ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆಯರ ಮೇಲಿನ ದೌರ್ಜನ್ಯ: ಗಂಭೀರವಾಗಿ ಪರಿಗಣಿಸಿ-ಪ್ರಮೀಳಾ ನಾಯ್ಡು

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಸೂಚನೆ
Last Updated 16 ಮಾರ್ಚ್ 2022, 14:21 IST
ಅಕ್ಷರ ಗಾತ್ರ

ಬೆಳಗಾವಿ: ‘ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಜರುಗಿಸಬೇಕು’ ಎಂದುರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಆರ್.ಪ್ರಮೀಳಾ ನಾಯ್ಡು ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಸರ್ಕಾರಿ ಮತ್ತು ಖಾಸಗಿ ಸ್ಥಳಗಳಲ್ಲಿ ಕೆಲಸ ಮಾಡುವ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ. ಆದ್ದರಿಂದ ನಿಯಮಾವಳಿ ಪ್ರಕಾರ ಪ್ರತಿ ಸ್ಥಳದಲ್ಲೂ ಆಂತರಿಕ ದೂರು ನಿರ್ವಹಣಾ ಸಮಿತಿಯನ್ನು ಕಡ್ಡಾಯವಾಗಿ ರಚಿಸಬೇಕು’ ಎಂದು ತಾಕೀತು ಮಾಡಿದರು.

ಹಿರಿಯ ಅಧಿಕಾರಿಗಳ ಗಮನಕ್ಕೆ ತನ್ನಿ:

‘ದೌರ್ಜನ್ಯ ನಡೆದರೆ ಮೊದಲು ಸಮಿತಿಗೆ ದೂರು ಸಲ್ಲಿಸಬೇಕು. ಅಲ್ಲಿ ಬಗೆಹರಿಯದಿದ್ದರೆ ಪೊಲೀಸ್ ಠಾಣೆಗೆ ದೂರು ಕೊಡಬೇಕು. ಲೈಂಗಿಕ ಕಿರುಕುಳ ನಡೆದಾಗ ಮಹಿಳೆಯರು ಏನು ಮಾಡಬೇಕು ಎನ್ನುವ ಕುರಿತು ತಿಳಿವಳಿಕೆ ಕಾರ್ಯಕ್ರಮಗಳನ್ನು ನಿಯಮಿತವಾಗಿ ಹಮ್ಮಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಆತ್ಮಹತ್ಯೆ ಪ್ರವೃತ್ತಿ ಹೆಚ್ಚಾಗುತ್ತಿದೆ. ಆದ್ದರಿಂದ ಶಿಕ್ಷಣ ಸಂಸ್ಥೆ ಸೇರಿದಂತೆ ವಿವಿಧ ಕಡೆಗಳಲ್ಲಿ ಆತ್ಮಹತ್ಯೆ ತಡೆ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು’ ಎಂದು ನಿರ್ದೇಶನ ನೀಡಿದರು.

‘ಅತ್ಯಾಚಾರಕ್ಕೆ ಒಳಗಾದ ಹಾಗೂ ಲೈಂಗಿಕ ದೌರ್ಜನ್ಯದಿಂದ ನೊಂದ ಬಾಲಕಿಯರು ಅಥವಾ ಮಕ್ಕಳಿಗೆ ಸರ್ಕಾರದ ನಿಯಮಾವಳಿ ಪ್ರಕಾರ ನೀಡಬೇಕಾದ ಪರಿಹಾರ ಮೊತ್ತವನ್ನು ತಕ್ಷಣವೇ ಕೊಡಿಸಬೇಕು. ಉಳಿದ ಮೊತ್ತವನ್ನು ಪ್ರಕರಣ ಇತ್ಯರ್ಥಗೊಂಡ ನಂತರ ಒದಗಿಸಬೇಕು’ ಎಂದು ಸೂಚಿಸಿದರು.

‘ಮಹಿಳೆಯರ ಮೇಲಿನ ದೌರ್ಜನ್ಯ ಕುರಿತು ಸ್ಥಳೀಯ ಪೊಲೀಸ್ ಅಧಿಕಾರಿಗಳು ಸ್ಪಂದಿಸದಿದ್ದರೆ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.

136 ಪ್ರಕರಣ:

‘ಕೆಲವು ಪ್ರಕರಣಗಳಲ್ಲಿ ಕಾನೂನು ಸೇವಾ ಪ್ರಾಧಿಕಾರದಿಂದ ಕೂಡ ನೆರವು ಒದಗಿಸಲಾಗಿದೆ. ಏನೇ ದೂರು ಬಂದರೂ ತಕ್ಷಣವೇ ಸ್ಪಂದಿಸುವ ಕೆಲಸವನ್ನು ಜಿಲ್ಲಾಡಳಿತ ಮಾಡುತ್ತಿದೆ. ಮಹಿಳೆಯರ ಸುರಕ್ಷತೆ ಮತ್ತು ಕಲ್ಯಾಣಕ್ಕೆ ಸಂಬಂಧಿಸಿದಂತೆ ಸರ್ಕಾರ ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳ ಬಗ್ಗೆ ಅರಿವು ಕಾರ್ಯಕ್ರಮವನ್ನು ನಿರಂತರವಾಗಿ ನಡೆಸಲಾಗುತ್ತಿದೆ‘ ಎಂದು ಹೇಳಿದರು.

‘2021-22ನೇ ಸಾಲಿನಲ್ಲಿ ಒಟ್ಟು 136 ಕೌಟುಂಬಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಸಮಾಲೋಚನೆ ಮೂಲಕ ಒಂದು ಪ್ರಕರಣ ಇತ್ಯರ್ಥಗೊಂಡಿದೆ. ಒಂದು ಪ್ರಕರಣ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಬಸವರಾಜ ವರವಟ್ಟಿ ಮಾಹಿತಿ ನೀಡಿದರು.

‘ವರದಕ್ಷಿಣೆ ಕಿರುಕುಳ, ಲೈಂಗಿಕ ಕಿರುಕುಳ, ಕೌಟುಂಬಿಕ ಕಲಹ ಹಾಗೂ ಅತ್ಯಾಚಾರ ಸೇರಿದಂತೆ ಒಟ್ಟಾರೆ 1,090 ಪ್ರಕರಣಗಳು ಸಾಂತ್ವನ ಕೇಂದ್ರಗಳಲ್ಲಿ ದಾಖಲಾಗಿವೆ. ಆ ಪೈಕಿ 891 ಪ್ರಕರಣಗಳು ಇತ್ಯರ್ಥಗೊಂಡಿವೆ. 199 ಬಾಕಿ ಇವೆ. ಬಾಲ್ಯವಿವಾಹಕ್ಕೆ ಸಂಬಂಧಿಸಿದಂತೆ 122 ದೂರುಗಳು ಸ್ವೀಕೃತಗೊಂಡಿದ್ದು, ಇದರಲ್ಲಿ 14 ಎಫ್‌ಐಆರ್‌ ದಾಖಲಿಸಲಾಗಿದೆ’ ಎಂದು ವಿವರಿಸಿದರು.

ಡಿಸಿಪಿ ‍ಪಿ.ವಿ. ಸ್ನೇಹಾ, ಡಿಎಚ್‌ಒ ಡಾ.ಎಸ್.ವಿ. ಮುನ್ಯಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಅಧ್ಯಕ್ಷರ ಸೂಚನೆಗಳೇನು?

* ಮಹಿಳಾ ಕಾರ್ಮಿಕರಿಗೆ ಹಕ್ಕುಗಳ ಮಾಹಿತಿ ಇರುವುದಿಲ್ಲ. ಅವರಿಗೆ ಕಾರ್ಮಿಕ ಇಲಾಖೆಯವರು ಜಾಗೃತಿ ಮೂಡಿಸಬೇಕು.

* ಸರ್ಕಾರಿ ಆಸ್ಪತ್ರೆಗೆ ದಾಖಲಾಗುವ ಮಹಿಳಾ ರೋಗಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು. ವಾರ್ಡ್‌ ಮತ್ತು ಶೌಚಾಲಯಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು.

* ಕೆಲಸ ಮಾಡುವ ಮಹಿಳೆಯರಿಗೆ ಅಗತ್ಯ ಸುರಕ್ಷತೆ ಸೇರಿದಂತೆ ಎಲ್ಲ ನೆರವನ್ನೂ ಒದಗಿಸಬೇಕು.

* ಪೊಲೀಸ್ ಠಾಣೆ ಮಟ್ಟದಲ್ಲಿ ಸೂಕ್ತ ನೆರವು ದೊರೆಯದಿದ್ದರೆ ಕೂಡಲೇ ಹಿರಿಯ ಅಧಿಕಾರಿಗಳ ಗಮನಸೆಳೆಯುವ ಕೆಲಸ ಮಾಡಬೇಕು.

* ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಗೆ ಹಾಗೂ ಪೋಕ್ಸೊ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಾಲಕಿಯರಿಗೆ ಒಂದೇ ಸೂರಿನಡಿ ವೈದ್ಯಕೀಯ, ಕಾನೂನು ನೆರವು ದೊರೆಯಲೆಂದು ಆರಂಭಿಸಿರುವ ‘ಸಖಿ ಒನ್ ಸ್ಟಾಪ್ ಸೆಂಟರ್’ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು.

ಜಾಗೃತಿ ಮೂಡಿಸಬೇಕು

ಕಾನೂನು ಸೇವಾ ಪ್ರಾಧಿಕಾರದಿಂದ ಮಹಿಳೆಯರಿಗೆ ಉಚಿತ ಕಾನೂನು ನೆರವು ಒದಗಿಸಲಾಗುತ್ತಿದೆ. ಇದರ ಪ್ರಯೋಜನ ಪಡೆದುಕೊಳ್ಳುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಬೇಕು.

–ಆರ್. ಪ್ರಮೀಳಾ ನಾಯ್ಡು, ಅಧ್ಯಕ್ಷೆ, ರಾಜ್ಯ ಮಹಿಳಾ ಆಯೋಗ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT