ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ| ಕೋವಿಡ್‌ ಸೋಂಕು ಪತ್ತೆಯಾದ ಸಂಕೇಶ್ವರ, ಯಳ್ಳೂರು ಹೊಸ ಕಂಟೈನ್ಮೆಂಟ್‌ ವಲಯ

ಅಧಿಕಾರಿಗಳ ಜೊತೆ ವಿಡಿಯೊ ಸಂವಾದ
Last Updated 16 ಏಪ್ರಿಲ್ 2020, 11:16 IST
ಅಕ್ಷರ ಗಾತ್ರ

ಬೆಳಗಾವಿ: ‘ಕೋವಿಡ್‌–19 ದೃಢಪಟ್ಟ ಹಿನ್ನೆಲೆಯಲ್ಲಿ ಬೆಳಗಾವಿ ತಾಲ್ಲೂಕಿನ ಯಳ್ಳೂರು ಹಾಗೂ ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ ಪಟ್ಟಣವನ್ನು ಕಂಟೈನ್ಮೆಂಟ್‌ ವಲಯ ಎಂದು ಘೋಷಿಸಲಾಗಿದ್ದು, ಇಡೀ ಪ್ರದೇಶವನ್ನು ಸಂಪೂರ್ಣವಾಗಿ ಸೀಲ್‌ಡೌನ್‌ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಡಾ.ಎಸ್‌.ಬಿ. ಬೊಮ್ಮನಹಳ್ಳಿ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ತಮ್ಮ ಕಚೇರಿಯಿಂದ ಗುರುವಾರ ಜಿಲ್ಲೆಯ ಎಲ್ಲ ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರ್‌ರ ಜೊತೆ ವಿಡಿಯೊ ಸಂವಾದ ನಡೆಸಿದ ಅವರು, ಬಿಗಿಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು.

‘ಬೆಳಗಾವಿಯ ಕ್ಯಾಂಪ್‌ ಪ್ರದೇಶ, ಬೆಳಗುಂದಿ, ಪೀರಣವಾಡಿ, ಹಿರೇಬಾಗೇವಾಡಿ, ರಾಯಬಾಗ ಹಾಗೂ ಕುಡಚಿ ಸೇರಿದಂತೆ 6 ಪ್ರದೇಶಗಳನ್ನು ಈಗಾಗಲೇ ಕಂಟೈನ್ಮೆಂಟ್‌ ವಲಯವೆಂದು ಘೋಷಿಸಲಾಗಿತ್ತು. ಈಗ ಮತ್ತೇರಡು ಹೊಸ ಪ್ರದೇಶಗಳನ್ನು ಘೋಷಿಸಲಾಗಿದೆ’ ಎಂದು ಹೇಳಿದರು.

‘ಯಾವುದೇ ಕಾರಣಕ್ಕೂ ಈ ವಲಯದಲ್ಲಿ ಜನರಿಗೆ ಸಂಚರಿಸಲು ಅವಕಾಶ ನೀಡಬಾರದು. ಅಗತ್ಯ ವಸ್ತುಗಳ ಪೂರೈಕೆ ಬಗ್ಗೆ ನಿರಂತರವಾಗಿ ನಿಗಾ ವಹಿಸಬೇಕು. ಸೋಂಕಿತರ ಜತೆ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವ ಎಲ್ಲರಿಗೂ ತಕ್ಷಣವೇ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರಿಸಬೇಕು’ ಎಂದು ಸಂಬಂಧಿಸಿದ ನೋಡಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ಜಿಲ್ಲೆಯ ಯಾವುದೇ ಭಾಗದಲ್ಲಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಸೇರಿದಂತೆ ವಸ್ತುಗಳನ್ನು ಸಂಘ-ಸಂಸ್ಥೆಗಳು ಸಾರ್ವಜನಿಕರಿಗೆ ನೇರವಾಗಿ ವಿತರಿಸುವಂತಿಲ್ಲ.‌ ಆಯಾ ತಾಲ್ಲೂಕಿನ ತಹಶೀಲ್ದಾರ್‌ರ ಮೂಲಕ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಮೂಲಕ ವಿತರಿಸಬೇಕು’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ ಕೋವಿಡ್‌–19 ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಸೋಂಕು ಹರಡುವಿಕೆ ತಡೆಗಟ್ಟಲು ಇನ್ನಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಬೇಕು. ಕಂಟೈನ್ಮೆಂಟ್ ಝೋನ್ ನಿರ್ವಹಣೆ ಸೇರಿದಂತೆ ಎಲ್ಲ ಅಧಿಕಾರಿಗಳನ್ನು ಉಪ ವಿಭಾಗಾಧಿಕಾರಿಗಳಿಗೆ ನೀಡಲಾಗಿದೆ. ಯಾವುದೇ ತುರ್ತು ನಿರ್ಧಾರ ಅಥವಾ ಕ್ರಮಗಳನ್ನು ಕೈಗೊಳ್ಳಬಹುದು’ ಎಂದರು.

‘ಕೆಲವು ಕಡೆ ಯಾವುದೇ ಪಾಸಿಟಿವ್ ಕಂಡುಬಂದಿಲ್ಲ ಎಂದು ನಿರ್ಲಕ್ಷ್ಯ ವಹಿಸುವಂತಿಲ್ಲ. ಈಗಾಗಲೇ ನಡೆಸಿರುವ ಮನೆ ಮನೆ ಸಮೀಕ್ಷೆ ಎರಡು ದಿನಗಳಲ್ಲಿ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು. ಸೋಂಕಿನ ಲಕ್ಷಣಗಳು ಕಂಡುಬಂದರೆ ಕೂಡಲೇ ತಾಲ್ಲೂಕು ಅಥವಾ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಬೇಕು’ ಎಂದು ತಿಳಿಸಿದರು.

ಜ್ವರ-ಕೆಮ್ಮು ಕಂಡುಬಂದರೆ ತಕ್ಷಣ ಆಸ್ಪತ್ರೆಗೆ ಸೇರಿಸಿ: ‘60 ವರ್ಷ ಮೇಲ್ಪಟ್ಟ ವ್ಯಕ್ತಿಗಳಲ್ಲಿ ಜ್ವರ‌ ಕಂಡುಬಂದರೆ ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ಸೇರಿಸುವ ಕೆಲಸ ಮಾಡಬೇಕು. ತಾಲ್ಲೂಕುವಾರು ಸಹಾಯವಾಣಿ ಆರಂಭಿಸಿ ಜ್ವರ, ಕೆಮ್ಮು ಮತ್ತಿತರ ಲಕ್ಷಣಗಳಿರುವ ವ್ಯಕ್ತಿಗಳನ್ನು ಗುರುತಿಸಿ ಸಾಂಸ್ಥಿಕ ಕ್ವಾರಂಟೈನ್ ಗೆ ಕಳುಹಿಸಬೇಕು’ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಸೂಚನೆ ನೀಡಿದರು.

‘ಕಂಟೈನ್ಮೆಂಟ್ ವಲಯದಲ್ಲಿರುವ ಮನೆಗಳಿಗೆ ಅಗತ್ಯ ವಸ್ತುಗಳನ್ನು ಪೂರೈಸಲು ಸ್ವಯಂಸೇವಕರನ್ನು ಗುರುತಿಸಿ ಅವರ ಮೂಲಕವೇ ಸಾಮಗ್ರಿಗಳನ್ನು ಪೂರೈಸಲು ಕ್ರಮ ಕೈಗೊಳ್ಳಬೇಕು. ಈ ವಲಯದಲ್ಲಿರುವ ಪ್ರತಿ ಮನೆಗಳಿಗೂ ಆರೋಗ್ಯ ತಂಡಗಳು ಭೇಟಿ ನೀಡಿ, ಜ್ವರ-ಕೆಮ್ಮು ಇರುವವರನ್ನು ಗುರುತಿಸಬೇಕು’ ಅವರು ನಿರ್ದೇಶನ ನೀಡಿದರು.

ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಬಿ.ಎಸ್.ಲೋಕೇಶ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆಯ ಆಯುಕ್ತರಾದ ಜಗದೀಶ್ ಕೆ.ಎಚ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಉಪ ವಿಭಾಗಾಧಿಕಾರಿಗಳಾದ ಶಿವಾನಂದ ಭಜಂತ್ರಿ, ಅಶೋಕ ತೇಲಿ, ರವೀಂದ್ರ ಕರಲಿಂಗಣ್ಣವರ, ಎಲ್ಲ ತಹಶೀಲ್ದಾರರು, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗಳು ವಿಡಿಯೊ ಸಂವಾದದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT