ಸೋಂಕಿತರ ಚಿಕಿತ್ಸೆಗೆ ಹಾಸಿಗೆ ಕೊರತೆ ನೀಗಿಸಿ: ಆನಂದ್‌ಸಿಂಗ್

ಬಳ್ಳಾರಿ: ‘ಕೋವಿಡ್ ಸೋಂಕಿತರ ಚಿಕಿತ್ಸೆಗೆ ಹಾಸಿಗೆಗಳ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಬೇಕು’ ಎಂದು ಉಸ್ತುವಾರಿ ಸಚಿವ ಆನಂದ್‌ಸಿಂಗ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ‘ಸೋಂಕಿತರ ಸಾವಿನ ಸಂಖ್ಯೆ ಹೆಚ್ಚಾಗದಂತೆ ಕ್ರಮ ಕೈಗೊಳ್ಳಬೇಕು. ಚಿಕಿತ್ಸೆಗೆ ಇರುವ ಕೊರತೆಗಳನ್ನು ನೀಗಿಸಬೇಕು’ ಎಂದರು.
‘ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಕೈಗೊಳ್ಳುತ್ತಿರುವ ಕ್ರಮಗಳು ಉತ್ತಮವಾಗಿಯೇ ಇವೆ. ಗುಣಮುಖರಾಗುವವರ ಸಂಖ್ಯೆಯೂ ಹೆಚ್ಚಾಗಿದೆ. ಸಾವಿನ ಸಂಖ್ಯೆ ಇನ್ನೂ ಕಡಿಮೆಯಾಗಬೇಕು’ ಎಂದರು.
‘ಹರಪನಹಳ್ಳಿ ತಾಲ್ಲೂಕಿನಲ್ಲಿ ಗಂಭೀರ ಪರಿಸ್ಥಿತಿಯಲ್ಲಿರುವ ಸೋಂಕಿತರಿಗೆ ದಾವಣಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ಕೊರೊನಾಗೆ ಸಂಬಂಧಿಸಿದಂತೆ ಯಾವ ಕೊರತೆಯೂ ಇಲ್ಲ’ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸ್ಪಷ್ಟಪಡಿಸಿದರು.
‘ವಿಮ್ಸ್‌ನಲ್ಲಿ ಸೋಂಕಿತರಿಗೆ ಮತ್ತು ಸಾಮಾನ್ಯ ರೋಗಿಗಳಿಗೆ ಚಿಕಿತ್ಸೆ ನೀಡಿದ್ದಕ್ಕಾಗಿ ಆಯುಷ್ಮಾನ್ ಭಾರತ ಯೋಜನೆ ಅಡಿ ₹ 1.5 ಕೋಟಿ ಅನುದಾನ ಬಿಡುಗಡೆಯಾಗಿದೆ’ ಎಂದರು.
‘ಜಿಲ್ಲಾಸ್ಪತ್ರೆಯನ್ನು ಮುಂದಿನ ದಿನಗಳಲ್ಲಿ ಕೋವಿಡ್ ಮುಕ್ತ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗುವುದು. ಟ್ರಾಮಾಕೇರ್ ಸೆಂಟರ್ ಅನ್ನು ಪೂರ್ಣ ಪ್ರಮಾಣದ ಕೋವಿಡ್ ಸೆಂಟರ್ ಆಗಿ ಪರಿವರ್ತಿಸಲಾಗುವುದು’ ಎಂದು ತಿಳಿಸಿದರು.
‘ಬಳ್ಳಾರಿ ಮತ್ತು ಹೊಸಪೇಟೆಯಲ್ಲಿ 24x7 ಕುಡಿಯುವ ನೀರು ಪೂರೈಕೆ ಯೋಜನೆಯ ಅನುಷ್ಠಾನ ನಿಧಾನಗತಿ
ಯಲ್ಲಿದ್ದು ಕೂಡಲೇ ಅಧಿಕಾರಿಗಳ ಸಭೆ ನಡೆಸಿ ಸೂಚನೆ ಕೊಡಿ’ ಎಂದು ಸಚಿವರು ಜಿಲ್ಲಾಧಿಕಾರಿಗೆ ಸೂಚಿಸಿದರು.
ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅದಾವತ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಎಲ್. ಜನಾರ್ದನ್, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ ಇದ್ದರು.
‘ಆಂಧ್ರ ಗಡಿಯಲ್ಲಿ ಮುಂಜಾಗ್ರತೆ’
‘ಆಂಧ್ರದಿಂದ ಜಿಲ್ಲೆಗೆ ಬರುವವರ ಆರೋಗ್ಯ ಪರಿಶೀಲನೆಯನ್ನು ಮುಂದುವರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಸಚಿವ ಆನಂದ್‌ಸಿಂಗ್ ತಿಳಿಸಿದರು.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸಂಚರಿಸುವುದಕ್ಕೆ ಮುಕ್ತ ಅವಕಾಶವಿದೆ. ಆದರೆ ಮುಂಜಾಗ್ರತೆ ಸಲುವಾಗಿ ಗಡಿ ಗ್ರಾಮಗಳಿಂದ ಬರುವವರ ಆರೋಗ್ಯ ಪರಿಶೀಲಿಸಲಾಗುವುದು’ ಎಂದರು.
‘ಬಳ್ಳಾರಿ, ಹೊಸಪೇಟೆ, ಸಂಡೂರಿನಲ್ಲಿ ಅತಿ ಹೆಚ್ಚು ಸೋಂಕಿತರು ಕಂಡುಬರುತ್ತಿದ್ದಾರೆ. ಉಳಿದ ತಾಲ್ಲೂಕುಗಳಲ್ಲಿ ಸೋಂಕಿತರು ಮತ್ತು ಸಾವಿನ ಪ್ರಮಾಣ ಕಡಿಮೆಯಾಗಿದೆ. ಅಧಿಕಾರಿಗಳು ಕೋವಿಡ್ ನಿಯಂತ್ರಣ ಹೊಣೆಯ ನೆಪವೊಡ್ಡಿ ದೈನಂದಿನ ಕೆಲಸಗಳನ್ನು ಮಾಡದೇ ನುಣುಚಿಕೊಳ್ಳುತ್ತಿದ್ದಾರೆ ಎಂಬ ದೂರುಗಳು ಬಂದಿವೆ. ಈ ನಿಟ್ಟಿನಲ್ಲಿ ಸರಿಯಾಗಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು.
‘ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸದ್ಯದ ಪರಿಸ್ಥಿತಿಯ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವೆ. ಭೂಮಿ ನೀಡಿರುವ ರೈತರೊಂದಿಗೂ ಚರ್ಚೆ ನಡೆಸಿಯೇ ಕ್ರಮ ಕೈಗೊಳ್ಳಲಾಗುವುದು. ಜಿಂದಾಲ್ ನೌಕರರನ್ನು ಕೆಲಸದಿಂದ ತೆಗೆದಿರುವ ಕುರಿತ ದೂರುಗಳ ಬಗ್ಗೆ ಅರಿವಿದೆ. ಜಿಂದಾಲ್ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದರು.
‘ಕಂಪ್ಲಿಯ ಸಕ್ಕರೆ ಕಾರ್ಖಾನೆಯನ್ನು ಮಾರಾಟ ಮಾಡಲು ಸಾಧ್ಯವಿಲ್ಲ. ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಶಾಸಕ ಜೆ.ಎನ್.ಗಣೇಶ್ ಅವರು ಪ್ರಾಥಮಿಕ ಮಾಹಿತಿಗಳನ್ನು ಮೊದಲು ತಿಳಿದುಕೊಳ್ಳಬೇಕು’ ಎಂದು ಪ್ರತಿಕ್ರಿಯಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.