ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಕೋವಿಡ್ 3ನೇ ಅಲೆ ನಿರ್ವಹಣೆಗೆ ಸಿದ್ಧತೆ

ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆಗಳು ಸಜ್ಜು
Last Updated 16 ಜುಲೈ 2021, 14:56 IST
ಅಕ್ಷರ ಗಾತ್ರ

ಬೆಳಗಾವಿ: ‘ಸಂಭವನೀಯ ಕೋವಿಡ್ 3ನೇ ಅಲೆ ನಿರ್ವಹಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ಡಿಎಚ್‌ಒ ಡಾ.ಎಸ್.ವಿ. ಮುನ್ಯಾಳ ತಿಳಿಸಿದರು.

ಇಲ್ಲಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್‌.ಕೆ. ಅತೀಕ್ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘39 ಖಾಸಗಿ ಆಸ್ಪತ್ರೆಗಳಲ್ಲಿ (ಚಿಕ್ಕಮಕ್ಕಳವು) 913 ಹಾಸಿಗೆಗಳನ್ನು ಗುರುತಿಸಲಾಗಿದೆ. ಅಂತೆಯೇ ಜಿಲ್ಲಾಸ್ಪತ್ರೆಯಲ್ಲಿ ಚಿಕ್ಕ ಮಕ್ಕಳ ಚಿಕಿತ್ಸೆಗೆ ಅನುಕೂಲ ಆಗುವಂತೆ 150 ಹಾಸಿಗೆಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಕನಿಷ್ಠ ಹತ್ತು ಹಾಸಿಗೆಗಳನ್ನು ಸಿದ್ಧಪಡಿಸಿಟ್ಟುಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.

‘ಮಕ್ಕಳ ಚಿಕಿತ್ಸೆಗೆ ಅತ್ಯಗತ್ಯವಾದ ಔಷಧಿಯನ್ನು ಕೂಡ ದಾಸ್ತಾನು ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ’ ಎಂದರು.

‘ಜಿಲ್ಲೆಯಲ್ಲಿ 21ಸಾವಿರ ಅಂಗವಿಕರಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಇನ್ನೂ 15ಸಾವಿರ ಮಂದಿಗೆ ಕೊಡುವುದು ಬಾಕಿ ಇದೆ. ಪೂರೈಕೆ ಆಧರಿಸಿ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ನಾಮದೇವ ಬಿಲ್ಕರ್ ತಿಳಿಸಿದರು.

ಶೇ 88ರಷ್ಟು ಬಿತ್ತನೆ:

ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಎಚ್.ಡಿ. ಕೋಳೇಕರ ಮಾತನಾಡಿ, ‘ಮುಂಗಾರು ಹಂಗಾಮಿನಲ್ಲಿ ಈವರೆಗೆ ಶೇ.88ರಷ್ಟು ಬಿತ್ತನೆಯಾಗಿದೆ. ಬಿತ್ತನೆಬೀಜ ಹಾಗೂ ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ತೊಂದರೆ ಇಲ್ಲ’ ಎಂದು ಸ್ಪಷ್ಟಪಡಿಸಿದರು.

‘ಕೋವಿಡ್ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ 22,719 ತೋಟಗಾರಿಕೆ ಬೆಳೆಗಾರರ ಪೈಕಿ 15,420 ಜನರಿಗೆ ₹ 5.63 ಕೋಟಿ ನೆರವು ತಲುಪಿಸಲಾಗಿದೆ’ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ರವೀಂದ್ರ ಹಕಾಟಿ ತಿಳಿಸಿದರು.

‘ಸದ್ಯಕ್ಕೆ ಅಂಗನವಾಡಿ ಕೇಂದ್ರಗಳು ಬಂದ್ ಇರುವುದರಿಂದ ಮಕ್ಕಳು, ಗರ್ಭಿಣಿಯರು ಹಾಗೂ ಬಾಣಂತಿಯರ ಮನೆಗಳಿಗೆ ಪೌಷ್ಟಿಕ ಆಹಾರ ವಿತರಿಸಲಾಗುತ್ತಿದೆ. ಪುಷ್ಟಿ ಹಾಗೂ ಹಾಲಿನ ಪೌಡರ್ ಅನ್ನು ಕೂಡ ಮಕ್ಕಳಿಗೆ ಒದಗಿಸಲಾಗುತ್ತಿದೆ’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಬಸವರಾಜ ವರವಟ್ಟಿ ತಿಳಿಸಿದರು.

ಕಾಮಗಾರಿ ಆರಂಭವಾಗಿಲ್ಲ:

‘ಕೋವಿಡ್ ಹಿನ್ನೆಲೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ಒದಗಿಸಲು ವಿವಿಧ ಇಲಾಖೆಯ ಸಮನ್ವಯತೆಯೊಂದಿಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. 30 ಅಂಗನವಾಡಿ ಕೇಂದ್ರಗಳ ನಿರ್ಮಾಣಕ್ಕೆ ಸಂಬಂಧಿಸಿದ ಗ್ರಾಮ ಪಂಚಾಯ್ತಿಗಳಿಗೆ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಲಾಗಿದೆ. ಇದುವರೆಗೆ ಕಾಮಗಾರಿಗಳು ಆರಂಭಗೊಂಡಿಲ್ಲ’ ಎಂದು ಹೇಳಿದರು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿ.ಪಂ. ಸಿಇಒ ಎಚ್‌.ವಿ. ದರ್ಶನ್, ಎಸ್ಪಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಚಿಕ್ಕೋಡಿ ಉಪ ವಿಭಾಗಾಧಿಕಾರಿ ಯುಕೇಶ್‌ಕುಮಾರ್, ಬೆಳಗಾವಿ ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಲೋಕೋಪಯೋಗಿ ಇಲಾಖೆ ಎಇ ಸಂಜೀವಕುಮಾರ್ ಹುಲಕಾಯಿ, ಬುಡಾ ಆಯುಕ್ತ ಪ್ರೀತಂ ನಸಲಾಪುರೆ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT