ಮಂಗಳವಾರ, ಮಾರ್ಚ್ 21, 2023
23 °C
₹27 ಕೋಟಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಹೊಸ ಶಾಲೆ, ಕಾಲೇಜಿನಿಂದ ಮೂರುಸಾವಿರ ವಿದ್ಯಾರ್ಥಿಗಳಿಗೆ ಪ್ರಯೋಜನ: ಅಶೋಕ ಜೀರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ(ವಿಜಯನಗರ): ₹27 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಶೋಕ ಜೀರೆ ಬುಧವಾರ ನಗರದಲ್ಲಿ ಚಾಲನೆ ನೀಡಿದರು.

ಜಿಲ್ಲಾ ಖನಿಜ ನಿಧಿ ಅಡಿಯಲ್ಲಿ ₹24 ಕೋಟಿಯಲ್ಲಿ ಬಾಲಕಿಯರ ಪದವಿಪೂರ್ವ ಕಾಲೇಜು, ಬಾಲಕಿಯರ ಪ್ರೌಢಶಾಲೆ, ಮುನ್ಸಿಪಲ್‌ ಪ್ರೌಢಶಾಲೆ ಕಟ್ಟಡ ನಿರ್ಮಾಣಕ್ಕೆ ನಗರದ ಅಮರಾವತಿಯಲ್ಲಿ ಭೂಮಿಪೂಜೆ ನೆರವೇರಿಸಿದರೆ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಮಂಜೂರಾದ ₹3 ಕೋಟಿ ಮೊತ್ತದ ಮೆಟ್ರಿಕ್‌ ನಂತರದ ಹಿಂದುಳಿದ ವರ್ಗಗಳ ಬಾಲಕರ ವಸತಿ ನಿಲಯದ ನಿರ್ಮಾಣ ಕಾಮಗಾರಿಗೆ ಚಿತ್ತವಾಡ್ಗಿಯಲ್ಲಿ ಚಾಲನೆ ನೀಡಿದರು.

‘ಸತತ ಹತ್ತು ವರ್ಷಗಳ ಹೋರಾಟದ ಫಲವಾಗಿ ನಗರದ ಎರಡು ಶಾಲೆಗಳು, ಒಂದು ಕಾಲೇಜು ₹24 ಕೋಟಿಯಲ್ಲಿ ಅಭಿವೃದ್ಧಿ ಕಾಣುತ್ತಿದೆ. ಇದರಿಂದಾಗಿ ಮೂರು ಸಾವಿರ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ’ ಎಂದು ಅಶೋಕ ಜೀರೆ ಹೇಳಿದರು.

‘ಬಸ್‌ ನಿಲ್ದಾಣದ ಬಳಿಯಿಂದ ಶಾಲೆಯನ್ನು ಬೇರೆ ಕಡೆ ಸ್ಥಳಾಂತರಿಸುವುದಕ್ಕೆ ಎಸ್‌ಎಫ್‌ಐ ವಿರೋಧಿಸಿರುವ ವಿಚಾರ ಗೊತ್ತಿದೆ. ಆದರೆ, ಹೊಸ ಶಾಲೆಗೆ ಬಸ್‌ ಸೌಕರ್ಯ ಕಲ್ಪಿಸಲಾಗುವುದು. ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು’ ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಸುನಂದಾ ಮಾತನಾಡಿ, ‘ಈಗಿರುವ ಶಾಲಾ, ಕಾಲೇಜು ಕಟ್ಟಡಗಳು ನಗರದ ಮಧ್ಯಭಾಗದಲ್ಲಿವೆ. ತರಗತಿ ಕೊರತೆಯ ಕಾರಣ ಪಾಳಿಯಲ್ಲಿ ಕಾರ್ಯನಿರ್ವಹಿಸುವ ಪರಿಸ್ಥಿತಿ ಇದೆ. ವಿದ್ಯಾರ್ಥಿಗಳು ಕಷ್ಟ ಅನುಭವಿಸುತ್ತಿದ್ದಾರೆ. ಹೊಸ ಕಟ್ಟಡಗಳಿಂದ ಪ್ರಯೋಜನವಾಗಲಿದೆ’ ಎಂದರು.

ತಹಶೀಲ್ದಾರ್ ಎಚ್.ವಿಶ್ವನಾಥ್, ಗ್ರಾಮೀಣ ಠಾಣೆ ಸಿಪಿಐ ಶ್ರೀನಿವಾಸ ಮೇಟಿ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕಿಶೋರ್ ಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಅವರ ಆಪ್ತ ಸಹಾಯಕ ಧರ್ಮೇಂದ್ರ ಸಿಂಗ್, ಸಚಿವರ ಅಳಿಯ ಸಂದೀಪ್ ಸಿಂಗ್, ಅಯ್ಯಾಳಿ ತಿಮ್ಮಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು