ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಗ್ರ ಅಭಿವೃದ್ಧಿ ಆಶಯ ಈಡೇರಲಿ: ಗೋವಿಂದ ಕಾರಜೋಳ

ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದಲ್ಲಿ ಕಾರಜೋಳ
Last Updated 28 ಏಪ್ರಿಲ್ 2022, 10:52 IST
ಅಕ್ಷರ ಗಾತ್ರ

ಬೆಳಗಾವಿ: ‘ದೇಶದ ಸಮಗ್ರ ಅಭಿವೃದ್ಧಿಯ ಆಶಯ ಈಡೇರಬೇಕಿದೆ’ ಎಂದು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ನಗರದ ಕಾಂಗ್ರೆಸ್ ಬಾವಿ (ವೀರಸೌಧ) ಆವರಣದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಗ್ರಾಮಗಳ ಅಭಿವೃದ್ದಿ ಮೂಲಕ ದೇಶದ ಸಮಗ್ರ ಅಭಿವೃದ್ಧಿ ಆಗಬೇಕು ಎಂಬ ಆಶಯವನ್ನು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹೊಂದಿದ್ದರು. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಅವರ ಕನಸನ್ನು ನನಸು ಮಾಡಬೇಕಿದೆ’ ಎಂದು ಆಶಿಸಿದರು.

‘ಗ್ರಾಮಗಳ ಬೆಳವಣಿಗೆಯೇ ದೇಶದ ಬೆಳವಣಿಗೆ. ರೈತರು ಮತ್ತು ಗುಡಿ ಕೈಗಾರಿಕೆಗಳ ಅಭಿವೃದ್ಧಿಗೆ ಹಾಗೂ ಗ್ರಾಮೀಣ ವಿಭಾಗದಲ್ಲಿ ಶಿಕ್ಷಣಕ್ಕೆ ಮಹತ್ವ ನೀಡಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು’ ಎಂದರು.

‘ಎಕೆಎಎಂ (ಆಜಾದಿ ಕಾ ಅಮೃತ ಮಹೋತ್ಸವ)– ಅಂತ್ಯೋದಯ ಕಾರ್ಯಕ್ರಮದಲ್ಲಿ, 90 ದಿನಗಳವರೆಗೆ ವಿವಿಧ 13 ಇಲಾಖೆಗಳ ಯೋಜನೆಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ಆಶಯಗಳನ್ನು ಈಡೇರಿಸುವುದು ಎಲ್ಲ ಇಲಾಖೆಗಳ ಸಿಬ್ಬಂದಿ ಹಾಗೂ ಅಧಿಕಾರಿಗಳ ಜವಾಬ್ದಾರಿಯಾಗಿದೆ’ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ, ‘ದೇಶಕ್ಕಾಗಿ ಹಲವು ಮಹನೀಯರು ಬದುಕು ಸಮರ್ಪಣೆ ಮಾಡಿದ್ದಾರೆ. ಅವರ ಬಗ್ಗೆ ಯುವ ಪೀಳಿಗೆಗೆ ತಿಳಿಸುವ ಅಗತ್ಯವಿದೆ’ ಎಂದರು.

ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಚೆಕ್ ವಿತರಣೆ ಮಾಡಲಾಯಿತು. ಇದಕ್ಕೂ ಮುಂಚೆ ವೀರ ಸೌಧದ ಆವರಣದಲ್ಲಿ ಗಾಂಧೀಜಿ ಪುತ್ಥಳಿಗೆ ಗಣ್ಯರು ಗೌರವ ಸಲ್ಲಿಸಿದರು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿ.ಪಂ. ಸಿಇಒ ದರ್ಶನ್ ಎಚ್.ವಿ., ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ್ ಘಾಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಮಹಾನಗರ ಪಾಲಿಕೆಯ ಉಪ ಆಯುಕ್ತೆ (ಆಡಳಿತ) ಭಾಗ್ಯಶ್ರೀ ಹುಗ್ಗಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT