ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷಯ ಪತ್ತೆ, ಚಿಕಿತ್ಸಾ ಆಂದೋಲನ

ಮೇಯರ್‌ ಬಸಪ್ಪ ಚಿಕ್ಕಲದಿನ್ನಿ ಅವರಿಂದ ಚಾಲನೆ
Last Updated 2 ಜನವರಿ 2019, 13:53 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯಾದ್ಯಂತ ಜ. 2ರಿಂದ 12ರವರೆಗೆ ಹಮ್ಮಿಕೊಂಡಿರುವ ‘ಸಕ್ರಿಯ ಕ್ಷಯ ರೋಗ ಪತ್ತೆ ಆಂದೋಲನ’ಕ್ಕೆ ಇಲ್ಲಿನ ರಾಮನಗರ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಚಾಲನೆ ನೀಡಲಾಯಿತು. ಇದೇ ವೇಳೆ, ಕಫ ತಪಾಸಣೆ ಕೇಂದ್ರವನ್ನು ಉದ್ಘಾಟಿಸಲಾಯಿತು.

ಮೇಯರ್‌ ಬಸಪ್ಪ ಚಿಕ್ಕಲದಿನ್ನಿ ಮಾತನಾಡಿ, ‘ಕ್ಷಯ ಸಾಂಕ್ರಾಮಿಕ ರೋಗವಾಗಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಮಾಜದ ಸಹಕಾರ ಅಗತ್ಯ’ ಎಂದರು.

ನಗರಪಾಲಿಕೆ ಸದಸ್ಯೆ ಮೈನಾಬಾಯಿ ಚೌಗುಲಾ ಮಾತನಾಡಿ, ‘ಆರೋಗ್ಯ ಕಾರ್ಯಕರ್ತರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಕೊಳಚೆ ಪ್ರದೇಶಗಳಲ್ಲಿ ಆರೋಗ್ಯ ಅರಿವು ಕಾರ್ಯಕ್ರಮಗಳನ್ನು ಆಗಾಗ ಹಮ್ಮಿಕೊಳ್ಳಬೇಕು. ಜನರಲ್ಲಿ ಜಾಗೃತಿ ಮೂಡಿಸಿ ಕ್ಷಯದಂತಹ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದರು.

ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಶೈಲಜಾ ತಮ್ಮಣ್ಣವರ ಮಾತನಾಡಿ, ‘ಜಿಲ್ಲೆಯಲ್ಲಿ 1129 ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದೆ. ಒಟ್ಟು 10.52 ಲಕ್ಷ ಜನಸಂಖ್ಯೆ ಗುರುತಿಸಿ ಮನೆ-ಮನೆಗಳಿಗೆ ಭೇಟಿ ನೀಡಿ ಕ್ಷಯರೋಗ ತಪಾಸಣೆ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ. ಜಿಲ್ಲೆಯ ಶೇ 20ರಷ್ಟು ಜನಸಂಖ್ಯೆಯನ್ನು ತಲುಪಿ ಕ್ಷಯರೋಗ ತಪಾಸಣೆ ಮಾಡುವ ಗುರಿ ಇದೆ. ಇದಕ್ಕಾಗಿ ಜಿಲ್ಲೆಯಾದ್ಯಂತ 1680 ನುರಿತ ಆರೋಗ್ಯ ಸಹಾಯಕರು ಹಾಗೂ ಆಶಾ/ಅಂಗನವಾಡಿ ಕಾರ್ಯಕರ್ತೆಯರನ್ನು ಒಳಗೊಂಡ ತಂಡಗಳನ್ನು ರಚಿಸಲಾಗಿದೆ’ ಎಂದು ಮಾಹಿತಿ ನೀಡಿದರು.

‘ಪ್ರತಿ ತಂಡದವರು ಈ ಅವಧಿಯಲ್ಲಿ ನಿತ್ಯ 50ರಿಂದ 60 ಮನೆಗಳಿಗೆ ಭೇಟಿ ನೀಡಲಿದ್ದಾರೆ. ಕುಟುಂಬದ ಎಲ್ಲ ಸದಸ್ಯರಿಗೆ ಕ್ಷಯ ರೋಗದ ಕುರಿತು ಜಾಗೃತಿ ಮೂಡಿಸಲಿದ್ದಾರೆ. ಕ್ಷಯ ರೋಗದ ಲಕ್ಷಣಗಳುಳ್ಳ ಕುಟುಂಬದ ಸದಸ್ಯರ ಕಫವನ್ನು ಸ್ಥಳದಲ್ಲಿಯೇ ಸಂಗ್ರಹಿಸಿ ಯೋಜಿತ ಕಫ ತಪಾಸಣಾ ಕೇಂದ್ರಕ್ಕೆ ಕಳುಹಿಸುತ್ತಾರೆ. ಕ್ಷಯ ರೋಗ ಇರುವುದು ಕಂಡುಬಂದಲ್ಲಿ ಸ್ಥಳದಲ್ಲಿಯೇ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು’ ಎಂದು ತಿಳಿಸಿದರು.

‘ಜಿಲ್ಲೆಯ ಎಲ್ಲ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಉಚಿತ ಕ್ಷ-ಕಿರಣ ತಪಾಸಣೆಗೆ ವ್ಯವಸ್ಥೆ ಮಾಡಲಾಗಿದೆ. ಸಂಶಯಾಸ್ಪದ ರೋಗಿಗಳ ಕ್ಷ-ಕಿರಣ ತಪಾಸಣೆ ಮಾಡಲಾಗುವುದು. ಕ್ಷ-ಕಿರಣ ಪರೀಕ್ಷೆಯಲ್ಲಿ ವಿಪರೀತ ಪಲಿತಾಂಶ ಬಂದ ಸಂಶಯಾಸ್ಪದ ಕ್ಷಯ ರೋಗಿಗಳಿಗೆ ಸಿಬಿನ್ಯಾಟ್ (ತ್ವರಿತ ಕ್ಷಯರೋಗ ತಪಾಸಣಾ ಯಂತ್ರ) ಸೌಲಭ್ಯವನ್ನು ಅಥಣಿ, ಗೋಕಾಕ, ಚಿಕ್ಕೋಡಿ, ಸವದತ್ತಿ ಹಾಗೂ ಬೆಳಗಾವಿಯ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಒದಗಿಸಲಾಗಿದೆ’ ಎಂದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಂಜಯ ಡುಮ್ಮಗೋಳ ಮಾತನಾಡಿದರು. ವೈದ್ಯಾಧಿಕಾರಿ ಡಾ.ಜಗದೀಶ ಪಾಟ್ನೆ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸವರಾಜ ಯಲಿಗಾರ, ಹಿರಿಯ ಆರೋಗ್ಯ ಸಹಾಯಕ ಸಿ.ಜಿ. ಅಗ್ನಿಹೊತ್ರಿ, ವಸಂತ ಪಾತಳಿ, ದೀಪಾ ಕುಂದಗೋಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT