ಭಾನುವಾರ, ಮಾರ್ಚ್ 26, 2023
23 °C

ಸೇವೆ ಕಾಯಂಗೆ ಆಗ್ರಹಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸೇವೆ ಕಾಯಂಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು ಸಂಯೋಜಿತ) ತಾಲ್ಲೂಕು ಸಮಿತಿಯವರು ಸೋಮವಾರ ನಗರದ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಅನೇಕ ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ಆದರೆ, ಇದುವರೆಗೆ ಸರ್ಕಾರ ನೌಕರರೆಂದು ಪರಿಗಣಿಸಿಲ್ಲ. ಗೌರವನ ಧನದಲ್ಲೇ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಸೇವೆ ಕಾಯಂಗೊಳಿಸಿ, ಸರ್ಕಾರಿ ನೌಕರರಾಗಿ ಪರಿಗಣಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಬರೆದ ಮನವಿ ಪತ್ರದಲ್ಲಿ ಗೋಳು ಹಕ್ಕೊತ್ತಾಯ ಮಾಡಿದ್ದಾರೆ.

ಅಂಗನವಾಡಿ ನೌಕರರ ಸಂಘದ ಪ್ರತಿನಿಧಿಗಳನ್ನು ಸೇರಿಸಿಕೊಂಡು ಕುಂದುಕೊರತೆ ಪರಿಹಾರ ಸಮಿತಿ ರಚಿಸಬೇಕು. ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್‌, ಡೇಟಾ, ಅಗತ್ಯ ತರಬೇತಿ ಕೊಟ್ಟು ಎಲ್ಲ ರೀತಿಯ ಸರ್ವೇ ಕಾರ್ಯಕ್ಕೆ ಬಳಸಿಕೊಳ್ಳಬೇಕು. ಆದರೆ, ಯಾವುದೇ ರೀತಿಯ ಸೌಲಭ್ಯ ಕೊಡದೆ ಕೆಲಸ ತೆಗೆದುಕೊಳ್ಳಲಾಗುತ್ತಿದೆ. ಗೌರವ ಧನ ಕೂಡ ಕಡಿತ ಮಾಡಲಾಗುತ್ತಿದೆ. ಇದು ಸರಿಯಾದ ಕ್ರಮವಲ್ಲ ಎಂದು ತಿಳಿಸಿದ್ದಾರೆ.

ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು. ಉತ್ತಮ ಗುಣಮಟ್ಟದ ಆಹಾರ ಪೂರೈಸಬೇಕು. ಮಿನಿ ಅಂಗನವಾಡಿಗಳಲ್ಲಿ ಕಾರ್ಯಕರ್ತೆಯರೇ ಎಲ್ಲ ರೀತಿಯ ಕೆಲಸ ನಿರ್ವಹಿಸುತ್ತಿದ್ದಾರೆ. ಅವರಿಗೆ ಪೂರ್ಣ ಪ್ರಮಾಣದಲ್ಲಿ ಗೌರವ ಧನ ಪಾವತಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಂಘದ ಅಧ್ಯಕ್ಷೆ ಕೆ. ನಾಗರತ್ನ, ಕಾರ್ಯದರ್ಶಿ ಕೆ.ಎಂ. ಸ್ವಪ್ನ, ಖಜಾಂಚಿ ಈರಮ್ಮ, ಉಪಾಧ್ಯಕ್ಷೆ ಜಿ. ಶಕುಂತಲಾ, ಕೆಂಚಮ್ಮ, ಸುಮಂಗಲಮ್ಮ, ಸಕ್ರಮ್ಮ, ಗಂಗಮ್ಮ ಇತರರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.