ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರಮಿಕ ರೈಲಿನ ಮೂಲಕ ಉತ್ತರ ಪ್ರದೇಶದತ್ತ ಹೊರಟ 2904 ವಲಸಿಗರು

ಬಳ್ಳಾರಿ, ಹೊಸಪೇಟೆ ರೈಲ್ವೆ ನಿಲ್ದಾಣದಿಂದ ತೆರಳಿದ ವಲಸಿಗರಿಗೆ ಶುಭಕೋರಿದ ಜಿಲ್ಲಾಡಳಿತ
Last Updated 17 ಮೇ 2020, 8:25 IST
ಅಕ್ಷರ ಗಾತ್ರ

ಹೊಸಪೇಟೆ: ಬಳ್ಳಾರಿ ರೈಲ್ವೆ ನಿಲ್ದಾಣದಿಂದ 1,452 ಜನ ಮತ್ತು ಹೊಸಪೇಟೆ ರೈಲ್ವೆ ನಿಲ್ದಾಣದಿಂದ 1,452 ಜನ ಉತ್ತರಪ್ರದೇಶದ ವಲಸಿಗರನ್ನು ಹೊತ್ತ ಶ್ರಮಿಕ ವಿಶೇಷ ರೈಲು ಉತ್ತರ ಪ್ರದೇಶದತ್ತ ಭಾನುವಾರ ಬೆಳಗ್ಗೆ ತೆರಳಿತು.

ಬಳ್ಳಾರಿ ರೈಲ್ವೆ ನಿಲ್ದಾಣದಿಂದ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಎಸ್ಪಿ ಸಿ.ಕೆ.ಬಾಬಾ, ಜಿಪಂ ಸಿಇಒ ಕೆ.ನಿತೀಶ್, ಪ್ರೋಬೆಷನರಿ ಐಎಎಸ್ ಈಶ್ವರ್ ಕಾಂಡೂ, ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ ಸೇರಿದಂತೆ ಅನೇಕರು ಹಾಗೂ ಹೊಸಪೇಟೆ ರೈಲ್ವೆ ನಿಲ್ದಾಣದಲ್ಲಿ ಸಹಾಯಕ ಆಯುಕ್ತ ಶೇಖ್ ತನ್ವೀರ್ ಅಸೀಫ್, ತಹಸೀಲ್ದಾರ್ ವಿಶ್ವನಾಥ ಅವರು ಸುರಕ್ಷಿತವಾಗಿ ತಮ್ಮೂರನ್ನು ತಲುಪಿ ಮತ್ತೇ ಬಳ್ಳಾರಿ ಜಿಲ್ಲೆಗೆ ಅತ್ಯಂತ ಖುಷಿಯಿಂದ ಬನ್ನಿ ಎಂದು ಶುಭಹಾರೈಸಿ ಚಪ್ಪಾಳೆ ತಟ್ಟಿ ಬೀಳ್ಕೊಟ್ಟರು.

ಬಳ್ಳಾರಿ, ತೋರಣಗಲ್ಲು ಸೇರಿದಂತೆ ಜಿಲ್ಲೆಯ ವಿವಿಧೆಡೆ ಜೀವನ ನಿರ್ವಹಣೆಗೆ ಬಂದಿದ್ದ ಉತ್ತರಪ್ರದೇಶದ 2,904 ಜನ ವಲಸಿಗರನ್ನು ಬಳ್ಳಾರಿ ಕೇಂದ್ರ ಬಸ್ ನಿಲ್ದಾಣದಲ್ಲಿ ಹಾಗೂ ತೋರಣಗಲ್ಲುವಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಶುಕ್ರವಾರ ಮತ್ತು ಶನಿವಾರ ವೈದ್ಯಕೀಯ ತಪಾಸಣೆ ನಡೆಸಿ ಅವರಿಗೆ ಪ್ರಮಾಣಪತ್ರ ವಿತರಿಸಿ ಹಾಗೂ ಅಲ್ಲಿಯೇ ₹ 835ರ ಟಿಕೆಟ್‍ನ್ನು ಇವರಿಗೆ ನೀಡಲಾಗಿತ್ತು.

ಅವರಿಗೆ ನೀಡಲಾದ ಟಿಕೆಟ್ ಹಿಂಬದಿಯಲ್ಲಿ ಬರೆಯಲಾದ ಸೀಟ್ ಸಂಖ್ಯೆ ಮತ್ತು ಬೋಗಿ ನೋಡಿಕೊಂಡು ಅವರನ್ನು ಪೊಲೀಸ್ ಸಿಬ್ಬಂದಿ ಹಾಗೂ ಜಿಲ್ಲಾಡಳಿತದ ಸಿಬ್ಬಂದಿ ಸಂಬಂಧಿಸಿದ ಬೋಗಿಯಲ್ಲಿ ಕುಳಿತುಕೊಳ್ಳುವಂತೆ ಬೆಳಗ್ಗೆ 7ರಿಂದಲೇ ತಿಳಿಸುತ್ತಿದ್ದರು.

ಈ ವಲಸಿಗ ಪ್ರಯಾಣಿಕರು ಪ್ರಯಾಣದ ಸಂದರ್ಭದಲ್ಲಿ ಹಸಿವಿನಿಂದ ಬಳಲಬಾರದು ಎಂಬ ಸದುದ್ದೇಶದಿಂದ ಎರಡು ಬಿಸ್ಕಟ್ ಪ್ಯಾಕೇಟ್, ಎರಡು ಬ್ರೇಡ್ ಪ್ಯಾಕ್, ಮೂರು ಲೀಟರ್ ನೀರು, ಎರಡು ಪ್ಯಾಕೇಟ್ ಆಹಾರ ಪೊಟ್ಟಣ, ಮಿರ್ಚಿ ಬಜ್ಜಿ ಹಾಗೂ ಇನ್ನೀತರ ಆಹಾರ ಸಾಮಗ್ರಿಗಳ ಆಹಾರ ಕಿಟ್‍ಗಳನ್ನು ಪ್ರತಿಯೊಬ್ಬ ವಲಸಿಗರಿಗೂ ಜಿಲ್ಲಾಡಳಿತದ ವತಿಯಿಂದ ನೀಡಲಾಯಿತು.

ರೈಲ್ವೆ ನಿಲ್ದಾಣದೊಳಗೆ ಆಗಮಿಸುತ್ತಲೇ ವಲಸಿಗ ಪ್ರಯಾಣಿಕರಿಗೆ ಸ್ಯಾನಿಟೈಸರ್ ಕೈಗೆ ಸಿಂಪಡಿಸಲಾಗುತ್ತಿತ್ತು. ರೆಡ್‍ಕ್ರಾಸ್ ಸಂಸ್ಥೆಯವರು ಇದೇ ಸಂದರ್ಭದಲ್ಲಿ ಮಾಸ್ಕ್‌ಗಳನ್ನು ವಿತರಿಸಿದರು.

ಉತ್ತರಪ್ರದೇಶದ ಆಗ್ರಾ, ಅಲಿಘರ್, ಅಜಂಘರ್, ಲಖನೌ, ಅಲಹಾಬಾದ್, ಅಮೇಥಿ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ತೆರಳಲುರೈಲಿನ ಸೀಟಿನಲ್ಲಿ ಆಸೀನರಾಗಿದ್ದ ವಲಸಿಗರು ತಮ್ಮೂರು ಕಡೆ ಸುರಕ್ಷಿತವಾಗಿ ಪಯಣಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸುತ್ತಿರುವುದು ಕಂಡುಬಂದಿತು.

ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಅಪರ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್.ಲಾವಣ್ಯ ಅವರು ಬಳ್ಳಾರಿ ರೈಲ್ವೆ ನಿಲ್ದಾಣದಲ್ಲಿನ ಎಲ್ಲ ಸಿದ್ಧತೆಗಳನ್ನು ಪರಿಶೀಲಿಸಿದರು. ಹೊಸಪೇಟೆಯಲ್ಲಿ ಉಪವಿಭಾಗಾಧಿಕಾರಿ ಶೇಕ್‌ ತನ್ವೀರ್ ಅಸೀಫ್, ತಹಶೀಲ್ದಾರ್‌ ಎಚ್‌. ವಿಶ್ವನಾಥ, ನಗರಸಭೆ ಪೌರಾಯುಕ್ತೆ ಪಿ. ಜಯಲಕ್ಷ್ಮಿ, ಡಿವೈಎಸ್ಪಿ ವಿ. ರಘುಕುಮಾರ ಅವರು ಬೆಳಗ್ಗೆಯಿಂದಲೇ ಖುದ್ದು ಸ್ಥಳದಲ್ಲಿ ಉಪಸ್ಥಿತರಿದ್ದು ವಲಸಿಗರನ್ನು ಅತ್ಯಂತ ಸುರಕ್ಷಿತವಾಗಿ ಕಳುಹಿಸಿಕೊಟ್ಟರು.

ಉತ್ತರ ಪ್ರದೇಶಕ್ಕೆ ಈ ರೈಲು ತೆರಳಲಿದ್ದು, 34 ಗಂಟೆಗಳ ಪ್ರಯಾಣದ ಅವಧಿಯಾಗಿರಲಿದೆ. ಮಾರ್ಗಮಧ್ಯೆ ಯಾರಿಗೂ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಆಹಾರ ಪೊಟ್ಟಣಗಳನ್ನು ವಿತರಿಸಲಾಗಿದೆ. ಎಲ್ಲರಿಗೂ ವೈದ್ಯಕೀಯ ತಪಾಸಣೆ ಮಾಡಿ ಕಳುಹಿಸಿಕೊಡಲಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸೋಮಶೇಖರ ಬಂಕದ್ ಸೇರಿದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ಕಂದಾಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT