ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ನಗರಸಭೆ ಸದಸ್ಯನ ಬಂಧನಕ್ಕೆ ಆಗ್ರಹ

Last Updated 13 ಸೆಪ್ಟೆಂಬರ್ 2021, 10:26 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಮಾಜಿ ನಗರಸಭೆ ಸದಸ್ಯ ಚಂದ್ರಕಾಂತ ಕಾಮತ್‌ ಅವರು ಪದೇ ಪದೇ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಹಾಕಿ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿರುವ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದವರು (ಸಿಐಟಿಯು ಸಂಯೋಜಿತ) ಅವರ ಬಂಧನಕ್ಕೆ ಆಗ್ರಹಿಸಿ ಸೋಮವಾರ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬಳಿಕ ಸಚಿವ ಆನಂದ್‌ ಸಿಂಗ್‌ ಅವರ ಆಪ್ತ ಸಹಾಯಕರಾದ ಧರ್ಮೇಂದ್ರ ಸಿಂಗ್‌, ಗೋವಿಂದ ಕುಲಕರ್ಣಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಕಾಮತ್‌, ದಾದಾ ಪೀರ್‌ ಹಾಗೂ ಅವರ ಸಹಚರರು ಅನಗತ್ಯವಾಗಿ ಕಾರ್ಯಕರ್ತೆಯರಿಗೆ ಕಿರುಕುಳ ಕೊಡುತ್ತಿದ್ದಾರೆ. ಅವರನ್ನು ಕೂಡಲೇ ಬಂಧಿಸಬೇಕು. ಇಲ್ಲವಾದಲ್ಲಿ ಬರುವ ದಿನಗಳಲ್ಲಿ ಉಗ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಘೋಷಿಸಿರುವ ₹3.39 ಕೋಟಿ ಅನುದಾನ ಕೂಡಲೇ ಬಿಡುಗಡೆಗೊಳಿಸಬೇಕು. ಕೋಳಿ ಮೊಟ್ಟೆ ಖರೀದಿಯಲ್ಲಾಗಿರುವ ಭ್ರಷ್ಟಾಚಾರದ ತನಿಖೆ ನಡೆಸಬೇಕು. ಇಲಾಖೆಯಿಂದಲೇ ಅಂಗನವಾಡಿಗಳಿಗೆ ಮೊಟ್ಟೆ ವಿತರಿಸಬೇಕು. ಕೋವಿಡ್‌ನಿಂದ ಮೃತಪಟ್ಟ ಕಾರ್ಯಕರ್ತೆಯರು, ಸಹಾಯಕಿಯರ ಕುಟುಂಬದವರಿಗೆ ನೌಕರಿ ಕೊಡಬೇಕು. ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಕೊಡಬೇಕು. ಕಾರ್ಯಕರ್ತೆಯರನ್ನು ಕಾಯಂಗೊಳಿಸಬೇಕು ಎಂದು ಆಗ್ರಹಿಸಿದರು.

ಖಾಲಿ ಇರುವ ಹುದ್ದೆಗಳನ್ನು ತುಂಬಬೇಕು. ಮೂರು ತಿಂಗಳಿಗೊಮ್ಮೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಕುಂದು ಕೊರತೆ ಸಭೆ ನಡೆಸಬೆಕು. ಪೌಷ್ಟಿಕ ಆಹಾರ ವಿತರಣೆಯಲ್ಲಿ ರಾಜಕೀಯಕ್ಕೆ ಆಸ್ಪದ ಇರದಂತೆ ನಿಯಮ ಜಾರಿಗೆ ತರಬೇಕೆಂದು ಒತ್ತಾಯಿಸಿದರು.

ಸಂಘದ ತಾಲ್ಲೂಕು ಅಧ್ಯಕ್ಷೆ ಕೆ. ನಾಗರತ್ನಮ್ಮ, ಕಾರ್ಯದರ್ಶಿ ಕೆ.ಎಂ. ಸ್ವಪ್ನ, ಖಜಾಂಚಿ ಈರಮ್ಮ, ಸುನೀತಾ, ಮುನ್ನಿ, ರಜಿಯಾ, ಹನುಮಂತವ್ವ ಸೇರಿದಂತೆ ಕಾರ್ಯಕರ್ತೆಯರು, ಸಹಾಯಕಿಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT