ಬುಧವಾರ, ಅಕ್ಟೋಬರ್ 20, 2021
25 °C

ಪರಿಶಿಷ್ಟ ಪಂಗಡ ಮೀಸಲು 7.5ಕ್ಕೆ ಹೆಚ್ಚಿಸಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ಪರಿಶಿಷ್ಟ ಪಂಗಡದವರ ಮೀಸಲಾತಿ ಪ್ರಮಾಣವನ್ನು ಶೇ 7.5ಕ್ಕೆ ಹೆಚ್ಚಿಸಬೇಕೆಂದು ದಲಿತ ಹಕ್ಕುಗಳ ಸಮಿತಿ–ಕರ್ನಾಟಕ ಸಂಘಟನೆ ಆಗ್ರಹಿಸಿದೆ.

ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಇಲಾಖೆಯ ಸಚಿವ ಬಿ. ಶ್ರೀರಾಮುಲು ಅವರಿಗೆ ಬುಧವಾರ ತಾಲ್ಲೂಕಿನ ಹಂಪಿಯಲ್ಲಿ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು.

2011ರ ಜನಗಣತಿ ಪ್ರಕಾರ ರಾಜ್ಯದಲ್ಲಿ ಪರಿಶಿಷ್ಟ ಪಂಗಡದವರ ಜನಸಂಖ್ಯೆ ಶೇ 6.55 ಇತ್ತು. ಈಗ ಅದು ಶೇ 8ಕ್ಕೂ ಹೆಚ್ಚಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ಮೇದಾರ, ಪರಿವಾರ ಸೇರಿದಂತೆ ಇತರೆ ಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗಿದೆ. ಆದರೆ, ಒಟ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಪಂಗಡಕ್ಕೆ ಶೇ 3ರಷ್ಟು ಇದೆ. ಅದನ್ನು ಶೇ 7.5ಕ್ಕೆ ಹೆಚ್ಚಿಸಬೇಕು ಎನ್ನುವುದು ಹಲವು ವರ್ಷಗಳ ಬೇಡಿಕೆಯಾಗಿದೆ. ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಮೀಸಲಾತಿ ಹೆಚ್ಚಿಸುತ್ತೇನೆ ಎಂದು ಚುನಾವಣೆಗೂ ಮುನ್ನ ಭರವಸೆ ನೀಡಿತ್ತು. ಆದರೆ, ಅದು ಭರವಸೆಯಾಗಿಯೇ ಉಳಿದಿದೆ ಎಂದು ತಿಳಿಸಿದರು.

ಜನಸಂಖ್ಯೆಗೆ ತಕ್ಕಂತೆ ಮೀಸಲಾತಿ ಕಲ್ಪಿಸದೇ ಇರುವುದರಿಂದ ಪರಿಶಿಷ್ಟ ಪಂಗಡದ ಯುವಕರು ಶಿಕ್ಷಣ, ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ. ಹಾಗಾಗಿ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ ದಾಸ್‌ ವರದಿಯನ್ನು ಬಹಿರಂಗಪಡಿಸಬೇಕು. ವಿಧಾನಸಭೆಯಲ್ಲಿ ಅದರ ಬಗ್ಗೆ ಚರ್ಚಿಸಿ, ಸಾರ್ವಜನಿಕ ಚರ್ಚೆಗೆ ಒಳಪಡಿಸಿ ಅಂಗೀಕರಿಸಬೇಕು ಎಂದು ಒತ್ತಾಯಿಸಿದರು.

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಬ್ಯಾಕ್‌ಲಾಗ್‌ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕು. ಇಲ್ಲವಾದಲ್ಲಿ ಸಮಾಜದ ನಿರುದ್ಯೋಗಿ ಯುವಕರಿಗೆ ಮಾಸಿಕ ₹10,000 ನಿರುದ್ಯೋಗಿ ಭತ್ಯೆ ಕೊಡಬೇಕು. ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ಕೊಡಬೇಕು. ಅರಣ್ಯ ಭೂಮಿಯಲ್ಲಿ ಉಳುಮೆ ಮಾಡುವವರಿಗೆ ಪಟ್ಟಾ ಕೊಡಬೇಕು ಎಂದು ಆಗ್ರಹಿಸಿದರು.

ಸಮಿತಿಯ ರಾಜ್ಯ ಸಂಚಾಲಕ ಮರಡಿ ಜಂಬಯ್ಯ ನಾಯಕ, ಮುಖಂಡರಾದ ಬಿ. ರಮೇಶಕುಮಾರ್‌, ಬಿ. ತಾಯಪ್ಪ ನಾಯಕ, ಎಸ್‌. ಸತ್ಯಮೂರ್ತಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.