ಭಾನುವಾರ, ಸೆಪ್ಟೆಂಬರ್ 19, 2021
23 °C

ರೈತ, ಕಾರ್ಮಿಕ ಕಾನೂನುಹಿಂಪಡೆಯಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ಕಾರ್ಮಿಕ ಸಂಹಿತೆ, ಕೃಷಿ ಕಾನೂನು ಹಾಗೂ ವಿದ್ಯುತ್‌ ತಿದ್ದುಪಡಿ ಮಸೂದೆ ಕೈಬಿಡುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದವು.

ಸಿಐಟಿಯು, ಕರ್ನಾಟಕ ಪ್ರಾಂತ ರೈತ ಸಂಘ, ದಲಿತ ಹಕ್ಕುಗಳ ಸಮಿತಿ, ಕಟ್ಟಡ ಕಾರ್ಮಿಕರ ಸಂಘ, ಅಂಗನವಾಡಿ ನೌಕರರ ಸಂಘ, ಅಕ್ಷರ ದಾಸೋಹ ನೌಕರರ ಸಂಘ, ಸರ್ಕಾರಿ ಹಾಸ್ಟೆಲ್‌ ಹೊರಗುತ್ತಿಗೆ ನೌಕರರ ಸಂಘ, ದೇವದಾಸಿ ಮಹಿಳಾ ವಿಮೋಚನಾ ಸಂಘ, ಆಟೊ ಚಾಲಕರ, ಗ್ರಾಮ ಪಂಚಾಯಿತಿ ನೌಕರರ ಸಂಘ, ಮನೆ ಕೆಲಸಗಾರರ ಸಂಘ, ಹಮಾಲಿ ಸಂಘ, ಎಲ್‌ಐಸಿ ಪ್ರತಿನಿಧಿಗಳ ಸಂಘ, ಡಿವೈಎಫ್‌ಐ, ಎಸ್‌ಎಫ್‌ಐ ಕಾರ್ಯಕರ್ತರು ನಗರದ ತಹಶೀಲ್ದಾರ್‌ ಕಚೇರಿ ಎದುರು ಸೇರಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಕೋವಿಡ್‌ ಲಾಕ್‌ಡೌನ್‌ನಿಂದ ರೈತರು, ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಅವರ ಬದುಕು ಇನ್ನಷ್ಟು ದುಸ್ತರಗೊಂಡಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನರನ್ನು ಸಂಕಷ್ಟದಿಂದ ಹೊರತರಲು ಅಗತ್ಯ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ರೈತರ ಎಲ್ಲ ಬೆಳೆಗಳಿಗೂ ಖಾತರಿ ಖರೀದಿಯೊಂದಿಗೆ ಸಮಗ್ರ ಉತ್ಪಾದನಾ ವೆಚ್ಚ, ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಬೇಕು. ಭೂಸುಧಾರಣೆ ಕಾಯ್ದೆಗೆ ತಂದಿರುವ ತಿದ್ದುಪಡಿ ವಾಪಸ್‌ ಪಡೆಯಬೇಕು. ಕೊರೊನಾ ಸಾಂಕ್ರಾಮಿಕದಿಂದ ಮುಕ್ತಿ ಸಿಗುವವರೆಗೆ ಯಾವುದೇ ನೌಕರರ ವೇತನ ಕಡಿತವಾಗದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಎಲ್ಲ ವಲಸೆ, ಅಸಂಘಟಿತ ಕಾರ್ಮಿಕರ ಹೆಸರನ್ನು ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿ ಮಾಡಿಸಬೇಕು. ದಿನಗೂಲಿ ಕಾರ್ಮಿಕರಿಗೆ ಕನಿಷ್ಠ ಕೂಲಿ ನಿಗದಿಪಡಿಸಬೇಕು. ಉದ್ಯೋಗ ಖಾತ್ರಿ ಯೋಜನೆಗೆ ಹೆಚ್ಚಿನ ಅನುದಾನ ನೀಡಬೇಕು. ದಿನಗೂಲಿ ₹600ಕ್ಕೆ ಹೆಚ್ಚಿಸಿ, ವರ್ಷದಲ್ಲಿ 200 ದಿನ ಕೆಲಸ ಕೊಡಬೇಕು. ನಗರ ಪ್ರದೇಶದಲ್ಲೂ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಕೈಗೆತ್ತಿಕೊಂಡು ದುಡಿಯುವ ಕೈಗಳಿಗೆ ಕೆಲಸ ನೀಡಬೇಕು. ಸರ್ಕಾರಿ ಸ್ವಾಮ್ಯದ ಯಾವುದೇ ವಲಯವನ್ನು ಖಾಸಗೀಕರಣ ಮಾಡಬಾರದು ಎಂದು ಹಕ್ಕೊತ್ತಾಯ ಮಾಡಿದರು.

ಮುಖಂಡರಾದ ಆರ್‌. ಭಾಸ್ಕರ್‌ ರೆಡ್ಡಿ, ಜಂಬಯ್ಯ ನಾಯಕ, ಎ. ಕರುಣಾನಿಧಿ, ಎನ್‌. ಯಲ್ಲಾಲಿಂಗ, ನಾಗರತ್ನಮ್ಮ, ಗೋಪಾಲ ಮತ್ತಿತರರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು