ಶುಕ್ರವಾರ, ಅಕ್ಟೋಬರ್ 30, 2020
20 °C
ಎಸ್.ಸಿ.ಪಿ., ಟಿ.ಎಸ್.ಪಿ ಪ್ರಗತಿ ಪರಿಶೀಲಿಸಿದ ಜಿಲ್ಲಾಧಿಕಾರಿ

ಎಸ್‌ಸಿಪಿ, ಟಿಎಸ್‌ಪಿ ಅನುದಾನ: ಗುರಿ ಸಾಧಿಸದಿದ್ದರೆ ಕ್ರಮ- ಜಿಲ್ಲಾಧಿಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ವಿಶೇಷ ಘಟಕ ಯೋಜನೆ (ಎಸ್‌ಸಿಪಿ) ಮತ್ತು ಗಿರಿಜನ ಉಪ ಯೋಜನೆಯಲ್ಲಿ (ಟಿಎಸ್‌ಪಿ) ಹಂಚಿಕೆಯಾದ ಅನುದಾನ ಖರ್ಚು ಮಾಡುವುದು ಕಡ್ಡಾಯವಾಗಿದೆ. ಕೋವಿಡ್–19 ಕಾರಣದಿಂದ ಪ್ರಗತಿ ಕುಂಠಿತಗೊಂಡಿತ್ತು. ಆದರೆ, ಈಗ ಪರಿಸ್ಥಿತಿ ಸ್ವಲ್ಪ ಮಟ್ಟಿಗೆ ಸುಧಾರಿಸಿರುವುದರಿಂದ ನಿಗದಿತ ಗುರಿ ಸಾಧಿಸಲು ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೂಚಿಸಿದರು.

ಇಲ್ಲಿ ಎಸ್.ಸಿ.ಪಿ., ಟಿ.ಎಸ್.ಪಿ. ಅನುದಾನದಲ್ಲಿ ನಡೆದಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಭೌತಿಕ ಮತ್ತು ಆರ್ಥಿಕ ಪ್ರಗತಿ ಸಾಧಿಸದಿದ್ದರೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಜವಾಬ್ದಾರರಾಗುತ್ತಾರೆ. ಒಂದು ವೇಳೆ ಪ್ರಗತಿ ಸಾಧಿಸದಿದ್ದರೆ ಇಲಾಖೆಯ ಅಧಿಕಾರಿಗಳ ವಿರುದ್ಧ ನಿಯಮಾವಳಿ ಪ್ರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.

‘ಮಾರ್ಚ್‌ವರೆಗೆ ಕಾಯದೆ ಆಯಾ ತಿಂಗಳಿಗೆ ನಿಗದಿಪಡಿಸಿದ ಗುರಿ ತಲುಪಬೇಕು. ಒಂದು ವೇಳೆ ಕ್ರಿಯಾಯೋಜನೆ ಅನುಮೋದನೆ ಆಗಿರದಿದ್ದರೆ ಪಡೆಯಲು ತಕ್ಷಣ ಕ್ರಮ ವಹಿಸಬೇಕು. ಕ್ರಿಯಾಯೋಜನೆಗೆ ಅನುಮೋದನೆ ದೊರೆತ ಕೂಡಲೆ ನಿಯಮಾನುಸಾರ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು’ ಎಂದು ತಿಳಿಸಿದರು.

‘ಬಹುತೇಕ ಇಲಾಖೆಗೆ ಅನುದಾನ ಹಂಚಿಕೆಯಾಗಿದೆ ಎಂದು‌ ಸಮಾಜ ಕಲ್ಯಾಣ ಇಲಾಖೆ ತಿಳಿಸಿದೆ. ಆದ್ದರಿಂದ ಆಯಾ ಇಲಾಖೆಯ ಅಧಿಕಾರಿಗಳು ತಮ್ಮ ಕೇಂದ್ರ ಕಚೇರಿಯ ಜತೆ ಚರ್ಚಿಸಿ ಮುಂದುವರಿಯಬೇಕು. ಮಹಾನಗರ ಪಾಲಿಕೆ ಹಾಗೂ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಕೂಡ ಮುಂದಿನ ಸಭೆಯ ವೇಳೆಗೆ ಪ್ರಗತಿ ತೋರಿಸಬೇಕು’ ಎಂದು ತಾಕೀತು ಮಾಡಿದರು.

‘ಎಸ್.ಸಿ.ಪಿ. ಮತ್ತು ಟಿ.ಎಸ್.ಪಿ ಅನುಷ್ಠಾನಗೊಳಿಸುವ ಇಲಾಖೆಯ ಅಧಿಕಾರಿಗಳಿಗೆ ಅ. 15ರಂದು ನೂತನ ತಂತ್ರಾಂಶದ ಕುರಿತು ತರಬೇತಿ ಕಾರ್ಯಕ್ರಮ ನಡೆಯಲಿದೆ. ಮುಂದಿನ ದಿನಗಳಲ್ಲಿ ಪ್ರಗತಿಯನ್ನು ಆನ್‌ಲೈನ್‌ ಮೂಲಕ ಪರಿಶೀಲಿಸಲಾಗುವುದು. ಹೀಗಾಗಿ, ಎಲ್ಲರೂ ಕಡ್ಡಾಯವಾಗಿ ತರಬೇತಿಗೆ   ಹಾಜರಾಗಬೇಕು’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ದರ್ಶನ್ ಎಚ್.ವಿ., ಮಹಾನಗರ ಪಾಲಿಕೆ ಆಯುಕ್ತ ಜಗದೀಶ್ ಕೆ.ಎಚ್., ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.