ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರದಿಂದ ರಾಜ್ಯ ಪ್ರವೇಶಕ್ಕೆ ನೀಡಲಾಗುವ ಇ-ಪಾಸ್‌ ವ್ಯವಸ್ಥೆ ಸ್ಥಗಿತ

ಕುಗನೊಳ್ಳಿ ಚೆಕ್ ಪೋಸ್ಟ್‌ಗೆ ಭೇಟಿ ನೀಡಿದ ಗೃಹಸಚಿವ ಬಸವರಾಜ ಬೊಮ್ಮಾಯಿ
Last Updated 30 ಮೇ 2020, 10:41 IST
ಅಕ್ಷರ ಗಾತ್ರ

ಬೆಳಗಾವಿ: ‘ನೆರೆಯ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುತ್ತಿರುವ ಜನರಲ್ಲಿ ಅತಿ ಹೆಚ್ಚು ಸೋಂಕು ಕಂಡುಬಂದಿದೆ. ಇದು ಇನ್ನೂ ಹೆಚ್ಚಳವಾಗುವ ಸಾಧ್ಯತೆ ಇದೆ. ಅದಕ್ಕಾಗಿ ರಾಜ್ಯ ಪ್ರವೇಶಕ್ಕೆ ನೀಡಲಾಗುತ್ತಿದ್ದ ಇ-ಪಾಸ್ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ’ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಕುಗನೊಳ್ಳಿ ಬಳಿ ಇರುವ ಅಂತರ್ ರಾಜ್ಯ ಚೆಕ್ ಪೋಸ್ಟ್ ಗೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಅವರು ಈ ವಿಷಯ ಹೇಳಿದರು.

‘ಮುಂಬರುವ ದಿನಗಳಲ್ಲಿ ಇ-ಪಾಸ್ ಇಲ್ಲದೇ ಬರುವವರನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಸರ್ಕಾರದ ಮಾರ್ಗಸೂಚಿ ಪ್ರಕಾರ ಎಲ್ಲರನ್ನೂ ತಪಾಸಣೆ ನಡೆಸಿ ಅಗತ್ಯವಿದ್ದರೆ ಕ್ವಾರಂಟೈನ್ ಮಾಡಬೇಕು’ ಎಂದು ಸೂಚಿಸಿದರು.

‘ಕೋವಿಡ್- 19 ನಿಯಂತ್ರಣದಲ್ಲಿ ಗಡಿ ಭಾಗದ ಚೆಕ್ ಪೋಸ್ಟ್ ಪಾತ್ರ ಪ್ರಮುಖವಾಗಿದೆ. ಅಂತರರಾಜ್ಯ ಗಡಿಯ ಚೆಕ್ ಪೋಸ್ಟ್ ನಲ್ಲಿ ಕೆಲಸ ಮಾಡುತ್ತಿರುವವರು ಯಾವುದೇ ಒತ್ತಡ ಅಥವಾ ವಶೀಲಿಗೆ ಮಣಿಯದೇ ಕಾರ್ಯನಿರ್ವಹಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ಪೊಲೀಸ್, ಆರೋಗ್ಯ ಸೇರಿದಂತೆ ಕೊರೊನಾ ವಾರಿಯರ್ಸ್‌ಗಳಿಗೂ ಸೋಂಕು ಕಂಡು ಬರುತ್ತಿರುವುದರಿಂದ ಬಹಳ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕಿದೆ. ರಾಜ್ಯ ಪ್ರವೇಶಿಸುವ ಗೂಡ್ಸ್ ವಾಹನಗಳ ಚಾಲಕ ಮತ್ತು ಕ್ಲೀನರ್ ಅವರ ಆರೋಗ್ಯವನ್ನು ಕೂಡ ಕಡ್ಡಾಯವಾಗಿ ತಪಾಸಣೆ ಮಾಡಬೇಕು’ ಎಂದು ಹೇಳಿದರು.

ಕಡ್ಡಾಯ ತಪಾಸಣೆಗೆ ಸೂಚನೆ

‘ಆರೋಗ್ಯ ಸಿಬ್ಬಂದಿಯ ಗಂಟಲು ದ್ರವ ಮಾದರಿಯನ್ನು ಪರಿಶೀಲಿಸಬೇಕು, ವೈದ್ಯಕೀಯ ಸಿಬ್ಬಂದಿ ವೈಯಕ್ತಿಕ ಸುರಕ್ಷಾ ಕವಚ (ಪಿಪಿಇ) ಬಳಸಬೇಕು’ ಎಂದು ಸೂಚಿಸಿದರು.

ಇದೇ ಸಂದರ್ಭದಲ್ಲಿ ಚೆಕ್ ಪೋಸ್ಟ್ ನಲ್ಲಿ ಕಲ್ಪಿಸಲಾಗಿರುವ ಸಂಚಾರಿ ವಿಶ್ರಾಂತಿ ಗೃಹವನ್ನು ಸಚಿವರು ಪರಿಶೀಲಿಸಿದರು.

ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಬೆಳಗಾವಿ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್, ಬೆಳಗಾವಿ ಆಯುಕ್ತರಾದ ಬಿ‌.ಎಸ್.ಲೋಕೇಶ್ ಕುಮಾರ್,ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ್ ರೆಡ್ಡಿ, ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಸೇರಿದಂತೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT