ಬೆಳಗಾವಿ: ‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರದ ಎಲ್ಲ ಯೋಜನೆಗಳು ಪಾರದರ್ಶಕವಾಗಿ ಜನರಿಗೆ ತಲುಪಬೇಕು. ಈ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು’ ಎಂದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ನಿಗಮದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಈಗಾಗಲೇ ಅಂಬೇಡ್ಕರ್ ವಸತಿ ಶಾಲೆಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆ, ಕುಂದು ಕೊರತೆ ಸೇರಿದಂತೆ ಅಗತ್ಯ ಪ್ರಗತಿ ವರದಿಯ ಮಾಹಿತಿ ಪಡೆದುಕೊಳ್ಳಾಗಿದೆ. ವಸತಿ ಶಾಲೆಗಳಲ್ಲಿ ಸ್ವಚ್ಛತೆ, ಶೌಚಾಲಯ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳಿಗೆ ತೊಂದರೆ ಆಗಬಾರದು’ ಎಂದು ಸೂಚನೆ ನೀಡಿದರು.
‘ಸರ್ಕಾರದ ಮಾರ್ಗಸೂಚಿ ಅನ್ವಯ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಅನುಷ್ಠಾನ ಸಮಿತಿ ರಚನೆ ಮಾಡಬೇಕು. ನಿಯಮಾನುಸಾರ ಸದಸ್ಯರ ಆಯ್ಕೆ ಮಾಡಬೇಕು. ಒಂದು ವೇಳೆ ಸಮಿತಿ ರಚನೆ ವಿಳಂಬವಾದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ನೇರವಾಗಿ ಹೊಣೆಯಾಗುತ್ತಾರೆ’ ಎಂದು ಎಚ್ಚರಿಸಿದರು.
‘ಎಸ್.ಸಿ, ಎಸ್.ಟಿ ಶಿಕ್ಷಣ ವಸತಿ ನಿಲಯಗಳಲ್ಲಿ ಶೇ 10 ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬೇಕು ಎಂದು ನಿರ್ದೇಶನವಿದೆ. ಅದೇ ರೀತಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರವೇಶ ನೀಡಬೇಕು’ ಎಂದು ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ರಾಹುಲ್ ಕಾಂಬಳೆ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ, ಪರಿಶಿಷ್ಟ ಜಾತಿ– ಪರಿಶಿಷ್ಟ ಪಂಗಡ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಮುಖಂಡರು, ಸದಸ್ಯರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.