ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿ: ಹೊಸ ಶಿಕ್ಷಣ ನೀತಿ ವಿರೋಧಿಸಿ ಧರಣಿ, ಕಾರ್ಯಕ್ರಮಕ್ಕೆ ನುಗ್ಗಲು ಯತ್ನ

Last Updated 28 ಅಕ್ಟೋಬರ್ 2021, 13:55 IST
ಅಕ್ಷರ ಗಾತ್ರ

ಬಳ್ಳಾರಿ: ಹೊಸ ಶಿಕ್ಷಣ ನೀತಿ (ಎನ್‌ಇಪಿ) ವಿರುದ್ಧ ಪ್ರತಿಭಟಿಸಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ್‌ ಅವರು ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ನುಗ್ಗಲು ಯತ್ನಿಸಿದ ‘ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ’ (ಸಿಎಫ್‌ಐ) ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ಹರಸಾಹಸ ಮಾಡಿ ಬಂಧಿಸಿದರು.

ಹೊಸ ಶಿಕ್ಷಣ ನೀತಿ ಕುರಿತು ಬಳ್ಳಾರಿ ತಾಂತ್ರಿಕ ಮತ್ತು ಮ್ಯಾನೇಜ್‌ಮೆಂಟ್‌ ಕಾಲೇಜಿನಲ್ಲಿ (ಬಿಐಟಿಎಂ) ಬುಧವಾರ ಏರ್ಪಡಿಸಿದ್ದ ಕಾರ್ಯಾಗಾರದ ಉದ್ಘಾಟನಾ ಸಮಾರಂಭಕ್ಕೆ ನುಗ್ಗಲು ಯತ್ನಿಸಿದ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 100ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಬಂಧಿಸಲು ಪೊಲೀಸರು ಹರಸಾಹಸ ಮಾಡಬೇಕಾಯಿತು. ಬಂಧನದಿಂದ ತಪ್ಪಿಸಿಕೊಳ್ಳಲು ನೆಲದ ಮೇಲೆ ಬಿದ್ದು ಒದ್ದಾಡಿದ ಪ್ರತಿಭಟನಾಕಾರರನ್ನು ಪೊಲೀಸರು ದರದರನೆ ಎಳೆದೊಯ್ದರು. ಇದಕ್ಕೂ ಮೊದಲು ಸುಮಾರು ಅರ್ಧ ಗಂಟೆಗೂ ಹೆಚ್ಚು ಸಮಯ ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವೆ ತಳ್ಳಾಟ– ನೂಕಾಟ ನಡೆದು, ಗೊಂದಲ ಸೃಷ್ಟಿಯಾಯಿತು.

ಬಿಐಟಿಎಂ ಕಾಲೇಜಿಗೆ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಬಂದರು. ಆರಂಭದಲ್ಲಿ ಬೆರಳೆಣಿಕೆಯಷ್ಟು ಪೊಲೀಸರು ಇದ್ದುದ್ದರಿಂದ ವಿದ್ಯಾರ್ಥಿಗಳನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ಕರೆಸಲಾಯಿತು. ಕುಡುತಿನಿ ಮತ್ತು ಕುರುಗೋಡುಗಳಿಂದಲೂ ಅಧಿಕಾರಿಗಳನ್ನು ಧಾವಿಸಿದರು.

ಬಂಧನದ ಸಮಯದಲ್ಲಿ ತಮ್ಮ ಮೇಲೆ ಪೊಲೀಸರು ಹಲ್ಲೆ ಮಾಡಿದರು. ಶಾಂತಿಯುತ ಪ್ರತಿಭಟನೆ ನಡೆಸಲು ತಮಗೆ ಅವಕಾಶ ನೀಡಲಿಲ್ಲ ಎಂದು ವಿದ್ಯಾರ್ಥಿ ಮುಖಂಡ ಹಬೀಬ್‌ ಎಂಬುವರು ‘ಪ್ರಜಾವಾಣಿ’ಗೆ ತಿಳಿಸಿದರು. ಬಳ್ಳಾರಿ ಮಾತ್ರವಲ್ಲದೆ, ಮಂಗಳೂರು ಸೇರಿದಂತೆ ರಾಜ್ಯದ ವಿವಿಧ ಕಡೆಗಳಿಂದ ವಿದ್ಯಾರ್ಥಿಗಳು ಪ್ರತಿಭಟನೆಗೆ ಬಂದಿದ್ದರು.

ಇದಕ್ಕೂ ಮೊದಲು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಿಎಫ್‌ಐ ರಾಜ್ಯ ಸಮಿತಿ ಸದಸ್ಯ ಸಿರಾಜ್‌, ‘ಎನ್‌ಇಪಿ’ ಮನುವಾದಿ ನಿಲುವನ್ನು ಪ್ರತಿಪಾದಿಸುತ್ತಿದೆ. ಇದರಿಂದ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಹಾಗೂ ಸಾಮಾನ್ಯ ವಿದ್ಯಾರ್ಥಿಗಳಿಗೆ ತೊಂದರೆ ಆಗಲಿದೆ’ ಎಂದು ಎಚ್ಚರಿಕೆ ನೀಡಿದರು.

‘ಎನ್‌ಇಪಿಯಲ್ಲಿ ಇತಿಹಾಸ ತಿರುಚಲಾಗಿದೆ. ಮಧ್ಯಕಾಲೀನ ಇತಿಹಾಸದಲ್ಲಿ ಮುಸ್ಲಿಮರು, ಬೌದ್ಧ ಮತ್ತು ಜೈನ ರಾಜರು ಹೆಚ್ಚಿದ್ದಾರೆ. ಆದ್ದರಿಂದ ಮಧ್ಯಕಾಲೀನ ಇತಿಹಾಸ ತೆಗೆದುಹಾಕಲಾಗಿದೆ. ವಿದ್ಯಾರ್ಥಿಗಳು ಸುಳ್ಳು ಇತಿಹಾಸವನ್ನೇ ಸತ್ಯ ಎಂದು ಭಾವಿಸಿ ಓದುವ ಅಪಾಯ ಸೃಷ್ಟಿಸಲಾಗುತ್ತಿದೆ’ ಎಂದು ಅವರು ಟೀಕಿಸಿದರು.

ಎನ್‌ಇಪಿ ಮೌಢ್ಯತೆ ಬೋಧಿಸುತ್ತದೆ. ಮೌಲ್ಯಯುತ ಶಿಕ್ಷಣದಿಂದ ಮಕ್ಕಳು ವಂಚಿತರಾಗುತ್ತಾರೆ. ತರಾತುರಿಯಲ್ಲಿ ಎನ್‌ಇಪಿ ಜಾರಿ ಮಾಡಲಾಗುತ್ತಿದೆ. ಕೂಡಲೇ ಇದನ್ನು ಹಿಂಪಡೆಯಬೇಕು. ಪ್ರತಿಭಟನೆ ನಡೆಸುವ ವಿದ್ಯಾರ್ಥಿಗಳ ಮೇಲೆ ಪೊಲೀಸರ ದೌರ್ಜನ್ಯ ನಿಲ್ಲಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾದ ಜಿಲ್ಲಾ ಸಮಿತಿ ಅಧ್ಯಕ್ಷ ಸೊಹೇಲ್‌ ಪ್ರತಿಭಟನೆ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT