ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ: ಅಚ್ಚುಕಟ್ಟಾಗಿ ನಡೆಯಲಿ-ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್

ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ
Published 18 ಮಾರ್ಚ್ 2024, 16:25 IST
Last Updated 18 ಮಾರ್ಚ್ 2024, 16:25 IST
ಅಕ್ಷರ ಗಾತ್ರ

ಬೆಳಗಾವಿ: ‘ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಕ್ರಮ, ಅನಗತ್ಯ ಗೊಂದಲ ಮತ್ತು ಅನಾನುಕೂಲ ಉಂಟಾಗದಂತೆ ಅಚ್ಚುಕಟ್ಟಾಗಿ ವ್ಯವಸ್ಥೆ ಕಲ್ಪಿಸಬೇಕು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜನೆಗೊಂಡವರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚಿಸಿದರು.

ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ಸೋಮವಾರ ನಡೆದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಮಾರ್ಚ್ 25ರಿಂದ ಏಪ್ರಿಲ್ 6ರವರೆಗೆ ನಡೆಯಲಿರುವ ಪರೀಕ್ಷೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸಬೇಕು. ಅಕ್ರಮ ಚಟುವಟಿಕೆಗೆ ಅವಕಾಶ ಕೊಡಬಾರದು’ ಎಂದರು.

‘ಎಲ್ಲ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರ ತಲುಪಬೇಕು. ಇದಕ್ಕೆ ಪೂರಕವಾಗಿ ವಿದ್ಯಾರ್ಥಿಗಳಿಗೆ ಅಗತ್ಯ ಬಸ್ ವ್ಯವಸ್ಥೆ ಕಲ್ಪಿಸಬೇಕು. ಪರೀಕ್ಷಾ ದಿನದಂದು ಆಯಾ ಕೇಂದ್ರಗಳಲ್ಲಿ ಪೊಲೀಸ್ ಇಲಾಖೆಯಿಂದ ಭದ್ರತೆ ಒದಗಿಸಬೇಕು. ಪರೀಕ್ಷಾರ್ಥಿಗಳು, ಪರೀಕ್ಷಾ ಕರ್ತವ್ಯಕ್ಕೆ ನಿಯೋಜನೆಗೊಂಡ ಶಿಕ್ಷಕರು, ಅಧಿಕಾರಿಗಳು ಮತ್ತು ಸಿಬ್ಬಂದಿ ಹೊರತುಪಡಿಸಿ, ಉಳಿದವರಿಗೆ ಕೇಂದ್ರ ಪ್ರವೇಶಿಸಲು ಅವಕಾಶ ನೀಡಬಾರದು’ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ, ‘ಪರೀಕ್ಷೆಯಲ್ಲಿ ಪಶ್ನೆಪತ್ರಿಕೆ ಸೋರಿಕೆಯಾದರೆ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು’ ಎಂದರು.
ಡಿಡಿಪಿಐ ಮೋಹನಕುಮಾರ ಹಂಚಾಟೆ, ‘ಎಲ್ಲ ಪರೀಕ್ಷೆ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಲಾಗಿದೆ. ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರು, ಶೌಚಗೃಹ ಮತ್ತಿತರ ಮೂಲಸೌಕರ್ಯ ಒದಗಿಸಲಾಗಿದೆ’ ಎಂದು ತಿಳಿಸಿದರು.

ಡಯಟ್‌ ಪ್ರಾಚಾರ್ಯ ಎಸ್.ಡಿ.ಗಾಂಜಿ, ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಸಹಾಯಕ ಅಧಿಕ್ಷಕರು ಭಾಗವಹಿಸಿದ್ದರು.

ಪರೀಕ್ಷಾ ಕೇಂದ್ರದಿಂದ 200 ಮೀಟರ್ ಸುತ್ತಲಿನ ಪರಿಸರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸರ್ಕಾರದ ಸೂಚನೆಗಳನ್ನು ಎಲ್ಲ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು –ನಿತೇಶ್‌ ಪಾಟೀಲ ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT