿಸಿಪಿ ರೋಹನ್ ಜಗದೀಶ್, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಜಿಲ್ಲಾ ಯೋಜನಾ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಲಕ್ಷ್ಮಣ ಬಬಲಿ, ಆಹಾರ ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT