ಸೋಮವಾರ, ಆಗಸ್ಟ್ 8, 2022
24 °C

ಆಸ್ತಿ ತೆರಿಗೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ಆಸ್ತಿ ತೆರಿಗೆ ಏರಿಕೆ ಮಾಡಿರುವುದನ್ನು ವಿರೋಧಿಸಿ ಬ್ಲಾಕ್‌ ಕಾಂಗ್ರೆಸ್‌ ಕಾರ್ಯಕರ್ತರು ಬುಧವಾರ ಇಲ್ಲಿನ ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಹೆಚ್ಚಿಸಿರುವ ತೆರಿಗೆ ನಿರ್ಧಾರ ಹಿಂಪಡೆಯಲೇಬೇಕು, ಹಿಂಪಡೆಯಲೇಬೇಕು, ಮೊದಲಿನ ದರ ನಿಗದಿಪಡಿಸಬೇಕು, ನಗರಸಭೆಗೆ ಧಿಕ್ಕಾರ, ಧಿಕ್ಕಾರ ಎಂದು ಘೋಷಣೆಗಳನ್ನು ಕೂಗಿದರು. ನಂತರ ಜಿಲ್ಲಾಧಿಕರಿ ಪವನ್‌ ಕುಮಾರ್‌ ಮಾಲಪಾಟಿ ಹೆಸರಿಗೆ ಬರೆದ ಮನವಿ ಪತ್ರವನ್ನು ನಗರಸಭೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಸೈಯದ್‌ ಮನ್ಸೂರ್‌ ಅಹಮ್ಮದ್‌ ಅವರಿಗೆ ಸಲ್ಲಿಸಿದರು.

‘ಕೋವಿಡ್‌ನಿಂದ ಜನ ಅವರ ಅತ್ಯಾಪ್ತರನ್ನು ಕಳೆದುಕೊಂಡಿದ್ದಾರೆ. ಕೆಲಸ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿಡಿಗಾಸೂ ಇಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ನಗರದ 35 ವಾರ್ಡ್‌ಗಳಲ್ಲಿ ಕೃಷಿ, ಕಟ್ಟಡ ಕೂಲಿ ಕಾರ್ಮಿಕರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅನೇಕರು ಈಗಲೂ ಕೋವಿಡ್‌ನಿಂದ ಸಂಪೂರ್ಣ ಗುಣಮುಖರಾಗಿಲ್ಲ. ಪರಿಸ್ಥಿತಿ ಹೀಗಿರುವಾಗ ತೆರಿಗೆ ಹೆಚ್ಚಿಸಿ, ಅವರನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳುವುದು ಎಷ್ಟು ಸರಿ?’ ಎಂದು ಪ್ರಶ್ನಿಸಿದ್ದಾರೆ.

‘ನಗರಸಭೆಯಲ್ಲಿ ಜನಪ್ರತಿನಿಧಿಗಳಿಲ್ಲ. ಇನ್ನಷ್ಟೇ ಚುನಾವಣೆ ನಡೆಯಬೇಕಿದೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕರ ಅಭಿಪ್ರಾಯ ಆಲಿಸದೆ ಏಕಾಏಕಿ ತೆರಿಗೆ ಹೆಚ್ಚಳ ಮಾಡಿರುವುದು ಎಷ್ಟು ಸರಿ. ಯಾವ ಅಂಕಿ–ಅಂಶ, ವೈಜ್ಞಾನಿಕ ತಳಹದಿಯ ಮೇಲೆ ಶೇ 30ರಷ್ಟು ತೆರಿಗೆ ಹೆಚ್ಚಿಸಲಾಗಿದೆ ಎನ್ನುವುದನ್ನು ತಿಳಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಈ ವಿಷಯ ಕಡೆಗೆ ಗಮನಹರಿಸಿ, ಈ ಹಿಂದಿನ ತೆರಿಗೆ ಶುಲ್ಕ ಮುಂದುವರಿಸಬೇಕು. ಇಲ್ಲವಾದಲ್ಲಿ ಲಾಕ್‌ಡೌನ್‌ ನಂತರ ಬೀದಿಗಿಳಿದು ಉಗ್ರ ಸ್ವರೂಪದ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಮೊಹಮ್ಮದ್‌ ಇಮಾಮ್‌ ನಿಯಾಜಿ, ವಿ. ಸೋಮಪ್ಪ, ಡಿ. ವೆಂಕಟರಮಣ, ವಿನಾಯಕ್‌ ಶೆಟ್ಟರ್‌, ಗುಜ್ಜಲ್‌ ನಾಗರಾಜ್, ಗೌಸ್‌, ಗುಡಿಗುಂಟಿ ಮಲ್ಲಿಕಾರ್ಜುನ, ನಿಂಬಗಲ್‌ ರಾಮಕೃಷ್ಣ, ರವಿ, ರೌಫ್‌, ಚಿದಾನಂದಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು