ಶುಕ್ರವಾರ, ಸೆಪ್ಟೆಂಬರ್ 24, 2021
27 °C

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಗೆ ಹಕ್ಕೊತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ಮಹಿಳೆಯರ ಮೇಲೆ ಅತ್ಯಾಚಾರ ನಡೆಸುವ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ತಾಲ್ಲೂಕು ಸಮಿತಿ ಕಾರ್ಯಕರ್ತೆಯರು ಸೋಮವಾರ ನಗರದ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ, ದೇಶದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಘಟನೆಗಳು ಖಂಡನಾರ್ಹ ಎಂದು ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ಹಕ್ಕೊತ್ತಾಯ ಮಾಡಿದರು.

ಕೋವಿಡ್‌ ಸಂಕಷ್ಟದಲ್ಲಿ ಮಹಿಳೆಯರಿಗೆ ಇನ್ನಷ್ಟು ತೊಂದರೆಗಳು ಎದುರಾಗಿವೆ. ಮನೆಯ ಒಳಗೆ ಮತ್ತು ಹೊರಗೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿವೆ. ಅವರ ಸಮಸ್ಯೆ ಆಲಿಸುವ ಸೂಕ್ತ ವೇದಿಕೆಯಿಲ್ಲ. ನೋವು ಸಹಿಸಿಕೊಂಡು ಜೀವನವಿಡೀ ಕೊರಗುತ್ತ ಇರಬೇಕಾದ ಸನ್ನಿವೇಶ ಸೃಷ್ಟಿಯಾಗಿದೆ. ಅದಕ್ಕೆ ನಮ್ಮ ವ್ಯವಸ್ಥೆಯೇ ಕಾರಣ ಎಂದು ಟೀಕಿಸಿದರು.

ಮಹಿಳೆಯರು, ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳ ಜೊತೆಗೆ ಜಾತಿನಿಂದನೆ ಕೂಡ ಮಾಡಲಾಗುತ್ತಿದೆ. ಪರಿಶಿಷ್ಟರು, ಹಿಂದುಳಿದವರು ಎನ್ನುವ ಕಾರಣಕ್ಕಾಗಿ ಮಹಿಳೆಯರನ್ನು ಗುರಿಯಾಗಿಸಿ, ಅತ್ಯಾಚಾರ ನಡೆಸಲಾಗುತ್ತಿದೆ. ಇದು ನಾಗರಿಕ ಸಮಾಜಕ್ಕೆ ಶೋಭೆ ತರುವಂತಹದ್ದಲ್ಲ ಎಂದು ತಿಳಿಸಿದರು.

ಅತ್ಯಾಚಾರಿಗಳನ್ನು ಕಠಿಣ ಶಿಕ್ಷೆಗೆ ಗುರಿಪಡಿಸುವ ಕಾನೂನು ತರಬೇಕು. ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯರಿಗೆ ಸರ್ಕಾರ ಸಹಾಯ ಹಸ್ತ ಚಾಚಬೇಕು. ಭವಿಷ್ಯದಲ್ಲಿ ಮಹಿಳೆಯರು, ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು ಆಗದಂತೆ ತಡೆಯಬೇಕು ಎಂದು ಆಗ್ರಹಿಸಿದರು.

ಸಂಘದ ಅಧ್ಯಕ್ಷೆ ಕೆ. ನಾಗರತ್ನ, ಕಾರ್ಯದರ್ಶಿ ಕೆ. ಕೆಂಚಮ್ಮ, ಖಜಾಂಚಿ ಕೆ.ಎಂ. ಸ್ವಪ್ನ, ಸುನೀತಾ, ಸೌಮ್ಯ, ಖಾಜಾ ಮುನ್ನಿ ಮೊದಲಾದವರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು