ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: ಸಾಮೂಹಿಕ ಅತ್ಯಾಚಾರ-ಕೊಲೆ, ರಸ್ತೆತಡೆ, ಯುವತಿಗೆ ಶ್ರದ್ಧಾಂಜಲಿ

Last Updated 5 ಅಕ್ಟೋಬರ್ 2020, 14:36 IST
ಅಕ್ಷರ ಗಾತ್ರ

ಹೊಸಪೇಟೆ: ಉತ್ತರ ಪ್ರದೇಶದ ಹಾಥರಸ್‌ನಲ್ಲಿ ನಡೆದ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ, ಕೊಲೆ ಖಂಡಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಸೋಮವಾರ ಸಂಜೆ ಇಲ್ಲಿನ ವಾಲ್ಮೀಕಿ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ನಗರದ ಚಿತ್ರಕೇರಿಯ ಗರಡಿ ಮನೆ ಬಳಿ ಸೇರಿದ ಕಾರ್ಯಕರ್ತರು, ಅಲ್ಲಿಂದ ವಾಲ್ಮೀಕಿ ವೃತ್ತದವರೆಗೆ ರ್‍ಯಾಲಿ ನಡೆಸಿದರು. ಬಳಿಕ ವಾಲ್ಮೀಕಿ ವೃತ್ತದಲ್ಲಿ ರಸ್ತೆತಡೆ ನಡೆಸಿ, ಮೇಣದ ಬತ್ತಿ ಬೆಳಗಿಸಿ ಯುವತಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ನಂತರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ವಿರುದ್ಧ ಘೋಷಣೆಗಳನ್ನು ಕೂಗಿದರು.

ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್‌ ರಾಜ್ಯ ಘಟಕದ ಉಪಾಧ್ಯಕ್ಷ ಬಿಸಾಟಿ ಮಹೇಶ್‌ ಮಾತನಾಡಿ, ‘ಉತ್ತರ ಪ್ರದೇಶದಲ್ಲಿ ಮೇಲಿಂದ ಮೇಲೆ ಹಿಂದುಳಿದ ವರ್ಗದ ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ಈಗ ಹಾಥರಸ್‌ನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಕೊಲೆ ಮಾಡಲಾಗಿದೆ. ಅಷ್ಟೇ ಅಲ್ಲ, ಆಕೆಯ ಕುಟುಂಬದವರನ್ನು ದೂರವಿಟ್ಟು ರಾತ್ರೋರಾತ್ರಿ ಪೊಲೀಸರು ಅಂತ್ಯಕ್ರಿಯೆ ನಡೆಸಿದ್ದಾರೆ. ಇದು ವ್ಯವಸ್ಥಿತ ಪಿತೂರಿ. ಇಡೀ ಪ್ರಕರಣವನ್ನು ಮುಚ್ಚಿ ಹಾಕುವ ಹುನ್ನಾರವಿದು’ ಎಂದು ಆರೋಪಿಸಿದರು.

‘ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಅವಧಿಯಲ್ಲಿ ದಲಿತರ ಮೇಲೆ ದೌರ್ಜನ್ಯಗಳು ಹೆಚ್ಚಾಗಿವೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ಕೊಡಬೇಕು. ಯುವತಿ ಅತ್ಯಾಚಾರದ ಪ್ರಕರಣದ ತನಿಖೆ ಶೀಘ್ರ ಪೂರ್ಣಗೊಳಿಸಿ, ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು’ ಎಂದು ಒತ್ತಾಯಿಸಿದರು.

ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಸಂಚಾಲಕ ಮರಡಿ ಜಂಬಯ್ಯ ನಾಯಕ, ಸಿಪಿಐಎಂ ಮುಖಂಡರಾದ ಆರ್‌. ಭಾಸ್ಕರ್‌ ರೆಡ್ಡಿ, ತಾಯಪ್ಪ ನಾಯಕ, ಕಾರ್ಮಿಕರ ಸಂಘದ ಜಿಲ್ಲಾ ಅಧ್ಯಕ್ಷ ಎನ್‌. ಯಲ್ಲಾಲಿಂಗ, ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ನಾಗರತ್ನಮ್ಮ, ಭಾರತ ವಿದ್ಯಾರ್ಥಿ ಫೆಡರೇಶನ್‌ ತಾಲ್ಲೂಕು ಅಧ್ಯಕ್ಷ ಜೆ. ಶಿವುಕುಮಾರ ಸೇರಿದಂತೆ ಮೊದಲಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT