ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಸಾವಿಗೆ ಸಚಿವ ಆನಂದ್‌ ಸಿಂಗ್‌ ವೈಫಲ್ಯ ಕಾರಣ: ಬಿಸಾಟಿ ಮಹೇಶ್‌

Last Updated 27 ಆಗಸ್ಟ್ 2020, 7:24 IST
ಅಕ್ಷರ ಗಾತ್ರ

ಹೊಸಪೇಟೆ: ‘ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್‌ನಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗಲು ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಅವರ ವೈಫಲ್ಯವೇ ಪ್ರಮುಖ ಕಾರಣ’ ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್(ಡಿ.ವೈ.ಎಫ್.ಐ) ರಾಜ್ಯ ಘಟಕದ ಉಪಾಧ್ಯಕ್ಷ ಬಿಸಾಟಿ ಮಹೇಶ್‌ ಗಂಭೀರ ಆರೋಪ ಮಾಡಿದರು.

‘ಜಿಲ್ಲೆಯಲ್ಲಿ ನಿತ್ಯ ಸರಾಸರಿ ಐದರಿಂದ ಆರು ಜನ ಕೋವಿಡ್‌ಗೆ ಸಾಯುತ್ತಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ 237 ಜನ ಮರಣ ಹೊಂದಿದ್ದಾರೆ. ಆರೋಗ್ಯ ಸಚಿವ ಬಿ. ಶ್ರೀರಾಮುಲು ಆಗಲಿ, ಸಚಿವ ಆನಂದ್‌ ಸಿಂಗ್‌ ಆಗಲಿ ಅದನ್ನು ತಡೆಯಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿಲ್ಲ. ಇಲ್ಲದಿದ್ದರೆ ಇಷ್ಟೊಂದು ಸಾವುಗಳು ಸಂಭವಿಸುತ್ತಿರಲಿಲ್ಲ’ ಎಂದು ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ದಿನೇ ದಿನೇ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಅದೇ ರೀತಿ ಮರಣ ಪ್ರಮಾಣವೂ ಏರಿಕೆಯಾಗುತ್ತಿದೆ. ಆಸ್ಪತ್ರೆಗೆ ದಾಖಲಾಗುವ ಸೋಂಕಿತರು ಗುಣಮುಖರಾಗಿ ಹಿಂತಿರುಗುವ ಸಾಧ್ಯತೆ ಕಡಿಮೆಯಾಗಿದೆ. ಮಲೇರಿಯಾ, ಅಸ್ತಮಾ, ಡೆಂಗಿ, ಮಿದುಳು ಜ್ವರ, ಮೂತ್ರಪಿಂಡದ ಸಮಸ್ಯೆ, ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಸಕಾಲಕ್ಕೆ ಚಿಕಿತ್ಸೆ ಸಿಗದೆ ಸಾವನ್ನಪ್ಪುತ್ತಿದ್ದಾರೆ. ಜನರಲ್ಲಿ ಕೊರೊನಾ ಬಗ್ಗೆ ಭಯ ಮೂಡಿದೆ. ಅದನ್ನು ಹೋಗಲಾಡಿಸುವ ಪ್ರಾಮಾಣಿಕ ಪ್ರಯತ್ನಗಳು ನಡೆದಿಲ್ಲ’ ಎಂದರು.

‘ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ತೆರೆದು ಚಿಕಿತ್ಸೆ ನೀಡಬೇಕೆಂದು ರಾಜ್ಯ ಸರ್ಕಾರ ಆದೇಶ ಮಾಡಿದೆ. ಆದರೆ, ಅದಕ್ಕೆ ಯಾವ ಆಸ್ಪತ್ರೆಯವರು ಬೆಲೆ ಕೊಡುತ್ತಿಲ್ಲ. ಸಣ್ಣಪುಟ್ಟ ಕಾಯಿಲೆಗಳಿಗೆ ಔಷಧ ಮಳಿಗೆಗಳಲ್ಲಿ ಔಷಧ ನೀಡಲು ನಿರಾಕರಿಸುತ್ತಿರುವುದರಿಂದ ಜನ ತೊಂದರೆ ಅನುಭವಿಸುತ್ತಿದ್ದಾರೆ. ಜೆ.ಎಸ್‌.ಡಬ್ಲ್ಯೂ, ಬಿ.ಎಂ.ಎಂ., ಎಸ್‌.ಎಲ್‌.ಆರ್‌. ಕಂಪನಿಯ ನೌಕರರಿಗೆ ಕಾರಣ ನೀಡದೆ ಕೆಲಸದಿಂದ ತೆಗೆದು ಹಾಕಲಾಗುತ್ತಿದೆ. ಇಷ್ಟಾದರೂ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿರುವುದು ಸರಿಯಲ್ಲ’ ಎಂದು ಟೀಕಿಸಿದರು.

‘ಸಾವಿನ ಸಂಖ್ಯೆ ತಗ್ಗಿಸಲು ಸಚಿವ ಆನಂದ್ ಸಿಂಗ್‌ ಮುಂದಾಗಬೇಕು. ಸರ್ಕಾರಿ, ಖಾಸಗಿ ಆಸ್ಪತ್ರೆಗಳ ವೈದ್ಯರ ಸಭೆ ಕರೆದು ವಾಸ್ತವ ಸ್ಥಿತಿ ತಿಳಿದುಕೊಳ್ಳಬೇಕು. ಅದಕ್ಕೆ ಜನಪರ ಕಾಳಜಿ ಹೊಂದಿರುವ ಸಂಘಟನೆಗಳನ್ನು ಆಹ್ವಾನಿಸಬೇಕು’ ಎಂದು ಆಗ್ರಹಿಸಿದರು.
ಫೆಡರೇಶನ್‌ ಜಿಲ್ಲಾ ಅಧ್ಯಕ್ಷ ವಿ.ಸ್ವಾಮಿ, ತಾಲ್ಲೂಕು ಅಧ್ಯಕ್ಷ ಈ.ಮಂಜುನಾಥ, ಕಾರ್ಯದರ್ಶಿ ಕಲ್ಯಾಣಯ್ಯ, ಉಪಾಧ್ಯಕ್ಷ ಕಿನ್ನಾಳ್ ಹನುಮಂತ,ಕೆ. ನಾಗರತ್ನಮ್ಮಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT