ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕಿತ್ಸೆ ಪಡೆಯುತ್ತಿರುವಾಗಲೇ ಬಾಲಕಿಯನ್ನು ಮನೆಗೆ ಕರೆದೊಯ್ದರು: ಜಿಲ್ಲಾಧಿಕಾರಿ

Last Updated 16 ಆಗಸ್ಟ್ 2022, 15:16 IST
ಅಕ್ಷರ ಗಾತ್ರ

ಹೊಸಪೇಟೆ: ‘ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕಿ ಬಿಂದು ಇನ್ನೂ ಚಿಕಿತ್ಸೆ ಪಡೆಯುತ್ತಿರುವಾಗಲೇ, ವೈದ್ಯರ ಸಲಹೆಗೆ ವಿರುದ್ಧವಾಗಿ ಅವರ ಸಂಬಂಧಿಕರು ಆಕೆಯನ್ನು ಮನೆಗೆ ಕರೆದೊಯ್ದಿದ್ದರು’ ಎಂದು ಜಿಲ್ಲಾಧಿಕಾರಿ ಅನಿರುದ್ಧ್‌ ಶ್ರವಣ್‌ ಪಿ. ತಿಳಿಸಿದರು.

ವಾಂತಿ, ಬೇಧಿ ಸಮಸ್ಯೆ ಉಲ್ಬಣಿಸಿರುವ ಕೂಡ್ಲಿಗಿ ತಾಲ್ಲೂಕಿನ ಕ್ಯಾಸನಕೆರೆ ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದ ಅವರು ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದರು.

ಬಾಲಕಿ ಕೂಡ್ಲಿಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ರಕ್ತದೊತ್ತಡ ತೀವ್ರ ಕಡಿಮೆಯಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಿಂದುಳನ್ನು ಬಳ್ಳಾರಿಯ ವಿಮ್ಸ್‌ಗೆ ಕರೆದೊಯ್ಯಲು ವೈದ್ಯರು ನಿರ್ಧರಿಸಿದ್ದರು. ಅದಕ್ಕಾಗಿ ಆಂಬುಲೆನ್ಸ್‌ ವ್ಯವಸ್ಥೆ ಕೂಡ ಮಾಡಿದ್ದರು. ಆದರೆ, ಬಾಲಕಿಯ ಚಿಕ್ಕಪ್ಪ, ವೈದ್ಯರ ಸಲಹೆಗೆ ವಿರುದ್ಧವಾಗಿ ಬಾಲಕಿಯನ್ನು ಬಸ್‌ನಲ್ಲಿ ಮನೆಗೆ ಕರೆದೊಯ್ದಿದ್ದಾರೆ. ಅನಂತರ ಬಾಲಕಿ ಕುಸಿದು ಬಿದ್ದು ಮೃತಪಟ್ಟಿದ್ದಾಳೆ ಎಂದು ತಿಳಿಸಿದರು.

ಗ್ರಾಮದಲ್ಲಿ ಕುಡಿಯುವ ನೀರಿನ ಪೂರೈಕೆ ವ್ಯವಸ್ಥೆಯಲ್ಲಿ ಕೆಲ ಸಮಸ್ಯೆಗಳಿರುವುದು ನಿಜ. ಆದರೆ, ಇದುವರೆಗೆ ವಾಂತಿ, ಬೇಧಿಗೆ ನಿಖರ ಕಾರಣ ಏನೆಂಬುದು ಗೊತ್ತಾಗಿಲ್ಲ. ಕಲುಷಿತ ನೀರು ಸೇವನೆಯಿಂದಲೇ ಬಾಲಕಿ ಮೃತಪಟ್ಟಿದ್ದಾಳೆ ಎನ್ನುವುದು ಇದುವರೆಗೆ ಖಚಿತವಾಗಿಲ್ಲ. ಇದೇ ವೇಳೆ ಬಾಲಕಿಯ ಕುಟುಂಬದ ಇತರೆ ಸದಸ್ಯರಲ್ಲಿ ಯಾವುದೇ ತೊಂದರೆ ಕಾಣಿಸಿಕೊಂಡಿಲ್ಲ ಎಂದೂ ಹೇಳಿದರು.

ವಾಂತಿ, ಬೇಧಿಯಿಂದ ಆಸ್ಪತ್ರೆಗೆ ದಾಖಲಾಗಿದ್ದವರ ಪೈಕಿ 96 ವರ್ಷದ ವ್ಯಕ್ತಿಯೊಬ್ಬರು ಸಂಪೂರ್ಣ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಈಗ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT