ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಮ್ಲಜನಕ ಕೊರತೆ ಆಗದಂತೆ ನೋಡಿಕೊಳ್ಳಿ

ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸೂಚನೆ
Last Updated 4 ಮೇ 2021, 11:05 IST
ಅಕ್ಷರ ಗಾತ್ರ

ಬೆಳಗಾವಿ: ‘ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಲಭ್ಯವಿರುವ ಹಾಸಿಗೆಗಳ ತಾಜಾ ಮಾಹಿತಿಯನ್ನು ಜಾಲತಾಣದ ಮೂಲಕ ನೀಡಬೇಕು. ಆಮ್ಲಜನಕ ಮತ್ತು ರೆಮ್‌ಡಿಸಿವಿರ್‌ ಕೊರತೆ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದು ಉಪ ಮುಖ್ಯಮಂತ್ರಿಯೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಾಕೀತು ಮಾಡಿದರು.

ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಮಂಗಳವಾರ ‘ಝೂಮ್’ ಮೂಲಕ ಚರ್ಚಿಸಿದರು.

‘ಈಗಿನ ಸಂಕಷ್ಟದ ಪರಿಸ್ಥಿತಿಯಲ್ಲಿ ಜನರ ಆರೋಗ್ಯದ ಸಮಸ್ಯೆಗಳಿಗೆ ಸ್ಪಂದಿಸಲು ಎಲ್ಲ ಅಧಿಕಾರಿಗಳು ಸಮನ್ವಯತೆಯೊಂದಿಗೆ 24 ಗಂಟೆಯೂ ಕೆಲಸಕ್ಕೆ ಸಿದ್ಧವಾಗಬೇಕು. ಸೋಂಕಿತರ ಚಿಕಿತ್ಸೆಯಲ್ಲಿ ಆಮ್ಲಜನಕ ಕೊರತೆಯ ಬಗ್ಗೆ ಸಾಕಷ್ಟು ವರದಿಗಳು ಬರುತ್ತಿವೆ. ಆದ್ದರಿಂದ ಜಿಲ್ಲೆಯಲ್ಲಿ ಲಭ್ಯವಿರುವ ದಾಸ್ತಾನು, ದೈನಂದಿನ ಬಳಕೆ ಹಾಗೂ ತುರ್ತು ಸಂದರ್ಭದಲ್ಲಿ ಪೂರೈಕೆಯ ಮೇಲೆ ನಿರಂತರ ನಿಗಾ ವಹಿಸಬೇಕು’ ಎಂದು ನಿರ್ದೇಶನ ನೀಡಿದರು.

‘ರೆಮ್‌ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ ಆಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಹೆಚ್ಚಿನ ದರಕ್ಕೆ ಮಾರುವ ಆಸ್ಪತ್ರೆಗಳಿಗೆ ನೋಟಿಸ್ ನೀಡಬೇಕು. ಆದರೆ, ಸೇವಾ ಶುಲ್ಕ ಮಾತ್ರ ಪಡೆಯಲು ಅವಕಾಶ ಕಲ್ಪಿಸಬೇಕು. ಲಭ್ಯವಿರುವ ವೆಂಟಿಲೇಟರ್ ಸೌಲಭ್ಯ ಸಮರ್ಪಕ ಬಳಕೆಗೆ‌ ಅಗತ್ಯವಿರುವ ತಂತ್ರಜ್ಞರನ್ನು ನೇಮಿಸಿಕೊಳ್ಳಬೇಕು. ಅಕ್ಕಪಕ್ಕದ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಆಮ್ಲಜನಕ ಮತ್ತಿತರ ಸೌಲಭ್ಯಗಳನ್ನು ಸಂದರ್ಭಕ್ಕೆ ತಕ್ಕಂತೆ ಪರಸ್ಪರ ವಿನಿಮಯ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.

ಉದ್ಯೋಗ ನೀಡಿ:

‘ಕೋವಿಡ್ ಹರಡುತ್ತಿರುವುದರಿಂದ ವಲಸೆ ಕಾರ್ಮಿಕರು ಜಿಲ್ಲೆಗೆ ಹಿಂದಿರುಗುತ್ತಿದ್ದಾರೆ. ಹೀಗೆ ಹುಟ್ಟೂರಿಗೆ ಬರುವ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕಡ್ಡಾಯವಾಗಿ ಉದ್ಯೋಗ ಕಲ್ಪಿಸಬೇಕು. ಸರ್ಕಾರಿ ಜಾಗದಲ್ಲಿ ಉದ್ಯೋಗ ಸೃಷ್ಟಿಸಬೇಕು’ ಎಂದು ಸಲಹೆ ನೀಡಿದರು.

‘ಮಾಧ್ಯಮ‌ ಪ್ರತಿನಿಧಿಗಳು, ಮನೆ ಮನೆಗೆ ಸಿಲಿಂಡರ್ ಪೂರೈಸುವವರು, ಕ್ಷೌರಿಕರು, ಅಗಸ ವೃತ್ತಿಯಲ್ಲಿ ತೊಡಗಿರುವವರಿಗೆ ಕೋವಿಡ್ ಲಸಿಕೆಯನ್ನು ಆದ್ಯತೆಯ ಮೇರೆಗೆ ನೀಡಬೇಕು’ ಎಂದು ಸೂಚಿಸಿದರು.

‘ಜಿಲ್ಲಾಧಿಕಾರಿಗಳ ಬಳಿ ಸಾಕಷ್ಟು ಅನುದಾನ ಲಭ್ಯವಿದೆ. ಒಂದು ವೇಳೆ ಹಣಕಾಸು, ಔಷಧೋಪಕರಣಗಳ ಖರೀದಿ ಸೇರಿದಂತೆ ಸರ್ಕಾರದಿಂದ ಯಾವುದೇ ರೀತಿಯ ನೆರವು ಅಗತ್ಯವಿದ್ದರೆ ತಕ್ಷಣವೇ ಗಮನಕ್ಕೆ ತರಬೇಕು’ ಎಂದರು.

ಕೊರತೆ ಆಗದಂತೆ ಕ್ರಮ:

‘ಆಮ್ಲಜನಕ ಕೊರತೆ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳು ಮತ್ತು ಚಿಕಿತ್ಸಾ ಸೌಲಭ್ಯಗಳ ಮಾಹಿತಿಯನ್ನು ಜಾಲತಾಣದ ಮೂಲಕ ನೀಡಲು ತಕ್ಷಣವೇ ಕ್ರಮ ವಹಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಡಾ.ಕೆ. ಹರೀಶ್ ಕುಮಾರ್ ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಯೋಗೇಶ್ವರ್, ‘ಜಿಲ್ಲೆಯಲ್ಲಿ ರೋಗಿಗಳ ಸಂಖ್ಯೆ ಆಧರಿಸಿ 47 ಆಸ್ಪತ್ರೆಗಳಿಗೆ ರೆಮ್‌ಡಿಸಿವಿರ್ ಒದಗಿಸಲಾಗುತ್ತಿದೆ. ಸದ್ಯಕ್ಕೆ ಆಮ್ಲಜನಕ ಹಾಗೂ ರೆಮ್‌ಡಿವಿಸಿರ್‌ ಕೊರತೆ ಇಲ್ಲ’ ಎಂದರು.

ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್, ಎಸ್ಪಿ ಲಕ್ಷ್ಮಣ ನಿಂಬರಗಿ, ಜಿ.ಪಂ. ಸಿಇಒ ಡಾ.ಎಚ್‌.ವಿ. ದರ್ಶನ್ ಇದ್ದರು.

***

‘ಹಾಸಿಗೆಗಳ ವ್ಯವಸ್ಥೆ ಇದೆ’

‘ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ 4ಸಾವಿರ ಹಾಸಿಗೆಗಳು ಇವೆ. ಇದರಲ್ಲಿ 1909 ಆಮ್ಲಜನಕ ವ್ಯವಸ್ಥೆ ಕಲ್ಪಿಸಬಹುದಾದವು. 179 ಐಸಿಯು ಮತ್ತು 137 ಐಸಿಯು ಜೊತೆಗೆ ವೆಂಟಿಲೇಟರ್ ಸೌಲಭ್ಯ ಹೊಂದಿವೆ. 77 ಹೈಫ್ಲೋ ಹಾಗೂ 543 ಹೈಫ್ಲೋ ನೇಸಲ್ ಆಮ್ಲಜನಕ ಸೌಲಭ್ಯ ಹೊಂದಿವೆ. ಸಾವಿರ ಹಾಸಿಗೆಗಳಿಗೆ ನಿರಂತರವಾಗಿ 24 ಗಂಟೆಗಳ ಕಾಲ ಒದಗಿಸುವ ಸಾಮರ್ಥ್ಯವಿದೆ’ ಎಂದು ಜಿಲ್ಲಾಧಿಕಾರಿ ಹರೀಶ್‌ಕುಮಾರ್‌ ತಿಳಿಸಿದರು.

‘ಕೋವಿಡ್ ಲಸಿಕಾಕರಣದಲ್ಲಿ ಜಿಲ್ಲೆಯು ಮುಂಚೂಣಿಯಲ್ಲಿದೆ. ಶೇ.40ರಷ್ಟು ನಡೆದಿದೆ. 32ಸಾವಿರ ಡೋಸ್‌ ಸದ್ಯದಲ್ಲೇ ಪೂರೈಕೆ ಆಗಲಿದೆ. ಪ್ರತಿ ತಾಲ್ಲೂಕು ಮಟ್ಟದಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲಾಗಿದ್ದು, ಅಗತ್ಯಬಿದ್ದರೆ ಹೋಬಳಿ ಮಟ್ಟದಲ್ಲೂ ಆರಂಭಿಸಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT