ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಿ: ವೀರಶೈವ ಲಿಂಗಾಯತ ಮಹಾಸಭಾದವರಿಂದ ಪ್ರತಿಭಟನೆ

Last Updated 1 ಆಗಸ್ಟ್ 2022, 9:32 IST
ಅಕ್ಷರ ಗಾತ್ರ

ಬೆಳಗಾವಿ: ‘ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಪಂಗಡಗಳನ್ನು ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಬೇಕು’ ಎಂದು ಆಗ್ರಹಿಸಿ ಅಖಿಲ ಭಾರತೀಯ ವೀರಶೈವ ಲಿಂಗಾಯತ ಮಹಾಸಭಾ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ರಾಣಿ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಮಹಾಸಭಾ ಜಿಲ್ಲಾ ಘಟಕದ ಉಸ್ತುವಾರಿ ರುದ್ರಣ್ಣ ಹೊಸಕೇರಿ, ‘ನಮ್ಮ ಸಮುದಾಯದ ಮೇಲೆ ನಿರಂತರವಾಗಿ ಅನ್ಯಾಯವಾಗುತ್ತ ಬಂದಿದೆ. ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದೇವೆ. ಆದರೆ, ನಮ್ಮನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಿಲ್ಲ. ಹಾಗಾಗಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಪ್ರತಿಭಟನೆ ನಡೆಸುತ್ತಿದ್ದೇವೆ. ಕೇಂದ್ರ ಸರ್ಕಾರ ಕೂಡಲೇ ನಮ್ಮ ಬೇಡಿಕೆ ಈಡೇರಿಸಬೇಕು’ ಎಂದು ಆಗ್ರಹಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ, ‘ಸರ್ಕಾರ ನಮ್ಮ ಬೇಡಿಕೆ ಈಡೇರಿಸುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು.

ಡಾ.ವಿಶ್ವನಾಥ ಪಾಟೀಲ, ರಾಜು ಟೋಪಣ್ಣವರ, ಎಂ.ಬಿ.ಝಿರಲಿ, ಜ್ಯೋತಿ ಭಾವಿಕಟ್ಟಿ, ಡಾ.ಬಸವರಾಜ ಜಗಜಂಪಿ, ಬಿ.ಎಸ್‌.ಗವಿಮಠ ಇತರರಿದ್ದರು.

ಜನಪ್ರತಿನಿಧಿಗಳ ಗೈರು: ಆಕ್ರೋಶ

ಈ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಜಿಲ್ಲೆಯ ಲಿಂಗಾಯತ ಸಮುದಾಯದ ಶಾಸಕರು, ಸಂಸದರಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಆಹ್ವಾನ ನೀಡಿತ್ತು. ಆದರೆ, ಒಬ್ಬ ಜನಪ್ರತಿನಿಧಿಯೂ ಬಾರದ್ದಕ್ಕೆ ಆಕ್ರೋಶ ವ್ಯಕ್ತವಾಯಿತು.

ಈ ಬಗ್ಗೆ ಸುದ್ದಿಗಾರರಿಗೆ ಪ‍್ರತಿಕ್ರಿಯಿಸಿದ ಮುಖಂಡ ಸುಜಿತ್ ಮುಳಗುಂದ, ‘ಚುನಾವಣೆಯ ಟಿಕೆಟ್‌ ಹಾಗೂ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಲಿಂಗಾಯತ ಕೋಟಾ ಎನ್ನುತ್ತಾರೆ. ಆದರೆ, ಸಮುದಾಯದವರಿಗೆ ಮೀಸಲಾತಿ ಪಡೆಯುವುದಕ್ಕಾಗಿ ‍ಪ್ರತಿಭಟನೆ ನಡೆಸಲು ಬರುವುದಿಲ್ಲ. ಮುಂಬರುವ ಚುನಾವಣೆಯಲ್ಲಿ ಎಲ್ಲರಿಗೂ ತಕ್ಕ ಪಾಠ ಕಲಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT