ಪ್ರತಿಭಟನೆಯಲ್ಲಿ ಶಿಕ್ಷಕರು; ಶಾಲೆಗಳು ಬಂದ್

ಮಂಗಳವಾರ, ಜೂಲೈ 23, 2019
20 °C
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

ಪ್ರತಿಭಟನೆಯಲ್ಲಿ ಶಿಕ್ಷಕರು; ಶಾಲೆಗಳು ಬಂದ್

Published:
Updated:
Prajavani

ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರಾಥಮಿಕ ಶಾಲಾ ಶಿಕ್ಷಕರು ಮಂಗಳವಾರ ಕೆಲಸದಿಂದ ದೂರ ಉಳಿದು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದರಿಂದ, ಬೆಳಗಾವಿ ಶೈಕ್ಷಣಿಕ ಜಿಲ್ಲೆಯ ಪ್ರಾಥಮಿಕ ಸರ್ಕಾರಿ ಶಾಲೆಗಳು ಬಂದ್ ಆಗಿದ್ದವು. ಶಾಲೆಗಳಿಗೆ ಅನಧಿಕೃತ ರಜೆ ನೀಡಿದಂತಾಗಿತ್ತು.

‘ಮಕ್ಕಳಿಗೆ ರಜೆ ಕೊಟ್ಟು ಪ್ರತಿಭಟನೆಯಲ್ಲಿ ಭಾಗವಹಿಸಿದ್ದೇವೆ. ಹೀಗಾಗಿ, ಶಾಲೆಗಳು ಬಂದ್ ಆಗಿವೆ. ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಈ ರೀತಿಯ ಹೋರಾಟ ಅನಿವಾರ್ಯವಾಗಿದೆ. ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕರೆಯ ಮೇರೆಗೆ ಪ್ರತಿಭಟನೆ ನಡೆಸುತ್ತಿದ್ದೇವೆ. ಸರ್ಕಾರದ ಗಮನ ಸೆಳೆಯುವುದು ನಮ್ಮ ‍ಪ್ರಮುಖ ಉದ್ದೇಶವಾಗಿದೆ’ ಎಂದು ಶಿಕ್ಷಕರು ತಿಳಿಸಿದರು.

ಜಿಲ್ಲೆಯ ವಿವಿಧೆಡೆಯಿಂದ ಬಂದು ಗಾಂಧಿ ಭವನದ ಬಳಿ ಸಮಾವೇಶಗೊಂಡು ಕಾಲೇಜು ರಸ್ತೆ–ರಾಣಿ ಚನ್ನಮ್ಮ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ‌ ಬಂದ ನೂರಾರು ಶಿಕ್ಷಕರು, ತಮ್ಮ ಬೇಡಿಕೆಗಳನ್ನು ಮಂಡಿಸಿದರು.

‘ಪ್ರಾಥಮಿಕ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಹಾಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಬೇಕು. ಸರ್ಕಾರಿ ನೌಕರರಿಗೆ ಮಾರಕವಾಗಿರುವ ನೂತನ ಪಿಂಚಣಿ ವ್ಯವಸ್ಥೆ (ಎನ್‌ಪಿಎಸ್) ರದ್ದುಪಡಿಸಬೇಕು. ಹಳೆಯ ಪಿಂಚಣಿ ವ್ಯವಸ್ಥೆಯನ್ನೇ ಮುಂದುವರಿಸಬೇಕು. ಈಗ ನಡೆಯುತ್ತಿರುವ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅಕ್ಟೋಬರ್ ವೇಳೆಗೆ ಕೇವಲ ಕೋರಿಕೆ ವರ್ಗಾವಣೆ ಮಾಡಬೇಕು. ಎಲ್ಲ ಪ್ರಾಥಮಿಕ ಶಾಲೆಗಳಲ್ಲೂ ಎಲ್‌ಕೆಜಿ ಮತ್ತು ಯುಕೆಜಿ ಆರಂಭಿಸಬೇಕು. ಹೆಚ್ಚುವರಿ ಶಿಕ್ಷಕರೆಂದು ಪರಿಗಣಿಸುವ ಪ್ರಕ್ರಿಯೆಯಲ್ಲಿ ನ್ಯೂನತೆಗಳು ಇರುವುದನ್ನು ಸರಿಪಡಿಸಬೇಕು. 6ನೇ ವೇತನ ಆಯೋಗದ ಅಂತಿಮ ವರದಿಯ ಶಿಫಾರಸುಗಳನ್ನು ಕೂಡಲೇ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿದರು.

‘ಈ ಬೇಡಿಕೆಗಳ ಈಡೇರಿಕೆ ಕುರಿತು ಸರ್ಕಾರ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಶಿಕ್ಷಕರ ದಿನದಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ಘಟಕದ ಅಧ್ಯಕ್ಷ ಜಯಕುಮಾರ ಹೆಬಳಿ, ಕಾರ್ಯದರ್ಶಿ ಮಲ್ಲಿಕಾರ್ಜುನ ಸಿದ್ದನಗೌಡ ನೇತೃತ್ವ ವಹಿಸಿದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !