ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂತ್ರಸ್ತರ ಸಮಸ್ಯೆ ಆಲಿಸಲಿಲ್ಲ, ಈಗ ಪ್ರಚಾರಕ್ಕೆ ಬಂದಿದ್ದಾರೆ: ಸತೀಶ ವಾಗ್ದಾಳಿ

Last Updated 30 ಆಗಸ್ಟ್ 2021, 13:34 IST
ಅಕ್ಷರ ಗಾತ್ರ

ಬೆಳಗಾವಿ: ‘ಜಿಲ್ಲೆಯಲ್ಲಿ ಪ್ರವಾಹ ಮತ್ತು ಅತಿವೃಷ್ಟಿ ಉಂಟಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾಗ ಅವರ ಸಮಸ್ಯೆ ಕೇಳಲು ಬಿಜೆಪಿ ಮುಖಂಡರು ಬರಲಿಲ್ಲ. ಆದರೆ, ಈಗ ಮಹಾನಗರ ಪಾಲಿಕೆ ಚುನಾವಣೆ ಪ್ರಚಾರಕ್ಕೆ ಎಲ್ಲರೂ ಓಡಿ ಬಂದಿದ್ದಾರೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಾಗ್ದಾಳಿ ನಡೆಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ‘ನೆರೆ ಬಂದಿದ್ದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ನಾಲ್ವರು ಸಚಿವರಿದ್ದರು. ಒಬ್ಬರೂ ಕೋವಿಡ್ ನಿರ್ವಹಣೆ ಹಾಗೂ ಪ್ರವಾಹದ ಕುರಿತು ಒಂದು ಸಭೆಯನ್ನೂ ನಡೆಸಿರಲಿಲ್ಲ. ಜನರಿಗೆ ಸಾಂತ್ವನ ಹೇಳಲು, ಪರಿಹಾರ ಕೊಡಿಸಲು ಪ್ರಯತ್ನಿಸಲಿಲ್ಲ. ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಪಾಲಿಕೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಸಿದ್ದರಾಮಯ್ಯ ನೇತೃತ್ವದ ಸರ್ಕಾರವಿದ್ದಾಗ ಬೆಳಗಾವಿಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇವೆ. ನಾನು ಉಸ್ತುವಾರಿ ಸಚಿವನಾಗಿದ್ದಾಗ ಆಗಿನ ಶಾಸಕ ಫಿರೋಜ್ ಸೇಠ್ ಅವರ ಅವರೊಂದಿಗೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇವೆ. ಬಾಕ್ಸೈಟ್ ರಸ್ತೆ, ಕಣಬರ್ಗಿ ರಸ್ತೆ, ಉದ್ಯಾನ, ಜಿಮ್, ಕ್ರೀಡಾಂಗಣಗಳನ್ನು ನಿರ್ಮಿಸಿದ್ದೇವೆ. ಆದರೆ, ರಾಜಕೀಯ ಕಾರಣದಿಂದ ಈವರೆಗೂ ಅವುಗಳ ಉದ್ಘಾಟನೆಗೆ ಸ್ಥಳೀಯ ಜನಪ್ರತಿನಿಧಿಗಳು ಮುಂದಾಗಿಲ್ಲ’ ಎಂದು ದೂರಿದರು.

‘ಬಿ.ಎಸ್. ಯಡಿಯೂರಪ್ಪ ಮಾರ್ಗದ ಕಾಮಗಾರಿ ಅರ್ಧಕ್ಕೆ ನಿಂತಿತ್ತು. ಅದನ್ನು ಪೂರ್ಣಗೊಳಿಸಿದ್ದೇ ನಾವು. ನಂತರ ಬಿಜೆಪಿಯವರು ಅಲ್ಲಿ ಯಡಿಯೂರಪ್ಪ ಮಾರ್ಗ ಎಂದು ಬರೆದು ಬೋರ್ಡ್ ಹಾಕಿದ್ದರು. ಕೈಯ್ಯಿಂದ ಬರೆದು ಹಾಕುತ್ತೀರೇಕೇ ಎಂದು ತಿಳಿಸಿ, ನಾವೇ ನಾಮಫಲಕವನ್ನೂ ಹಾಕಿಸಿದೆವು’ ಎಂದರು.

‘ಶವಸಂಸ್ಕಾರಕ್ಕೆ ಉಚಿತ ವ್ಯವಸ್ಥೆ ಎಂದರೆ ಏನರ್ಥ?:

‘ಶವಸಂಸ್ಕಾರಕ್ಕೆ ಉಚಿತ ವ್ಯವಸ್ಥೆ ಮಾಡುತ್ತೇವೆ ಎಂದು ಬಿಜೆಪಿಯವರು ಪ್ರಣಾಳಿಕೆಯಲ್ಲಿ ತಿಳಿಸಿದ್ದಾರೆ. ಹಾಗೆಂದರೆ ಏನರ್ಥ? ಬಿಜೆಪಿಯವರು ಜನರ ಸಾವನ್ನೇ ಬಯಸುತ್ತಿದ್ದಾರೆಯೇ’ ಎಂದು ಶಾಸಕ ಎಂ.ಬಿ. ಪಾಟೀಲ ಪ್ರಶ್ನಿಸಿದರು.

‘ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರಿಗೆ ತಡವಾಗಿ ಜ್ಞಾನೋದಯವಾಗಿದೆ. ಉಚಿತ ಶವಸಂಸ್ಕಾರ ವಿಷಯದಿಂದ ಜನರಿಗೆ ನೋವಾಗಿದ್ದರೆ ವಾಪಸ್ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. ಉದ್ಯೋಗ ನಷ್ಟ, ಅಗತ್ಯ ವಸ್ತುಗಳ ಬೆಲೆ ಏರಿಕೆಯ ಕುರಿತು ಕೂಡ ಕಾರಜೋಳ ಹಾಗೂ ಬಿಜೆಪಿಯವರು ಉತ್ತರಿಸಬೇಕು’ ಎಂದು ಸವಾಲು ಹಾಕಿದರು.

‘ದೇಶಕ್ಕೆ ಕಾಂಗ್ರೆಸ್ ಏನು ಮಾಡಿದೆ ಎಂದು ಬಿಜೆಪಿಯವರು ಕೇಳುತ್ತಾರೆ. ದೇಶದಲ್ಲಿರುವ ವಿಮಾನ ನಿಲ್ದಾಣಗಳು, ರೈಲು ನಿಲ್ದಾಣ, ದೊಡ್ಡ ದೊಡ್ಡ ಜಲಾಶಯಗಳನ್ನು ನಿರ್ಮಿಸಿದ್ದು ಯಾರು’ ಎಂದು ಪ್ರಶ್ನಿಸಿದರು.

ಪಕ್ಷದ ಗ್ರಾಮೀಣ ಜಿಲ್ಲಾ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT