ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಯಮ ಉಲ್ಲಂಘಿಸಿ ಪಂಚಾಯಿತಿ ಕಟ್ಟಡ ನಿರ್ಮಾಣ ಕಾಮಗಾರಿ

ಬೈಲುವದ್ದಿಗೇರಿ ಪಂಚಾಯಿತಿ ಸದಸ್ಯರು, ಗ್ರಾಮಸ್ಥರ ಆರೋಪ
Last Updated 18 ಸೆಪ್ಟೆಂಬರ್ 2021, 9:02 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಸರ್ಕಾರದ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ತಾಲ್ಲೂಕಿನ ಬೈಲುವದ್ದಿಗೇರಿ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದು ಪಂಚಾಯಿತಿ ಸದಸ್ಯರು, ಗ್ರಾಮದ ಮುಖಂಡರು ಆರೋಪಿಸಿದರು.

ಗ್ರಾಮ ಪಂಚಾಯಿತಿ ಸದಸ್ಯರಾದ ಪುಷ್ಪಾವತಿ ದೇವರಮನೆ, ವಿ, ಶಾಂತಾ, ಭುವನೇಶ್ವರಿ, ಶಿವರಾಜ ವೆಂಕೋಬಪ್ಪ, ಮುಖಂಡರಾದ ಕೋರಿ ಫಕೀರಪ್ಪ, ಮೂಕಪ್ಪ, ಎನ್‌. ನಾರಾಯಣಪ್ಪ ಶನಿವಾರ ನಗರದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಆರೋಪ ಮಾಡಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ಹೊಸ ಕಾಮಗಾರಿ ಕೈಗೆತ್ತಿಗೊಳ್ಳಬೇಕಾದರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ಅನುಮತಿ ಪಡೆಯುವುದು ಕಡ್ಡಾಯ. ಬಳಿಕ ಟೆಂಡರ್‌ ಕರೆದು, ಕೆಲಸ ಆರಂಭಿಸಬೇಕು. ಎಲ್ಲಕ್ಕಿಂತ ಮುಖ್ಯವಾಗಿ ಗ್ರಾಮಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು. ಇದ್ಯಾವುದೂ ಮಾಡದೆ ಪಂಚಾಯಿತಿ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಕಚೇರಿಗೆ ಸೇರಿದ 15X30 ಅಡಿ ಜಾಗ ಇದೆ. ಅದರ ಪಕ್ಕದಲ್ಲಿ 25X30 ಅಡಿ ವಿಸ್ತೀರ್ಣದ ಗ್ರಾಮ ಮಂದಿರದ ಜಾಗವಿದೆ. ಗ್ರಾಮ ಮಂದಿರದಲ್ಲಿ ಆರಂಭದಿಂದಲೂ ಎಲ್ಲ ಜಾತಿ, ಜನಾಂಗದವರು ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಈಗ ಏಕಾಏಕಿ ಪಂಚಾಯಿತಿ ಹಳೆಯ ಕಟ್ಟಡ, ಗ್ರಾಮ ಮಂದಿರವನ್ನು ತೆರವುಗೊಳಿಸಿ, ಅಲ್ಲಿ ಬೃಹತ್ ಪಂಚಾಯಿತಿ ಕಟ್ಟಡ ನಿರ್ಮಿಸುತ್ತಿದ್ದಾರೆ. ಗ್ರಾಮ ಪಂಚಾಯಿತಿ ಸಭೆಯಲ್ಲಿ ನಿರ್ಣಯ ಅಂಗೀಕರಿಸಿಲ್ಲ. ಗ್ರಾಮ ಸಭೆಯಲ್ಲಿ ವಿರೋಧ ವ್ಯಕ್ತವಾಗಿದ್ದರೂ ಅದನ್ನು ಲೆಕ್ಕಿಸದೆ ಕಾಮಗಾರಿ ಆರಂಭಿಸಿದ್ದಾರೆ ಎಂದು ಆರೋಪಿಸಿದರು.

ಪಂಚಾಯಿತಿಯಲ್ಲಿ ಒಟ್ಟು 23 ಸದಸ್ಯರಿದ್ದಾರೆ. ಈ ಪೈಕಿ ಹತ್ತು ಸದಸ್ಯರಿಗೆ ಕಾಮಗಾರಿಯ ಬಗ್ಗೆ ಮಾಹಿತಿಯೇ ಇಲ್ಲ. ಪಂಚಾಯಿತಿ ಸದಸ್ಯರು, ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಕಾಮಗಾರಿ ಆರಂಭಿಸಿದ್ದಾರೆ. ಕಾಮಗಾರಿ ಹೆಸರಿನಲ್ಲಿ ಹಣ ಲಪಟಾಯಿಸಲು ಹುನ್ನಾರ ನಡೆಸಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ ಅನವಾಳ ಅವರು ಕಾಮಗಾರಿ ತಡೆಯುವುದರ ಬದಲು ಅದರ ಪರ ನಿಂತಿದ್ದಾರೆ. ಈ ಸಂಬಂಧ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಮಧ್ಯ ಪ್ರವೇಶಿಸಿ ಕಾಮಗಾರಿ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಪಂಚಾಯಿತಿ ನೂತನ ಕಟ್ಟಡ ನಿರ್ಮಿಸುವುದಕ್ಕೆ ವಿರೋಧವಿಲ್ಲ. ಆದರೆ, ಕಾನೂನಿನ ಪ್ರಕಾರ ಕೆಲಸ ನಡೆಯಬೇಕು. ಗ್ರಾಮ ಮಂದಿರಕ್ಕೆ ಸೀಮಿತವಾದ ಜಾಗದಲ್ಲಿ ಪಂಚಾಯಿತಿ ಕಟ್ಟಡ ನಿರ್ಮಿಸುವುದು ಸೂಕ್ತವಲ್ಲ. ಯಾವ ಜಾಗ ಯಾವುದಕ್ಕೆ ಮೀಸಲಾಗಿದೆಯೋ ಅದಕ್ಕೆ ಉದ್ದೇಶಕ್ಕೆ ಬಳಕೆಯಾಗಬೇಕು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT