ಬೆಳಗಾವಿ: ‘ಗಡಿಜಿಲ್ಲೆ ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ. ನಾವು ಹಲವು ಹೊಸ ಯೋಜನೆಗಳನ್ನು ಕಾಲಮಿತಿಯೊಳಗೆ ಜಾರಿಗೊಳಿಸುತ್ತೇವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಅಂಗವಾಗಿ ಮಂಗಳವಾರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
‘ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಂಜಿನಿಯರಿಂಗ್ ವಿಭಾಗದಿಂದ ಬೆಳಗಾವಿಯಲ್ಲಿ ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಸೇರಿದಂತೆ 19 ಸರ್ಕಾರಿ ಆರೋಗ್ಯ ಸಂಸ್ಥೆಗಳ ಕಟ್ಟಡ ಕಾಮಗಾರಿ ನಡೆಯುತ್ತಿವೆ. ಬೆಳಗಾವಿಯಲ್ಲಿ ಶೀಘ್ರ ಕ್ಯಾನ್ಸರ್ ಆಸ್ಪತ್ರೆ ಸ್ಥಾಪಿಸಲಾಗುವುದು’ ಎಂದು ಭರವಸೆ ನೀಡಿದರು.
‘ಬೆಳಗಾವಿ ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸುವ ಜತೆಗೆ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ₹350 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ 48ರಿಂದ(ಗಾಂಧಿ ನಗರ) ಆರ್‌ಎಲ್ಎಸ್ ಕಾಲೇಜಿನವರೆಗೆ ಮೇಲ್ಸೇತುವೆ ನಿರ್ಮಿಸಲಾಗುವುದು. ಕೇಂದ್ರೀಯ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಲು ಇದರಲ್ಲಿ ಅವಕಾಶವಿರಲಿದೆ’ ಎಂದರು.
‘ನೀರು ಸರಬರಾಜು ವ್ಯವಸ್ಥೆಯಲ್ಲಿ ಸುಧಾರಣೆ ತರುವುದು ಸರ್ಕಾರದ ಉದ್ದೇಶ. ಇದಕ್ಕಾಗಿ ವಿಶ್ವ ಬ್ಯಾಂಕಿನ ಧನಸಹಾಯದ ನೆರವಿನೊಂದಿಗೆ ಬೆಳಗಾವಿಯಲ್ಲಿ 24x7 ನಿರಂತರ ಕುಡಿಯುವ ನೀರಿನ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಅಮೃತ ಯೋಜನೆಯಡಿ ₹157.56 ಕೋಟಿ ವೆಚ್ಚದಲ್ಲಿ ಬೆಳಗಾವಿಯಲ್ಲಿ ಒಳಚರಂಡಿ ವ್ಯವಸ್ಥೆ ಒದಗಿಸುವ ಯೋಜನೆಗೆ ತಾಂತ್ರಿಕ ಅನುಮೋದನೆ ಸಿಕ್ಕಿದೆ. ‘ಸ್ಮಾರ್ಟ್ ಸಿಟಿ' ಯೋಜನೆ’ಯಡಿ ನಡೆಯುತ್ತಿರುವ ಕಾಮಗಾರಿಗೆ ಈವರೆಗೆ ₹854 ಕೋಟಿ ಅನುದಾನ ಬಿಡುಗಡೆಯಾಗಿದ್ದು, ₹804.91 ಕೋಟಿ ವ್ಯಯಿಸಲಾಗಿದೆ. 102 ಕಾಮಗಾರಿಗಳ ಪೈಕಿ 96 ಪೂರ್ಣಗೊಂಡಿವೆ. ಪ್ರಗತಿಯಲ್ಲಿರುವ 6 ಕಾಮಗಾರಿಗಳನ್ನು 2024ರ ಜೂನ್ ಅಂತ್ಯದೊಳಗೆ ಮುಕ್ತಾಯಗೊಳಿಸಲು ಯೋಜಿಸಿದ್ದೇವೆ’ ಎಂದು ತಿಳಿಸಿದರು.
‘ರಾಜ್ಯ ಸರ್ಕಾರ ಅನೇಕ ಜನಪರ ಕಾರ್ಯಕ್ರಮಗಳನ್ನು ರೂಪಿಸಿದೆ. ಐದು ಗ್ಯಾರಂಟಿ ಯೋಜನೆ ಅನುಷ್ಠಾನಗೊಳಿಸಿ, ನುಡಿದಂತೆ ನಡೆಯುತ್ತಿದೆ. ಶಕ್ತಿ ಯೋಜನೆಯಡಿ ಬೆಳಗಾವಿ ಜಿಲ್ಲೆಯಲ್ಲಿ 3.48 ಕೋಟಿ ಮಹಿಳೆಯರು ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. 8,25,700 ಫಲಾನುಭವಿಗಳು ನೋಂದಣಿ ಮಾಡಿಕೊಂಡು, ಗೃಹಜ್ಯೋತಿ ಯೋಜನೆ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. 9,70,833 ಮಹಿಳೆಯರು ‘ಗೃಹಲಕ್ಷ್ಮಿ’ ಯೋಜನೆ ಫಲಾನುಭವಿಯಾಗಲು ನೋಂದಾಯಿಸಿಕೊಂಡಿದ್ದಾರೆ. ಯುವನಿಧಿ ಯೋಜನೆಗೆ ಸಂಬಂಧಿಸಿ ಬೆಳಗಾವಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ 16,849 ನಿರುದ್ಯೋಗಿಗಳು ನೋಂದಣಿ ಮಾಡಿಕೊಂಡಿದ್ದಾರೆ’ ಎಂದು ವಿವರಿಸಿದರು.
‘ಸ್ವಾತಂತ್ರ್ಯ ಎಂದರೆ ಸ್ವಾಭಿಮಾನ. ತಮ್ಮ ಬದುಕನ್ನೇ ಪಣಕ್ಕಿಟ್ಟು, ದೇಶಕ್ಕೆ ಇಂತಹ ಸ್ವಾಭಿಮಾನ ತಂದುಕೊಟ್ಟ ಮಹನೀಯರನ್ನು ಇಂದು ನಾವೆಲ್ಲರೂ ನೆನಪಿಸಿಕೊಳ್ಳಬೇಕು. ಸ್ವಾತಂತ್ರ್ಯ ಹೋರಾಟಕ್ಕೆ ಬೆಳಗಾವಿ ಜಿಲ್ಲೆಯೂ ಅಪಾರ ಕೊಡುಗೆ ನೀಡಿದೆ. ಅಪ್ರತಿಮ ಹೋರಾಟಗಾರರು, ದೇಶಭಕ್ತರು, ಸ್ವಾಭಿಮಾನಿ ಸೇನಾನಿಗಳನ್ನು ದೇಶಕ್ಕೆ ಸಮರ್ಪಿಸಿದ ಗಡಿನಾಡು ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿತ್ತು’ ಎಂದು ಸ್ಮರಿಸಿದರು.
ಸಂಸದೆ ಮಂಗಲಾ ಅಂಗಡಿ, ಶಾಸಕ ಆಸೀಫ್ ಸೇಠ್, ವಿಧಾನ ಪರಿಷತ್ ಸದಸ್ಯ ಸಾಬಣ್ಣ ತಳವಾರ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಪಾಟೀಲ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೊಯರ್, ನಗರ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ ಇತರರಿದ್ದರು. ವಿವಿಧ ತುಕಡಿಗಳು, ಶಾಲಾ–ಕಾಲೇಜು ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.