ಗುರುವಾರ , ಜನವರಿ 28, 2021
22 °C

ವಿಜಯನಗರ ಜಿಲ್ಲೆ ರಚನೆ ಅಂತಿಮ ಅಧಿಸೂಚನೆಗೆ ಮಠಾಧೀಶರ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ವಿಜಯನಗರ ಜಿಲ್ಲೆ ರಚನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಬೇಕೆಂದು ಮಠಾಧೀಶರ ಧರ್ಮ ಪರಿಷತ್ತು ಆಗ್ರಹಿಸಿದೆ.

ಈ ಸಂಬಂಧ ಪರಿಷತ್ತಿನ ಸ್ವಾಮೀಜಿಗಳು ಮಂಗಳವಾರ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರಿಗೆ ಬರೆದ ಮನವಿ ಪತ್ರವನ್ನು ನಗರದಲ್ಲಿ ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಸಲ್ಲಿಸಿ ಒತ್ತಾಯಿಸಿದರು.
‘ಅಖಂಡ ಬಳ್ಳಾರಿ ಜಿಲ್ಲೆ ವಿಭಜಿಸಿ ವಿಜಯನಗರ ಪ್ರತ್ಯೇಕ ಜಿಲ್ಲೆ ರಚಿಸಬೇಕು ಎನ್ನುವುದು ಈ ಭಾಗದ ಜನರ ಒಂದುವರೆ ದಶಕದ ಬೇಡಿಕೆಯಾಗಿದೆ. ಅರಣ್ಯ ಸಚಿವ ಆನಂದ್‌ ಸಿಂಗ್‌ ಅವರು ವಿಶೇಷ ಕಾಳಜಿ ವಹಿಸಿ ಜಿಲ್ಲೆ ರಚನೆಗೆ ಸರ್ಕಾರದ ಮೇಲೆ ಒತ್ತಡ ತಂದಿದ್ದಾರೆ. ಅದರ ಪ್ರತಿಫಲವಾಗಿ ಮುಖ್ಯಮಂತ್ರಿಯವರು ಸಂಪುಟದಲ್ಲಿ ವಿಜಯನಗರ ಜಿಲ್ಲೆ ರಚನೆಗೆ ಅನುಮೋದನೆ ನೀಡಿದ್ದಾರೆ. ಈಗ ಅಂತಿಮ ಅಧಿಸೂಚನೆ ಹೊರಡಿಸಿ ಅಂತಿಮ ಮುದ್ರೆ ಒತ್ತಬೇಕು’ ಎಂದು ಆಗ್ರಹಿಸಿದರು.

‘ಜಿಲ್ಲೆಯ ಪಶ್ಚಿಮ ತಾಲ್ಲೂಕುಗಳು ಬಳ್ಳಾರಿ ನಗರದಿಂದ ಬಹಳ ದೂರದಲ್ಲಿವೆ. ವಿಜಯನಗರ ಜಿಲ್ಲೆ ರಚನೆಯಾದರೆ ಹರಪನಹಳ್ಳಿ, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಕೂಡ್ಲಿಗಿ ತಾಲ್ಲೂಕುಗಳ ಸಮಗ್ರ ಅಭಿವೃದ್ಧಿಗೆ ಸಹಾಯವಾಗುತ್ತದೆ. ವಿಜಯನಗರ ಜಿಲ್ಲೆಯ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,  ಆರೋಗ್ಯ, ಪ್ರವಾಸೋದ್ಯಮ ಬೆಳೆಯಲು ಅನುಕೂಲವಾಗುತ್ತದೆ. ಹೊಸಪೇಟೆ ಜಿಲ್ಲಾ ಕೇಂದ್ರ ಮಾಡಿ ಆದಷ್ಟು ಶೀಘ್ರ ಅಂತಿಮ ಅಧಿಸೂಚನೆ ಹೊರಡಿಸಲು ಸರ್ಕಾರ ಕ್ರಮ ತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿದರು.

ಮಠಾಧೀಶರ ಧರ್ಮ ಪರಿಷತ್ತಿನ ನಂದಿಪುರ ಮಹೇಶ್ವರ ಸ್ವಾಮೀಜಿ, ಉತ್ತಂಗಿಯ ಸೋಮಶೇಖರ ಸ್ವಾಮೀಜಿ, ಕೊಟ್ಟೂರು ಚಾನುಕೋಟಿ ಮಠದ ಸಿದ್ಧಲಿಂಗ ಸ್ವಾಮೀಜಿ, ಬೆಣ್ಣಿಹಳ್ಳಿಯ ಪಂಚಾಕ್ಷರಿ ಶಿವಾಚಾರ್ಯ ಸ್ವಾಮೀಜಿ, ಗದ್ದಿಕೇರಿಯ ಚರಂತೇಶ್ವರ ಶಿವಾಚಾರ್ಯ ಸ್ವಾಮೀಜಿ, ಹಗರಿಬೊಮ್ಮನಹಳ್ಳಿಯ ಹಾಲಸಿದ್ದೇಶ್ವರ ಸ್ವಾಮೀಜಿ ಪಾಲ್ಗೊಂಡಿದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು