ಭಾನುವಾರ, ಸೆಪ್ಟೆಂಬರ್ 19, 2021
29 °C

ಯುವಜನ ಸಮಿತಿಯಿಂದ ಬೇಡಿಕೆ ದಿನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ಭಾರತ ಬಿಟ್ಟು ತೊಲಗಿ ಚಳವಳಿ ಸ್ಮರಣಾರ್ಥ ಅಖಿಲ ಭಾರತ ನಿರುದ್ಯೋಗಿ ಯುವಜನ ಹೋರಾಟ ಸಮಿತಿಯ ಕಾರ್ಯಕರ್ತರು ಸೋಮವಾರ ನಗರದಲ್ಲಿ ಬೇಡಿಕೆಯ ದಿನ ಆಚರಿಸಿದರು.

ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ನಿರುದ್ಯೋಗಿ ಯುವಕರಿಗೆ ಉದ್ಯೋಗ ಕೊಡಬೇಕೆಂದು ಹಕ್ಕೊತ್ತಾಯ ಮಾಡಿದರು.

ದೇಶದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ಆರ್ಥಿಕ ಬಿಕ್ಕಟ್ಟಿನಿಂದ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಮುಚ್ಚಿವೆ. ಬೆಂಗಳೂರಿನ ಪೀಣ್ಯ ಕೈಗಾರಿಕೆ ವಲಯವೊಂದರಲ್ಲೇ 12 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳು ಬಾಗಿಲು ಮುಚ್ಚಿವೆ. ಲಕ್ಷಾಂತರ ಕಾರ್ಮಿಕರು ಉದ್ಯೋಗ ಕಳೆದುಕೊಂಡಿದ್ದಾರೆ. ಸರ್ಕಾರದ ಆರ್ಥಿಕ ನೀತಿ, ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಮುಖ್ಯಮಂತ್ರಿಗೆ ಬರೆದ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಹುದ್ದೆ ಖಾಲಿ ಉಳಿದಿವೆ. ಶಿಕ್ಷಣ, ಆರೋಗ್ಯ, ವಸತಿ, ಇಂಧನ, ಮೂಲಭೂತ ಸೌಕರ್ಯ ಕ್ಷೇತ್ರದಲ್ಲಿ ನೇಮಕಾತಿಗಳು ನಡೆದಿಲ್ಲ. ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ನಿರುದ್ಯೋಗಿ ಯುವಕರ ಸಮಸ್ಯೆ ನೀಗಿಸಬೇಕು ಎಂದು ಆಗ್ರಹಿಸಿದ್ದಾರೆ.

ವಸತಿ ಶಾಲೆಗಳಲ್ಲಿ ದುಡಿಯುವ ಅತಿಥಿ ಶಿಕ್ಷಕರ ಪರಿಸ್ಥಿತಿಯೂ ಇದಕ್ಕಿಂತ ಭಿನ್ನವಾಗಿಲ್ಲ. ಮಕ್ಕಳ ಸರ್ವತೋಮುಖ ಪ್ರಗತಿಗಾಗಿ ಕಲೆ, ಸಂಗೀತ, ರಂಗಶಿಕ್ಷಣವು ತುಂಬಾ ಮುಖ್ಯವೆಂದು ಶಿಕ್ಷಣ ತಜ್ಞರು ಮಾತ್ರವಲ್ಲದೇ ಸರ್ಕಾರದ ಆಯೋಗಗಳು ಸಹ ವರದಿ ಕೊಟ್ಟಿವೆ. ಆದರೂ ಆ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ನಿರುದ್ಯೋಗ ಭೂತಾಕಾರವಾಗಿ ಬೆಳೆದು ದೇಶದ ಸಂಪತ್ತು ಸೃಷ್ಟಿಸುವ ಕೈಗಳು ತಮ್ಮ ಕತ್ತನ್ನು ಹಿಸುಕಿಕೊಂಡು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ನೇಮಕಾತಿ ಪ್ರಕ್ರಿಯೆ ಚುರುಕುಗೊಳಿಸಿ ಖಾಲಿ ಉಳಿದಿರುವ ಎಲ್ಲ ಹುದ್ದೆ ತುಂಬಬೇಕು. ಅತಿಥಿ ಶಿಕ್ಷಕರಿಗೆ ಸೇವಾ ಭದ್ರತೆ ಒದಗಿಸಬೇಕು. ಸಂಗೀತ, ರಂಗ, ದೈಹಿಕ ಶಿಕ್ಷಕರ ಹುದ್ದೆ ಭರ್ತಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು