ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿ: ಹತ್ತೇ ದಿನಗಳಲ್ಲಿ 1,438 ಕೋಟ್ಪಾ ಪ್ರಕರಣ

ಹೊಸಪೇಟೆಯಲ್ಲಿ ಉಪವಿಭಾಗದಲ್ಲಿ ಅತಿ ಹೆಚ್ಚು, ಹರಪನಹಳ್ಳಿಯಲ್ಲಿ ಕಡಿಮೆ ಪ್ರಕರಣ
Last Updated 12 ಜೂನ್ 2022, 19:30 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ವಿಶ್ವ ತಂಬಾಕು ರಹಿತ ದಿನದ ಪ್ರಯುಕ್ತ ಪೊಲೀಸ್‌ ಇಲಾಖೆಯು ಜಿಲ್ಲೆಯಾದ್ಯಂತ ಕಾರ್ಯಾಚರಣೆ ನಡೆಸಿ ತಂಬಾಕು ಉತ್ಪನ್ನಗಳ ಸಾರ್ವಜನಿಕ ಬಳಕೆ ನಿಯಂತ್ರಣ ಕಾಯ್ದೆಯಡಿ (ಕೋಟ್ಪಾ) 1,438 ಪ್ರಕರಣಗಳನ್ನು ದಾಖಲಿಸಿದೆ.

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಮತ್ತು ಸಿಗರೇಟ್‌ ಉತ್ಪನ್ನಗಳ ಮಾರಾಟ ಮತ್ತು ಅವುಗಳ ಯಥೇಚ್ಛ ಬಳಕೆಯ ಹಿನ್ನೆಲೆಯಲ್ಲಿ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆಯು ಜೂ. 1ರಿಂದ 10ರ ವರೆಗೆ ಜಿಲ್ಲೆಯಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸಿ, ಕ್ರಮ ಜರುಗಿಸಿದೆ.

1,438 ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಪೊಲೀಸರು, ₹1,43,800 ದಂಡ ಹಾಕಿದ್ದಾರೆ. ಹೊಸಪೇಟೆ ಉಪವಿಭಾಗ ವ್ಯಾಪ್ತಿಯಲ್ಲಿ 1,082 ಅತಿ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ ಹೊಸಪೇಟೆ ಸಂಚಾರ ಪೊಲೀಸ್‌ ಠಾಣೆಯಲ್ಲಿ 300, ಬಡಾವಣೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 264 ಕೇಸ್‌ಗಳು ದಾಖಲಾಗಿವೆ. ಕೂಡ್ಲಿಗಿ ಉಪವಿಭಾಗ ವ್ಯಾಪ್ತಿಯಲ್ಲಿ 252 ಪ್ರಕರಣ ದಾಖಲಾದರೆ, ಹರಪನಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ 104 ಅತಿ ಕಡಿಮೆ ಪ್ರಕರಣಗಳು ದಾಖಲಾಗಿವೆ.

ಪ್ರತಿ ವರ್ಷ ಮೇ 31ರಂದು ವಿಶ್ವ ತಂಬಾಕು ರಹಿತ ದಿನ ಆಚರಿಸಲಾಗುತ್ತದೆ. ಅದಾದ ನಂತರ ಹತ್ತು ದಿನಗಳ ಕಾಲ ಎಲ್ಲ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಜೊತೆಗೆ ಬಸ್‌ ನಿಲ್ದಾಣ, ಆಟೊ ನಿಲ್ದಾಣ, ಶಾಲಾ–ಕಾಲೇಜುಗಳು, ಪ್ರವಾಸಿ ತಾಣಗಳು ಸೇರಿದಂತೆ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಜನಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಒಂದೇ ಕಡೆ ಕಾರ್ಯಕ್ರಮ ಸಂಘಟಿಸುವುದರ ಬದಲು ಸ್ವತಃ ಪೊಲೀಸ್‌ ಸಿಬ್ಬಂದಿಯೇ ಜನರ ನಡುವೆ ಹೋಗಿ ತಂಬಾಕು, ಸಿಗರೇಟ್‌ ಉತ್ಪನ್ನಗಳ ಬಳಕೆಯಿಂದ ಆಗುವ ಅಡ್ಡ ಪರಿಣಾಮಗಳು, ಕೋಟ್ಪಾ ಕಾಯ್ದೆಯ ಮಹತ್ವ ತಿಳಿಸಿಕೊಡುವ ಕೆಲಸ ಮಾಡಿದ್ದಾರೆ.

‘ಕೋಟ್ಪಾ ಕಾಯ್ದೆ ಪ್ರಕಾರ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆ ನಿರ್ಬಂಧಿಸಲಾಗಿದೆ. ಅದನ್ನು ಪರಿಣಾಮಕಾರಿ ಜಾರಿಗೆ ತರುವ ನಿಟ್ಟಿನಲ್ಲಿ ವಿಶ್ವ ತಂಬಾಕು ರಹಿತ ದಿನದ ನಂತರ ಹತ್ತು ದಿನಗಳ ಕಾಲ ವಿಶೇಷ ಕಾರ್ಯಾಚರಣೆ ನಡೆಸಿ 1,438 ಪ್ರಕರಣಗಳನ್ನು ದಾಖಲಿಸಲಾಗಿದೆ. ದಂಡ ಹಾಕಿ ಎಚ್ಚರಿಕೆ ನೀಡಿ ಕಳುಹಿಸಲಾಗಿದೆ. ಯಾವುದೇ ಬಂಧನ ಆಗಿಲ್ಲ’ ಎಂದು ವಿಜಯನಗರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕೆ. ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT