ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೊಟ್ಟಿ ವಿತರಿಸಿ ವಾಟಾಳ್ ಪ್ರತಿಭಟನೆ; ಬಂಧನ, ಬಿಡುಗಡೆ

Last Updated 19 ಡಿಸೆಂಬರ್ 2018, 11:29 IST
ಅಕ್ಷರ ಗಾತ್ರ

ಬೆಳಗಾವಿ: ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚಿಸಿ, ಕ್ರಮ ಕೈಗೊಳ್ಳುವಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಇಲ್ಲಿನ ಸುವರ್ಣ ವಿಧಾನಸೌಧದ ಬಳಿ ಜೋಳದ ರೊಟ್ಟಿಗಳನ್ನು ಬುಧವಾರ ಉಚಿತವಾಗಿ ವಿತರಿಸಿ ವಿನೂತನವಾಗಿ ಪ್ರತಿಭಟನೆ ನಡೆಸುತ್ತಿದ್ದ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್‌ ಅವರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.

‘ಎಲ್ಲ ರೀತಿಯಿಂದಲೂ ಹಿಂದುಳಿದಿರುವ ಉತ್ತರ ಕರ್ನಾಟಕ ಹಾಗೂ ಹೈದರಾಬಾದ್ ಕರ್ನಾಟಕದ ಅಭಿವೃದ್ಧಿಗೆ ಪ್ರಾಮಾಣಿಕ ಚರ್ಚೆ ನಡೆಸುವಲ್ಲಿ ಜನಪ್ರತಿನಿಧಿಗಳು ವಿಫಲವಾಗಿದ್ದಾರೆ. ಹೀಗಾಗಿ ಅಧಿವೇಶನದಿಂದ ಈ ಭಾಗದ ಜನರಿಗೆ ಅನುಕೂಲವಾಗಿಲ್ಲ. ಅಧಿವೇಶನ ಮುಗಿದ ನಂತರ ಸುವರ್ಣ ವಿಧಾನಸೌಧವನ್ನು ಹೇಳುವವರು, ಕೇಳುವವರು ಯಾರೂ ಇರುವುದಿಲ್ಲ. ಅಧಿವೇಶನ ವೇಳೆ ಸುವರ್ಣ ವಿಧಾನಸೌಧದ ಬಳಿ ನೂರಾರು ಪೊಲೀಸರನ್ನು ನಿಯೋಜಿಸುವ ಮೂಲಕ ಇದೇನು ಭಾರತ–ಪಾಕಿಸ್ತಾನ ಗಡಿಯೇ ಎನ್ನುವಂಥ ವಾತಾವರಣವನ್ನು ಸರ್ಕಾರ ನಿರ್ಮಾಣ ಮಾಡಿದೆ. ಇದು ಸರಿಯಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಉತ್ತರ ಕರ್ನಾಟಕಕ್ಕೆ ಬಹಳ ಅನ್ಯಾಯವಾಗಿದೆ. ಇದನ್ನು ಖಂಡಿಸಿ ಈ ಭಾಗದ ಪ್ರಮುಖ ಆಹಾರವಾದ ಜೋಳದರೊಟ್ಟಿಯನ್ನು ಉಚಿತವಾಗಿ ವಿತರಿಸುತ್ತಿದ್ದೇನೆ’ ಎಂದು ತಿಳಿಸಿದರು.

‘ಬೆಳಗಾವಿಯನ್ನು 2ನೇ ರಾಜಧಾನಿ ಮಾಡುತ್ತೇವೆ ಎನ್ನುವುದು ಕೇವಲ ಮೋಸದ ಭರವಸೆಯಾಗಿದೆ. ಈ ಸರ್ಕಾರದಲ್ಲಿ ಯಾವ ಭರವಸೆಗಳೂ ಈಡೇರುತ್ತಿಲ್ಲ’ ಎಂದು ಕಿಡಿಕಾರಿದರು.

‘ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬೇಕಾದ ಎಲ್ಲ ಅನುಕೂಲವನ್ನೂ ಮಾಡಿಕೊಡಬೇಕು. ಇದಕ್ಕಾಗಿ ತೀವ್ರ ಹೋರಾಟ ನಡೆಸಲಾಗುವುದು. ಆದರೆ, ರಾಜ್ಯವನ್ನು ವಿಭಜನೆ ಮಾಡಬೇಕು ಎಂಬ ವಾದಕ್ಕೆ ಬೆಂಬಲ ನೀಡುವುದಿಲ್ಲ’ ಎಂದು ತಿಳಿಸಿದರು.

ಇದಕ್ಕೂ ಮುನ್ನ ಸುವರ್ಣ ಗಾರ್ಡನ್‌ ಬಳಿ ವಿವಿಧ ಸಂಘ–ಸಂಸ್ಥೆಗಳವರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ತೆರಳಿ, ಅವರಿಗೆ ಬೆಂಬಲ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT