ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಟ್ಟಡ ಕಾರ್ಮಿಕರಿಂದ ಸಾಂಕೇತಿಕ ಧರಣಿ

ಕೃಷಿ, ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆ ಹಿಂಪಡೆಯಲು ಆಗ್ರಹ
Last Updated 5 ಜನವರಿ 2021, 10:25 IST
ಅಕ್ಷರ ಗಾತ್ರ

ಹೊಸಪೇಟೆ: ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್‌ ತಾಲ್ಲೂಕು ಸಮಿತಿಯ ಕಾರ್ಯಕರ್ತರು ಮಂಗಳವಾರ ನಗರದ ತಾಲ್ಲೂಕು ಕಚೇರಿ ಎದುರು ಒಂದು ದಿನದ ಸಾಂಕೇತಿಕ ಧರಣಿ ನಡೆಸಿದರು.

ನಂತರ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಸಲ್ಲಿಸಿದರು.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರೂ ಕೃಷಿ ಕಾಯ್ದೆಗಳು ರೈತರ ಹಿತಾಸಕ್ತಿಗೆ ವಿರುದ್ಧವಾಗಿವೆ. ಹೀಗಾಗಿಯೇ ಪಂಜಾಬ್, ಹರಿಯಾಣದ ರೈತರು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಸರ್ಕಾರ ಅವರ ಮಾತಿಗೆ ಬೆಲೆ ಕೊಡುತ್ತಿಲ್ಲ. ಇದು ಸರಿಯಾದ ಕ್ರಮವಲ್ಲ. ಕೂಡಲೇ ರೈತರ ಬೇಡಿಕೆಗಳಿಗೆ ಸ್ಪಂದಿಸಿ, ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದರು.

ಕೃಷಿ ಕಾಯ್ದೆ, ವಿದ್ಯುತ್‌ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದಾದ್ಯಂತ ನಡೆಸುತ್ತಿರುವ ಪ್ರತಿಭಟನೆ ಸಂದರ್ಭದಲ್ಲಿ 40ಕ್ಕೂ ಹೆಚ್ಚು ಜನ ಈಗಾಗಲೇ ಪ್ರಾಣ ಕಳೆದುಕೊಂಡಿದ್ದಾರೆ. ನವದೆಹಲಿಯಲ್ಲಿ ಮಳೆ, ಚಳಿ ಲೆಕ್ಕಿಸದೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನಷ್ಟು ಜನರ ಜೀವ ಹೋಗುವುದಕ್ಕೂ ಮುಂಚೆ ಕೇಂದ್ರ ಸರ್ಕಾರ ತನ್ನ ಹಠಮಾರಿ ಧೋರಣೆ ಬಿಟ್ಟು ಕಾಯ್ದೆಗಳನ್ನು ವಾಪಸ್‌ ಪಡೆಯಬೇಕು ಎಂದು ಆಗ್ರಹಿಸಿದರು.

ವಿದ್ಯುತ್‌ ಕ್ಷೇತ್ರದ ಖಾಸಗೀಕರಣ ಕೈಬಿಡಬೇಕು. ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆ ಕೈಬಿಡಬೇಕು. ರೈತರು ಬೆಳೆದ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿಪಡಿಸುವ ಕಾಯ್ದೆ ರೂಪಿಸಬೇಕು. ಅಸಂಘಟಿತ ಕಾರ್ಮಿಕರಿಗೆ ಭವಿಷ್ಯ ನಿಧಿ ಯೋಜನೆ ಜಾರಿಗೊಳಿಸಬೇಕು. ಎಲ್ಲರಿಗೂ ಉಚಿತ ಆರೋಗ್ಯ ಸೇವೆ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು.

ಫೆಡರೇಶನ್‌ ಜಿಲ್ಲಾ ಅಧ್ಯಕ್ಷ ಎನ್‌. ಯಲ್ಲಾಲಿಂಗ, ತಾಲ್ಲೂಕು ಅಧ್ಯಕ್ಷ ಎಂ. ಗೋಪಾಲ್‌, ಕಾರ್ಯದರ್ಶಿ ಕೆ. ರಾಮಾಂಜಿನಿ, ಖಜಾಂಚಿ ಬಿಯಮ್ಮ, ಮುಖಂಡರಾದ ಮರಡಿ ಜಂಬಯ್ಯ ನಾಯಕ, ಘಂಟೆ ಸೋಮಶೇಖರ್‌, ಸಣ್ಣಕ್ಕಿ ರುದ್ರಪ್ಪ, ಜಿ. ಕರೆಹನುಮ, ಕೆ. ನಾಗರತ್ನಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT