ಭಾನುವಾರ, ಸೆಪ್ಟೆಂಬರ್ 26, 2021
22 °C
ಬೇರೆಡೆ ವ್ಯಾಪಾರ ಮಾಡಿದರೆ ಕ್ರಮದ ಎಚ್ಚರಿಕೆ

ಸಗಟು ತರಕಾರಿ ಮಾರುಕಟ್ಟೆ ಸ್ಥಳಾಂತರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಇಲ್ಲಿನ ಕೇಂದ್ರ ಬಸ್‌ ನಿಲ್ದಾಣ ಸಮೀಪದ ದಂಡು ಮಂಡಳಿ ಪ್ರದೇಶದಲ್ಲಿ ನಡೆಯುತ್ತಿರುವ ಸಗಟು ತರಕಾರಿ ಮಾರುಕಟ್ಟೆಯನ್ನು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ (ಎಪಿಎಂಸಿ) ಮುಖ್ಯ ಮಾರುಕಟ್ಟೆ ಪ್ರಾಂಗಣಕ್ಕೆ ಸ್ಥಳಾಂತರಿಸಲಾಗಿದ್ದು, ರೈತರು ಮೇ 14ರಿಂದ ಎಲ್ಲ ತರಕಾರಿ ಉತ್ಪನ್ನಗಳನ್ನು ಕಡ್ಡಾಯವಾಗಿ ಅಲ್ಲಿಗೇ ಮಾರಾಟಕ್ಕೆ ತರಬೇಕು’ ಎಂದು ಕೃಷಿ ಮಾರಾಟ ಇಲಾಖೆ ಉಪನಿರ್ದೇಶಕ ಗುರುಪ್ರಸಾದ್‌ ತಿಳಿಸಿದ್ದಾರೆ.

‘ಎಲ್ಲ ಸಾಗಾಣಿಕೆದಾರರು ಕೂಡ ತರಕಾರಿ ಉತ್ಪನ್ನಗಳನ್ನು ಎಪಿಎಂಸಿ ಪ್ರಾಂಗಣಕ್ಕೇ ತರಬೇಕು. ಸರಳ ಮತ್ತು ನಿಖರವಾದ ವ್ಯಾಪಾರ– ವ್ಯವಹಾರವನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಇಲಾಖೆ ಮತ್ತು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು’ ಎಂದು ಕೋರಿದ್ದಾರೆ.

‘ತರಕಾರಿ ಮಾರುಕಟ್ಟೆ ಸ್ಥಳಾಂತರವು ರೈತರು ಹಾಗೂ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿತ್ತು. ಇದಕ್ಕಾಗಿ, ಎಸಿಎಂಸಿ ಆವರಣದಲ್ಲಿ ಆಧುನಿಕ ಸಗಟು ತರಕಾರಿ ಮಾರುಕಟ್ಟೆಯನ್ನು ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ನಿರ್ಮಿಸಲಾಗಿದೆ. 131 ಸುಸಜ್ಜಿತ ಅಂಗಡಿಗಳನ್ನು ವಿಶಾಲ ಹರಾಜು ಕಟ್ಟೆಗಳೊಂದಿಗೆ ನಿರ್ಮಿಸಲಾಗಿದೆ. ತರಕಾರಿ ವ್ಯಾಪಾರಿಗಳಿಗೆ ಅಂಗಡಿಗಳನ್ನು ಹಂಚಿಕೆ ಮಾಡಲಾಗಿದೆ. ವಿದ್ಯುತ್, ನೀರು, ರಸ್ತೆಗಳು, ಶೌಚಾಲಯ ಹಾಗೂ ಬೀದಿ ದೀಪಗಳ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

‘ಮಾರುಕಟ್ಟೆ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸೂಚಿಸಿದ್ದಾರೆ. ಹೀಗಾಗಿ, ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಗರ ಪೊಲೀಸ್‌ ಆಯುಕ್ತರು ಹಾಗೂ ಇತರ ಇಲಾಖೆಗಳ ಹಿರಿಯ ಅಧಿಕಾರಗಳೊಡನೆ ಸಗಟು ತರಕಾರಿ ವ್ಯಾಪಾರಸ್ಥರ ಸಭೆ ನಡೆಸಿ ಸೂಚನೆ ನೀಡಲಾಗಿದೆ’ ಎಂದು ತಿಳಿಸಿದ್ದಾರೆ.

‘ನಗರದ ಇತರ ಯಾವುದೇ ಪ್ರದೇಶದಲ್ಲಿ ಸಗಟು ತರಕಾರಿ ವ್ಯಾಪಾರ–ವ್ಯವಹಾರ ನಡೆಸುವುದು ಕರ್ನಾಟಕ ಕೃಷಿ ಮಾರಾಟ (ನಿಯಂತ್ರಣ ಮತ್ತು ಅಭಿವೃದ್ದಿ) ಅಧಿನಿಯಮ 1996ರ ಅನ್ವಯ ಅಪರಾಧವಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.