ಹಡೆದೊಡವೆ ವಸ್ತುವನು ಮೃಢಭಕ್ತರಿಗಲ್ಲದೆ
ಕಡಬಡ್ಡಿಯ ಕೊಡಲಾಗದು.
ಬಂದಡೊಂದು ಲೇಸು, ಬಾರದಿದ್ದಡೆ ಲೇಸು
ಅಲ್ಲಿದ್ದಡೆಯೂ ಲಿಂಗಕ್ಕೆ ಬೋನ, ಇಲ್ಲಿದ್ದಡೆಯೂ ಲಿಂಗಕ್ಕೆ ಬೋನ
ಲಿಂಗದೊಡವೆ ಲಿಂಗಕ್ಕೆ ಸಾರಿತ್ತಾಗಿ
ಬಂದಿತ್ತೆಂಬ ಪರಿಣಾಮವಿಲ್ಲ, ಬಾರದೆಂಬ ದುಃಖವಿಲ್ಲ.
ಇದು ಕಾರಣ ಕೂಡಲಸಂಗಮದೇವಾ,
ನಿಮ್ಮ ಶರಣರಿಗಲ್ಲದೆ ಕಡಬಡ್ಡಿಯ ಕೊಡಲಾಗದು.