ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಗಾಸಕ್ತರ ಮನೋಲ್ಲಾಸ: ಸುವರ್ಣ ವಿಧಾನಸೌಧದ ಎದುರು ಯೋಗಾ ಯೋಗ

Last Updated 21 ಜೂನ್ 2022, 3:57 IST
ಅಕ್ಷರ ಗಾತ್ರ

ಬೆಳಗಾವಿ: "ಮಾನವೀಯತೆಗಾಗಿ ಯೋಗ" ಎಂಬ ಘೋಷವಾಕ್ಯದೊಂದಿಗೆ ಇಲ್ಲಿನ ಸುವರ್ಣ ವಿಧಾನಸೌಧದ ಮುಂಭಾಗ ಮಂಗಳವಾರ 8ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.

ಮಂಜು ಮುಸುಕಿದ ವಾತಾವರಣದಲ್ಲಿ ಸಾವಿರಕ್ಕೂ ಹೆಚ್ಚು ಯೋಗಾಸಕ್ತರು ವಿವಿಧ ಆಸನ ಪ್ರದರ್ಶಿಸಿ ಸಂಭ್ರಮಿಸಿದರು.

ದೇಹದ ಚಾಲನ ಕ್ರಿಯೆಗಳು, ಸ್ಕಂದ ಸಂಚಾಲನೆ, ತಾಡಾಸನ, ವೃಕ್ಷಾಸನ, ಪಾದ ಹಸ್ತಾಸನ, ಅರ್ಧ ಚಕ್ರಾಸನ, ತ್ರಿಕೋನಾಸನ, ಭದ್ರಾಸನ, ಭುಜಂಗಾಸನ, ಶಲಭಾಸನ, ಉತ್ಥಾನ ಪಾದಾಸನ, ಅರ್ಧ ಹಾಲಾಸನ, ಸೇರಿದಂತೆ ವಿವಿಧ ಆಸನಗಳನ್ನು ಹಾಗೂ ಪ್ರಾಣಾಯಾಮ ಕ್ರಿಯೆಗಳನ್ನು ಪ್ರದರ್ಶಿಸಲಾಯಿತು.

ಅಂತರರಾಷ್ಟ್ರೀಯ ಯೋಗ ರೆಫರಿ ಆರತಿ ಸಂಕೇಶ್ವರಿ ಅವರು ಯೋಗಾಸನಗಳನ್ನು ಹೇಳಿಕೊಟ್ಟರು. ಯೋಗ ಸಂಕಲ್ಪವನ್ನು ಮತ್ತು ಪ್ರಾರ್ಥನೆಯನ್ನು ಕೂಡ ಬೋಧಿಸಿದರು. ನಂತರ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಮಟ್ಟದ ಸುವರ್ಣ ಪದಕ ವಿಜೇತೆ ಬಾಲಕಿ ದಕ್ಷಾ ಬೇವಿನಮರದ ಭರತನಾಟ್ಯದ ಮೂಲಕ ಅದ್ಭುತ ಯೋಗವನ್ನು ಪ್ರದರ್ಶಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾದರು. ಇದಾದ ಬಳಿಕ ಅಥರ್ವ ಸವನೂರ ನಾಟ್ಯ ಪ್ರದರ್ಶಿಸಿದರು. ಜೈನ್ ಹೆರಿಟೇಜ್ ಶಾಲೆ ಬಿದ್ಯಾರ್ಥಿಗಳ ತಂಡ ನೃತ್ಯ ಪ್ರದರ್ಶನ ನೀಡುವ ಮೂಲಕ ಎಲ್ಲರ ಗಮನಸೆಳೆಯಿತು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಸಮಾರೋಪಗೊಂಡಿತು.

ಉದ್ಘಾಟನೆ:ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಆಯುಷ್ ಇಲಾಖೆ, ಯುವ ಸಬಲೀಕರಣ, ಸಾರ್ವಜನಿಕ ಶಿಕ್ಷಣ ಇಲಾಖೆ, ಪ್ರವಾಸೋದ್ಯಮ ಇಲಾಖೆ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ, ನೆಹರೂ ಯುವ ಕೇಂದ್ರ ಹಾಗೂ ಪತಂಜಲಿ ಯೋಗ ಸಮಿತಿಯ ಸಹಯೋಗದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸಂಸದೆ ಮಂಗಲಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ. ಬೋರಲಿಂಗಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ರಾಮಚಂದ್ರೇಗೌಡ, ಜಿಲ್ಲಾ ಆಯುಷ್ ಅಧಿಕಾರಿ ಶ್ರೀಕಾಂತ ಸುಣಧೋಳಿ, ಶಂಕರಗೌಡ ಪಾಟೀಲ ಸೇರಿದಂತೆ ಗಣ್ಯರು ಸಸಿಗೆ ನೀರೆರೆಯುವ ಮೂಲಕ ಯೋಗ ದಿನಾಚರಣೆಗೆ ಚಾಲನೆ ನೀಡಿದರು.

ನಂತರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, "ಎಲ್ಲರೂ ಪ್ರತಿದಿನ ಯೋಗ ಮಾಡುವ ಮೂಲಕ ಆರೋಗ್ಯವನ್ನು ವೃದ್ಧಿಸಿಕೊಳ್ಳಬೇಕು. ಎಲ್ಲರೂ ಉತ್ತಮ ಆರೋಗ್ಯ ಹೊಂದುವ ಮೂಲಕ ಸದೃಢ ದೇಶ ನಿರ್ಮಾಣಕ್ಕೆ ಕೈಜೋಡಿಸಬೇಕು" ಎಂದು ಕರೆ ನೀಡಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT