ಸೋಮವಾರ, ಆಗಸ್ಟ್ 8, 2022
23 °C
ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆಗಳ ಫಲಾನುಭವಿಗಳ ಜತೆ ಸಂವಾದ

ಬಡವರ ಕಲ್ಯಾಣ ಕೇಂದ್ರ ಸರ್ಕಾರದ ಆಶಯ: ಸಚಿವ ಸೋಮ ಪ್ರಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಕೇಂದ್ರ ಸರ್ಕಾರವು ಕಳೆದ ಎಂಟು ವರ್ಷಗಳ ಅವಧಿಯಲ್ಲಿ ಬಡವರು ಹಾಗೂ ರೈತರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಇದರಿಂದ ದೇಶವು ಆರ್ಥಿಕ ಪ್ರಾಬಲ್ಯದತ್ತ ದಾಪುಗಾಲು ಹಾಕುತ್ತಿದೆ ಎಂದು ಕೇಂದ್ರ‌ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ರಾಜ್ಯ ಸಚಿವ ಸೋಮ‌ ಪ್ರಕಾಶ ಹೇಳಿದರು.

ಸರ್ಕಾರ ಎಂಟು ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದ ಸೆಂಟ್ರಲ್ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಫಲಾನುಭವಿಗಳ ಜತೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

2014ಕ್ಕಿಂತ ಮುಂಚಿತವಾಗಿ ದೇಶದಲ್ಲಿ ಇದ್ದ ಪರಿಸ್ಥಿತಿ ಈಗ ಸಂಪೂರ್ಣ ಭಿನ್ನವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಹೊಸಭರವಸೆ ಎಲ್ಲರಲ್ಲಿ ಗರಿಗೆದರಿವೆ. ಸೇವೆ, ಉತ್ತಮ ಆಡಳಿತ ಹಾಗೂ ಬಡವರ ಕಲ್ಯಾಣ ಎಂಬ ಧ್ಯೇಯದೊಂದಿಗೆ ದೇಶವನ್ನು ವಿಶ್ವಗುರುವಾಗಿಸಲು ಸಂಕಲ್ಪ ಮಾಡಲಾಗಿದೆ ಎಂದರು.

ಸ್ಟಾರ್ಟ್ಅಪ್ ಕೈಗಾರಿಕೆಗಳಿಂದ ದೇಶದ ಔದ್ಯೋಗಿಕ ರಂಗದಲ್ಲಿ ವಿಕಾಸವಾಗುತ್ತಿದೆ ಎಂದರು.

ರಾಜ್ಯ ಸರ್ಕಾರವು ಕೂಡ ಉತ್ತಮ ಆಡಳಿತ ನೀಡುತ್ತಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅನುಷ್ಠಾನದಿಂದ ದೇಶದ ರೈತರ ಕಲ್ಯಾಣ ಯೋಜನೆಗಳ ಪ್ರಮಾಣ ನಾಲ್ಕು ಪಟ್ಟು ಹೆಚ್ಚಳವಾಗಿದೆ. ದೂರದೃಷ್ಟಿಯ ಯೋಜನೆಗಳ ಸೇವೆ ಮತ್ತು ದಕ್ಷ ಆಡಳಿತದಿಂದ ದೇಶ ಸರ್ವಾಂಗೀಣ ಅಭಿವೃದ್ಧಿ ಹೊಂದುತ್ತಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ  ಗೋವಿಂದ ಕಾರಜೋಳ ಪ್ರಸ್ತಾವಿಕ ಮಾತನಾಡಿ, ರೈತರ  ಕಾಳಜಿಯೊಂದಿಗೆ ಜಾರಿಗೊಳಿಸಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಸರ್ಕಾರದಿಂದ ವಾರ್ಷಿಕ ₹ 6 ಸಾವಿರ. ಹಾಗೂ ರಾಜ್ಯ ಸರ್ಕಾರದಿಂದ ₹ 4 ಸಾವಿರ  ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮೆಯಾಗುತ್ತಿದೆ. ವಯೋವೃದ್ಧರು, ವಿಧವೆಯರು, ಬಡವರು ಮೊದಲಾದ ಸುಮಾರು 60 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಸರ್ಕಾರ ಸಹಾಯ ಹಸ್ತ ನೀಡುತ್ತಿರುವುದರಿಂದ  ಬದಲಾವಣೆ ಕಂಡಿದೆ ಎಂದರು .

ಜಲಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ನಳದ ಸಂಪರ್ಕ ಕಲ್ಪಿಸಲಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ 8 ಲಕ್ಷ ಮನೆಗಳಿಗೆ ನಲ್ಲಿಗಳ ಸಂಪರ್ಕ ಕಲ್ಪಿಸುವ ಗುರಿ ಹೊಂದಲಾಗಿದೆ. ಈವರೆಗೆ 2.35ಲಕ್ಷ ಮನೆಗಳಿಗೆ ನಲ್ಲಿಗಳ ಮೂಲಕ ಶುದ್ಧ ಕುಡಿಯುವ ನೀರು ಪೂರೈಸಲಾಗುತ್ತಿದೆ ಎಅಅಂದೂ ತಿಳಿಸಿದರು.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾತನಾಡಿ, ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದೇಶದ 75 ಸ್ಥಳಗಳಲ್ಲಿ ಕೇಂದ್ರ ಸಚಿವರು ಈ ರೀತಿಯ ಸಂವಾದವನ್ನು ನಡೆಸುತ್ತಿದ್ದು, ಕರ್ನಾಟಕದಲ್ಲಿ ಬೆಂಗಳೂರು ಹಾಗೂ ಬೆಳಗಾವಿಯಲ್ಲಿ ಸಂವಾದ ಕಾರ್ಯಕ್ರಮ ನಡೆಯುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ,ಜಲಜೀವನ ಮಿಷನ್, ಪ್ರಧಾನಮಂತ್ರಿ‌ ಆವಾಸ್ ಯೋಜನೆ, ಉಜ್ವಲ್ ಯೋಜನೆ, ಆಯುಷ್ಮಾನ್ ಭಾರತ, ಪ್ರಧಾನಮಂತ್ರಿ ಮುದ್ರಾ ಯೋಜನೆ, ಪೋಷಣ ಅಭಿಯಾನ, ಪ್ರಧಾನಮಂತ್ರಿ ಮಾತೃವಂದನಾ ಯೋಜನೆ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ, ಸ್ವಚ್ಛಭಾರತ ಯೋಜನೆ, ಸ್ಮಾರ್ಟ್ ಸಿಟಿ ಯೋಜನೆ, ಒಂದು ದೇಶ; ಒಂದು ರೇಷನ್ ಕಾರ್ಡ್ ಯೋಜನೆ; ಪ್ರಧಾನಮಂತ್ರಿ ಸ್ವನಿಧಿ ಯೋಜನೆ, ಗರೀಬ್ ಕಲ್ಯಾಣ ಅನ್ನ ಯೋಜನೆಯ ಫಲಾನುಭವಿಗಳು ಸಂವಾದದಲ್ಲಿ ಭಾಗವಹಿಸಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು

ಮುಜರಾಯಿ, ಹಜ್ ಹಾಗೂ ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ , ಸಂಸದೆ  ಮಂಗಲಾ ಸುರೇಶ ಅಂಗಡಿ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ದುರ್ಯೋಧನ ಐಹೊಳೆ, ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಖ್ತಾರ ಹುಸೇನ ಪಠಾಣ, ಶಾಸಕ ಅಭಯ ಪಾಟೀಲ, ವಿಧಾನ ಪರಿಷತ್ ಸದಸ್ಯ ಡಾ.ಸಾಬಣ್ಣ ತಳವಾರ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ., ಕೇಂದ್ರ ಸಚಿವರ ಆಪ್ತ ಕಾರ್ಯದರ್ಶಿ ಬಸಂತ್ ಗರ್ಗ್ ಮತ್ತಿತರರು ವೇದಿಕೆಯಲ್ಲಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು