ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕಿತ್ಸೆ ನಿರಾಕರಿಸಿದರೆ ಪರವಾನಗಿ ರದ್ದು: ಜಿಲ್ಲಾಧಿಕಾರಿ ಎಚ್ಚರಿಕೆ

ಖಾಸಗಿ ಆಸ್ಪತ್ರೆಗಳಿಗೆ ಜಿಲ್ಲಾಧಿಕಾರಿ ಎಚ್ಚರಿಕೆ
Last Updated 26 ನವೆಂಬರ್ 2020, 11:50 IST
ಅಕ್ಷರ ಗಾತ್ರ

ಬೆಳಗಾವಿ: ‘ಎಚ್.ಐ.ವಿ. ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸಿದರೆ ಅಂತಹಖಾಸಗಿ ಆಸ್ಪತ್ರೆಗಳ ಪರವಾನಗಿ ರದ್ದುಪಡಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಎಚ್ಚರಿಕೆ ನೀಡಿದರು.

ಇಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಎಚ್.ಐ.ವಿ., ಏಡ್ಸ್ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಈ ಸೋಂಕಿತರಿಗೆ ಸರ್ಕಾರದಿಂದ ನೀಡಲಾಗುತ್ತಿರುವ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಬೇಕು. ಅವರ ಮಕ್ಕಳಿಗೆ ಶಾಲೆಗಳಲ್ಲಿ ತಾರತಮ್ಯ ಆಗದಂತೆ ಎಚ್ಚರಿಕೆ ವಹಿಸಬೇಕು. ಎಲ್ಲಿಯೇ ತಾರತಮ್ಯ ಅಥವಾ ಕಿರುಕುಳ ಕಂಡುಬಂದರೆ ಪೊಲೀಸ್ ಪ್ರಕರಣ ದಾಖಲಿಸಬೇಕು. ಇಂತಹ ಪ್ರಕರಣದಲ್ಲಿ ಸೋಂಕಿತರ ಬಗ್ಗೆ ಸಹಾನುಭೂತಿಯಿಂದ ನಡೆದುಕೊಳ್ಳಬೇಕು’ ಎಂದು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನೆರವು ನೀಡಬೇಕು:

‘ಸೋಂಕಿತರಿಗೆ, ಎಲ್ಲ ಇಲಾಖೆಯವರೂ ತಮ್ಮ ವ್ಯಾಪ್ತಿಯಲ್ಲಿ ಬರುವ ನೆರವು ನೀಡಬೇಕು. ಸೋಂಕಿತರಿಗೆ ಏಕಗವಾಕ್ಷಿ ವ್ಯವಸ್ಥೆಯಡಿ ನೀಡಲಾಗುವ ಸಹಾಯ–ಸೌಲಭ್ಯಗಳಿಗೆ ಸಂಬಂಧಿಸಿದಂತೆ ಸರ್ಕಾರದಿಂದ ಹೊರಡಿಸುವ ಸುತ್ತೋಲೆ ಮತ್ತು ಆದೇಶ ಪ್ರತಿಗಳನ್ನು ಎಲ್ಲರಿಗೂ ಒದಗಿಸಬೇಕು’ ಎಂದು ಮಹಾನಗರ ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್ ತಿಳಿಸಿದರು.

‘ಸೋಂಕಿತರು ಮತ್ತು ಬಾಧಿತರಿಗೆ ಏಕಗವಾಕ್ಷಿ ಮೂಲಕ ವೈದ್ಯಕೀಯ ಹಾಗೂ ಸಾಮಾಜಿಕ ಸೌಲಭ್ಯಗಳನ್ನು ಒದಗಿಸುವ ಉದ್ದೇಶವಿದೆ. ಇದಕ್ಕಾಗಿ ವಿವಿಧ ಇಲಾಖೆಗಳ ನೆರವು ಮತ್ತು ಸಮನ್ವಯದ ಅಗತ್ಯವಿದೆ’ ಎಂದು ಜಿಲ್ಲಾ ಏಡ್ಸ್‌ ನಿಯಂತ್ರಣಾಧಿಕಾರಿಯೂ ಆಗಿರುವ ಜಿಲ್ಲಾ ಕ್ಷಯರೋಗ ನಿಂತ್ರಣಾಧಿಕಾರಿ ಅನಿಲ್ ಕೊರಬು ಹೇಳಿದರು.

ಡಿಸಿಪಿ ಚಂದ್ರಶೇಖರ ನೀಲಗಾರ, ಡಿಎಚ್‌ಒ ಡಾ.ಎಸ್.ವಿ. ಮುನ್ಯಾಳ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಸವರಾಜ ತುಕ್ಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕ ಗುರುನಾಥ ಕಡಬೂರ, ಕಾರ್ಮಿಕ ಅಧಿಕಾರಿ ತರನ್ನುಂ ಇದ್ದರು.

***

‘ತಂಬಾಕು ಮಾರಿದರೆ ಅಂಗಡಿ ತೆರವು’

‘ದಂಡ ವಿಧಿಸಿದ ಬಳಿಕವೂ ನಿಯಮಾವಳಿ ಮೀರಿ ತಂಬಾಕು ಉತ್ಪನ್ನಗಳನ್ನು ಮಾರುವ ಅಂಗಡಿಗಳ ಪರವಾನಗಿ ರದ್ದುಗೊಳಿಸಲಾಗುವುದು. ಜೊತೆಗೆ, ಅಂತಹ ಅಂಗಡಿಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಎಚ್ಚರಿಕೆ ನೀಡಿದರು.

ಇಲ್ಲಿ ಗುರುವಾರ ನಡೆದ ಕೋಟ್ಪಾ ಕಾಯ್ದೆ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಎಲ್ಲ ಶಾಲಾ-ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಕಾಯ್ದೆಯಡಿ ಹೆಚ್ಚು ಪ್ರಕರಣಗಳನ್ನು ದಾಖಲಿಸಿ, ದಂಡ ವಿಧಿಸಬೇಕು. ಆರೋಗ್ಯ ಇಲಾಖೆ ನೇತೃತ್ವದಲ್ಲಿ ದಾಳಿ ನಡೆಸುವಾಗ ಪೊಲೀಸ್ ಇಲಾಖೆ ಕೂಡ ನೆರವು ನೀಡಬೇಕು’ ಎಂದು ಸೂಚಿಸಿದರು.

‘ಪ್ರಮುಖ ಧಾರ್ಮಿಕ ಮತ್ತು ಪ್ರವಾಸಿತಾಣಗಳಲ್ಲಿ ತಂಬಾಕು ಮಾರಾಟ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಪ್ರತಿ ತಾಲ್ಲೂಕಿನಲ್ಲೂ ಕಠಿಣ ಕ್ರಮ ಕೈಗೊಂಡರೆ ಕಾನೂನುಬಾಹಿರ ಮಾರಾಟ ತಡೆಯಬಹುದು’ ಎಂದರು.

ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ.ಬಸವರಾಜ ತುಕ್ಕಾರ, ‘ಜಿಲ್ಲೆಯಲ್ಲಿ 6ಸಾವಿರಕ್ಕೂ ಅಧಿಕ ಶಾಲೆಗಳಿವೆ. ಅವುಗಳ ಸುತ್ತಮುತ್ತ ತಂಬಾಕು ಮಾರಾಟ ಸಂಪೂರ್ಣವಾಗಿ ನಿಷೇಧಿಸಲು ಕಟ್ಟುನಿಟ್ಟಿನ ಕ್ರಮದ ಅಗತ್ಯವಿದೆ. ಕೆಲ ತಾಲ್ಲೂಕುಗಳಲ್ಲಿ ತಂಬಾಕು ಬೆಳೆ ಬದಲು ಪರ್ಯಾಯ ಬೆಳೆಗಳಿಗೆ ಕೃಷಿ ಇಲಾಖೆಯಿಂದ ಪ್ರೋತ್ಸಾಹ ನೀಡಬೇಕು’ ಎಂದು ಕೋರಿದರು.

***

ಕೈಗಾರಿಕೆಗಳ ಆವರಣದಲ್ಲಿ ತಂಬಾಕು, ಸಿಗರೇಟು ಸೇವನೆ ನಿಯಂತ್ರಣಕ್ಕೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಕ್ರಮ ವಹಿಸಬೇಕು. ಬಸ್ ನಿಲ್ದಾಣದಲ್ಲಿ ಜಾಗೃತಿ ಮೂಡಿಸಬೇಕು
ಎಂ.ಜಿ. ಹಿರೇಮಠ
ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT