ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಹುಟ್ಟುಹಬ್ಬದಲ್ಲಿ ಕೋವಿಡ್ ನಿಯಮ ಉಲ್ಲಂಘನೆ

Last Updated 12 ಜನವರಿ 2022, 12:07 IST
ಅಕ್ಷರ ಗಾತ್ರ

ಬಳ್ಳಾರಿ: ಇಲ್ಲಿನ ಕನಕ ದುರ್ಗಮ್ಮ ದೇವಸ್ಥಾನದಲ್ಲಿ ಮಂಗಳವಾರ ಏರ್ಪಡಿಸಿದ್ದ ಮಾಜಿ ಸಚಿವ ಜಿ. ಜನಾರ್ದನರೆಡ್ಡಿ ಹುಟ್ಟುಹಬ್ಬದ ವೇಳೆ ಕೋವಿಡ್‌ ನಿಯಮಾವಳಿ ಉಲ್ಲಂಘಿಸಿದ್ದರೂ ಕಾನೂನು ಕ್ರಮ ಕೈಗೊಳ್ಳದೆ ಜಿಲ್ಲಾಡಳಿತ ‘ಜಾಣ ಕುರುಡು’ ಪ್ರದರ್ಶಿಸುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.

ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಬಂಧಿತರಾಗಿ, ಜಾಮೀನು ಪಡೆದು ಬಿಡುಗಡೆ ಆಗಿರುವ ಜನಾರ್ದನರೆಡ್ಡಿ ಮಂಗಳವಾರ ಮೊದಲ ಬಾರಿಗೆ ಸಾರ್ವಜನಿಕವಾಗಿ ಪ್ರತ್ಯಕ್ಷವಾಗಿ, ಕನಕ ದುರ್ಗಮ್ಮ ದೇವಸ್ಥಾನದಲ್ಲಿ ತುಲಾಭಾರ ಮಾಡಿಸಿಕೊಳ್ಳುವ ಮೂಲಕ 55ನೇ ಹುಟ್ಟುಹಬ್ಬ ಆಚರಿಸಿಕೊಂಡರು.

ನೂರಾರು ಸಂಖ್ಯೆಯಲ್ಲಿದ್ದ ರೆಡ್ಡಿ ಅಭಿಮಾನಿಗಳು ಮತ್ತು ಬೆಂಬಲಿಗರ ನಡುವೆ ಸಾರಿಗೆ ಸಚಿವ ಬಿ. ಶ್ರೀರಾಮುಲು, ಬಳ್ಳಾರಿ ನಗರದ ಶಾಸಕ ಸೋಮಶೇಖರರೆಡ್ಡಿ, ಬಳ್ಳಾರಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಾಲಣ್ಣ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು. ಈ ಸಮಯದಲ್ಲಿ ಅನೇಕರು ಮಾಸ್ಕ್‌ ಹಾಕಿರಲಿಲ್ಲ. ಪರಸ್ಪರ ಅಂತರ ಕಾಪಾಡಲಿಲ್ಲ ಧಾರ್ಮಿಕ ಇಲಾಖೆ ಅಧಿಕಾರಿಗಳು, ಆಡಳಿತ ಮಂಡಳಿ ಸದಸ್ಯರು ಮತ್ತು ಪೊಲೀಸ್‌ ಅಧಿಕಾರಿಗಳು ಸ್ಥಳದಲ್ಲಿದ್ದರೂ ಕ್ರಮ ಕೈಗೊಂಡಿಲ್ಲ ಎಂಬ ಟೀಕೆಗಳು ವ್ಯಕ್ತವಾಗಿವೆ.

ಕೋವಿಡ್‌ ಮೂರನೇ ಅಲೆ ಸಮುದಾಯಕ್ಕೆ ಹರಡುವುದನ್ನು ತಡೆಯುವ ಉದ್ದೇಶದಿಂದ ಅನುಸರಿಸಬೇಕಾದ ಕ್ರಮಗಳನ್ನು ಕುರಿತು ರಾಜ್ಯ ಸರ್ಕಾರ ಇದೇ 4ರಂದು ಸುತ್ತೋಲೆ ಹೊರಡಿಸಿದೆ. ಇದಕ್ಕೆ ಪೂರಕವಾಗಿ ಜನವರಿ 5ರಂದು ಬಳ್ಳಾರಿ ಜಿಲ್ಲಾಧಿಕಾರಿ ಪವನ್‌ ಕುಮಾರ್‌ ಮಾಲಪಾಟಿ ಜಿಲ್ಲೆಯಲ್ಲೂ ಕೆಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡು ಆದೇಶ ಹೊರಡಿಸಿದ್ದಾರೆ.

ಅದರನ್ವಯ, ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಎಲ್ಲ ದೇವರ ಸೇವೆಗಳನ್ನು ನಿಷೇಧಿಸಲಾಗಿದೆ. ಯಾವುದೇ ಸಮಯದಲ್ಲಿ ಪೂರ್ಣ ಪ್ರಮಾಣದ ಕೋವಿಡ್‌–19 ಲಸಿಕೆ ಹಾಕಿಸಿಕೊಂಡ 50 ಮಂದಿ ಪ್ರವೇಶಕ್ಕೆ ಮಾತ್ರ ಅನುಮತಿ ನೀಡಲಾಗಿದೆ. ಆದರೆ, ಮಾಜಿ ಸಚಿವರ ಹುಟ್ಟುಹಬ್ಬ ಸಮಾರಂಭಕ್ಕೆ ಭಾರಿ ಸಂಖ್ಯೆಯಲ್ಲಿ ಜನ ಸೇರಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಕಮಿಷನರ್‌ ಪ್ರಕಾಶ್‌ರಾವ್‌ ಅವರನ್ನು ಸಂಪರ್ಕಿಸಿದಾಗ ಸ್ಪಷ್ಟವಾದ ಪ್ರತಿಕ್ರಿಯೆ ನೀಡಲಿಲ್ಲ. ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ ಅವರಿಂದ ಮಾಹಿತಿ ಪಡೆದು ತಿಳಿಸುವುದಾಗಿ ಪ್ರತಿಕ್ರಿಯೆ ಕೊಟ್ಟರು. ಆನಂತರ, ಅವರು ಕರೆ ಸ್ವೀಕರಿಸಲಿಲ್ಲ.

ರೆಡ್ಡಿ ವಿರುದ್ಧ ಎಫ್‌ಐಆರ್‌ಗೆ ಆಗ್ರಹ
‘ಜನಾರ್ದನರೆಡ್ಡಿ ಸಾರ್ವಜನಿಕವಾಗಿ ಹುಟ್ಟುಹಬ್ಬ ಆಚರಿಸಿಕೊಂಡು ಕೋವಿಡ್‌ ನಿಯಯ ಉಲ್ಲಂಘಿಸಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಆರೋಪಿಯಾಗಿದ್ದಾಗ್ಯೂ ರಾಜಕೀಯ ಭಾಷಣ ಮಾಡಿದ್ದಾರೆ. ಕೋರ್ಟ್‌ ಕಟ್ಟುಪಾಡಿಗಳಿಗೆ ಬೆಲೆ ಕೊಡದೆ ಮುಕ್ತವಾಗಿ ಓಡಾಡುವ ಮೂಲಕ ಮತ್ತೊಮ್ಮೆ ರಿಪಬ್ಲಿಕ್‌ ಆಫ್‌ ಬಳ್ಳಾರಿ ಮಾಡಲು ಹೊರಟಿದ್ದಾರೆ’ ಎಂದು ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಡುತ್ತಿರುವ ಉದ್ಯಮಿ ಟಪಾಲ್‌ ಗಣೇಶ್ ಆರೋಪಿಸಿದ್ದಾರೆ.

‘ಇಷ್ಟಾದರೂ ಜಿಲ್ಲಾಡಳಿತ ಕಾನೂನು ಕ್ರಮ ಕೈಗೊಳ್ಳದೆ ಮೌನವಾಗಿರುವುದನ್ನು ನೋಡಿದರೆ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿದರೇ ಎಂಬ ಅನುಮಾನ ಮೂಡುತ್ತದೆ. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೂಡಲೇ ಜನಾರ್ದನರೆಡ್ಡಿ ಮತ್ತಿತರರ ವಿರುದ್ಧ ಕೋವಿಡ್‌ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಎಫ್‌ಐಆರ್‌ ದಾಖಲಿಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

*
ಕನಕ ದುರ್ಗಮ್ಮ ದೇವಸ್ಥಾನದ ಕಾರ್ಯಕ್ರಮ ಕುರಿತು ಎಸ್‌ಪಿ ಸೈದುಲ್‌ ಅಡಾವತ್‌ ನನ್ನ ಜತೆ ಮಾತನಾಡಿದ್ದಾರೆ. ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
–ಪವನ್‌ ಕುಮಾರ್‌ ಮಾಲಪಾಟಿ, ಜಿಲ್ಲಾಧಿಕಾರಿ

*
ಜನಾರ್ದನರೆಡ್ಡಿ ಹುಟ್ಟುಹಬ್ಬ ಕಾರ್ಯಕ್ರಮದ ವಿಡಿಯೊ ತರಿಸಿಕೊಂಡಿದ್ದೇನೆ. ಅದನ್ನು ನೋಡಿ ಮುಂದಿನ ಕಾನೂನು ಕ್ರಮ ಕೈಗೊಳ್ಳುತ್ತೇನೆ.
–ಸೈದುಲು ಅಡಾವತ್‌, ಎಸ್‌ಪಿ

*
ಪಾದಯಾತ್ರೆ ಮಾಡುತ್ತಿರುವ ಕಾಂಗ್ರೆಸ್‌ ನಾಯಕರ ವಿರುದ್ಧ ಎಫ್‌ಐರ್‌ ದಾಖಲಿಸುತ್ತಿರುವ ಪೊಲೀಸರು, ಬಳ್ಳಾರಿಯಲ್ಲಿ ಕೋವಿಡ್‌ ನಿಯಮ ಉಲ್ಲಂಘಿಸಿದ ರೆಡ್ಡಿ ವಿರುದ್ಧ ಕ್ರಮ ಕೈಗೊಳ್ಳದೆ ತಟಸ್ಥರಾಗಿದ್ದಾರೆ.
–ವೆಂಕಟೇಶ್‌ ಹೆಗಡೆ, ಕೆಪಿಸಿಸಿ ಮಾಧ್ಯಮ ವಕ್ತಾರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT