ಮಂಗಳವಾರ, ಅಕ್ಟೋಬರ್ 27, 2020
22 °C

ಸುರೇಶ ಅಂಗಡಿ ಸ್ಮಾರಕ ನಿರ್ಮಾಣಕ್ಕೆ ಕ್ರಮ: ಬಿ.ಎಸ್. ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ ಅಂಗಡಿ ಅವರ ಸ್ಮಾರಕ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಅಂಗಡಿ ಕುಟುಂಬದವರಿಗೆ ಸಾಂತ್ವನ ಹೇಳಲು ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ವೇಳೆ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

ನವದೆಹಲಿಯಲ್ಲಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಡೆದ ಸ್ಥಳದಲ್ಲೇ ಸ್ಮಾರಕ ನಿರ್ಮಿಸಲಾಗುವುದು. ಇದಕ್ಕಾಗಿ ಅಗತ್ಯ ಅನುದಾನ ನೀಡುತ್ತೇನೆ. ಈ ನಿಟ್ಟಿನಲ್ಲಿ ತಯಾರಿ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಸ್ಮಾರಕ ನಿರ್ಮಿಸುವುದು ನನ್ನ ಕರ್ತವ್ಯವಾಗಿದೆ ಎಂದರು.

ಸುರೇಶ ಅಂಗಡಿ ಅವರು ನಮ್ಮೊಂದಿಗೆ ಇಲ್ಲ ಎನ್ನುವುದನ್ನು ಕಲ್ಪನೆ ಮಾಡಿಕೊಳ್ಳುವುದಕ್ಕೂ ಆಗುತ್ತಿಲ್ಲ. ನಾಲ್ಕು ಬಾರಿ ಸಂಸದರಾಗಿ, ರೈಲ್ವೆ ಖಾತೆ ರಾಜ್ಯ ಸಚಿವರಾಗಿ ರಾಜ್ಯಕ್ಕೆ ಅಪಾರ ಕೊಡುಗೆಯನ್ನು ಅವರು ನೀಡಿದ್ದಾರೆ. ಜಾಫರ್ ಶರೀಫ್ ಮಾದರಿಯಲ್ಲಿ ರೈಲ್ವೆಯಲ್ಲಿ ಒಳ್ಳೆಯ ಕೆಲಸ ಮಾಡುತ್ತಿದ್ದೀರಿ ಎಂದು ಅವರಿಗೆ ಹಲವು ಬಾರಿ ಹೇಳಿದ್ದೆ ಎಂದರು.

ಅಂಗಡಿ ಕುಟುಂಬಕ್ಕೆ ಯಡಿಯೂರಪ್ಪ ಸಾಂತ್ವನ
ಬೆಳಗಾವಿ:
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಈಚೆಗೆ ನಿಧನರಾದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಕುಟುಂಬದವರನ್ನು ಬುಧವಾರ ಭೇಟಿಯಾಗಿ ಸಾಂತ್ವನ ಹೇಳಿದರು.

ಇಲ್ಲಿನ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿರುವ ನಿವಾಸದಲ್ಲಿ, ಅಂಗಡಿ ತಾಯಿ ಸೋಮವ್ವ, ಪತ್ನಿ ಮಂಗಳಾ, ಪುತ್ರಿಯರಾದ ಶ್ರದ್ಧಾ, ಸ್ಫೂರ್ತಿ ಅವರಿಗೆ ಧೈರ್ಯ ತುಂಬಿದರು. ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್, ಗೃಹ ಸಚಿವ ಬಸವರಾಜ ಬೊಮ್ಮಾಯಿ ಇದ್ದರು.

ಭಗವಂತನ ಇಚ್ಛೆ ಏನಿತ್ತೋ ಗೊತ್ತಿಲ್ಲ. ಅವರು ನಮ್ಮನ್ನು ಬಿಟ್ಟು ಹೋಗಿದ್ದಾರೆ. ಜ್ವರ ಬಂದಿದ್ದರೂ ತಕ್ಷಣ ಚಿಕಿತ್ಸೆ ಪಡೆಯಲಿಲ್ಲ. ದೆಹಲಿಗೆ ಹೋದ ಮೇಲೂ ಸಕಾಲದಲ್ಲಿ ಚಿಕಿತ್ಸೆ ತೆಗೆದುಕೊಳ್ಳಲಿಲ್ಲ. ಆರೋಗ್ಯವಾಗಿದ್ದೇನೆ. ಹೀಗಾಗಿ ನನಗೇನೂ ಆಗುವುದಿಲ್ಲ ಎಂಬ ಭ್ರಮೆಯಲ್ಲಿ ಅವರು ಇದ್ದರೆಂದು ಕಾಣಿಸುತ್ತದೆ ಎಂದರು.

ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಗೋವಾ ನ್ಯಾಯಾಂಗ ನಿಂದನೆ ಅರ್ಜಿ ಹಾಕಿರುವ ಕುರಿತು ಪ್ರತಿಕ್ರಿಯೆಗೆ ಅವರು ನಿರಾಕರಿಸಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ, ಶಾಸಕರಾದ ಅಭಯ ಪಾಟೀಲ, ಅನಿಲ್ ಬೆನಕೆ, ಬಿಜೆಪಿ ರಾಜ್ಯ ಘಟಕದ ವಕ್ತಾರ ಎಂ.ಬಿ. ಝಿರಲಿ ಇದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು